ಕನ್ನಡ ಸುದ್ದಿ  /  ಕರ್ನಾಟಕ  /  ಲೈಂಗಿಕ ದೌರ್ಜನ್ಯ ಪ್ರಕರಣ; ಸಿಐಡಿ ಮುಂದೆ ಹಾಜರಾದ ಮಾಜಿ ಸಿಎಂ ಯಡಿಯೂರಪ್ಪ, ಧ್ವನಿ ಮಾದರಿ ಸಂಗ್ರಹ

ಲೈಂಗಿಕ ದೌರ್ಜನ್ಯ ಪ್ರಕರಣ; ಸಿಐಡಿ ಮುಂದೆ ಹಾಜರಾದ ಮಾಜಿ ಸಿಎಂ ಯಡಿಯೂರಪ್ಪ, ಧ್ವನಿ ಮಾದರಿ ಸಂಗ್ರಹ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ದ ದಾಖಲಾಗಿರುವ ಪ್ರಕರಣದಲ್ಲಿ ಧ್ವನಿ ಮಾದರಿ ಸಾಕ್ಷಿಯನ್ನು ಸಿಐಡಿ ಪೊಲೀಸರು ಪಡೆದಿದ್ದಾರೆ.ವರದಿ: ಎಚ್‌.ಮಾರುತಿ. ಬೆಂಗಳೂರು

ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಸಿಐಡಿ ಪೊಲೀಸರ ಮುಂದೆ ಹಾಜರಾಗಿದ್ದಾರೆ.
ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಸಿಐಡಿ ಪೊಲೀಸರ ಮುಂದೆ ಹಾಜರಾಗಿದ್ದಾರೆ.

ಬೆಂಗಳೂರು: ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಅಪ್ರಾಪ್ತ ವಯಸ್ಸಿನ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿಯ ತಾಯಿ ದೂರು ನೀಡಿದ್ದರು. ಈ ಸುದ್ದಿ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರ ಧ್ವನಿಯ ಮಾದರಿಯನ್ನು ಸಂಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ. ಫೆಬ್ರುವರಿ 2ರಂದು ಯಡಿಯೂರಪ್ಪ ಅವರ ಮನೆಯಲ್ಲಿ ಈ ಕೃತ್ಯ ನಡೆದಿದೆ ಎಂದು ಬಾಲಕಿಯ ತಾಯಿ ದೂರು ನೀಡಿದ್ದರು. ಕೃತ್ಯಕ್ಕೆ ಸಾಕ್ಷಿಯಾಗಿ ಕೆಲವು ವಿಡಿಯೊ ಹಾಗೂ ಆಡಿಯೊ ದಾಖಲೆಗಳನ್ನು ನೀಡಿದ್ದರು. ಮಾರ್ಚ್‌ 14ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಟ್ರೆಂಡಿಂಗ್​ ಸುದ್ದಿ

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆ ಸೆಕ್ಷನ್ 8 ಹಾಗೂ ಐಪಿಸಿ ಸೆಕ್ಷನ್ 354 (ಎ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಕುರಿತು ತನಿಖೆ ನಡೆಸಲು ಸರ್ಕಾರ ಆದೇಶಿಸಿತ್ತು. ತನಿಖೆ ಆರಂಭಿಸಿದ ಸಿಐಡಿ ಅಧಿಕಾರಿಗಳು, ಸಿಆರ್‌ಪಿಸಿ 164 ಅಡಿಯಲ್ಲಿ ನ್ಯಾಯಾಧೀಶರ ಎದುರು ಬಾಲಕಿಯ ಹೇಳಿಕೆಯನ್ನು ಈಗಾಗಲೇ ದಾಖಲಿಸಿಕೊಂಡಿದ್ದಾರೆ. ಮಾದರಿ ಧ್ವನಿಮುದ್ರಿಕೆ ಸಂಗ್ರಹಿಸುವುದಕ್ಕಾಗಿ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದ್ದರು.

ಶುಕ್ರವಾರ ಅರಮನೆ ರಸ್ತೆಯಲ್ಲಿರುವ ಸಿಐಡಿ ಕಚೇರಿಗೆ ಯಡಿಯೂರಪ್ಪ ಅವರು ಹಾಜರಾಗಿದ್ದರು. ತನಿಖಾಧಿಕಾರಿಗಳು ಅವರ ಧ್ವನಿಯ ಮಾದರಿಯನ್ನು ದಾಖಲಿಸಿಕೊಂಡಿದ್ದಾರೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

ಪರಿಚಯಸ್ಥರು ಎನ್ನುವ ಕಾರಣಕ್ಕೆ ಕುಟುಂಬವೊಂದಕ್ಕೆ ಸಹಾಯ ಮಾಡಿದ್ದೆ. ಆದರೆ ಅವರೇ ಆ ರೀತಿಯಲ್ಲಿ ಹೇಳಿಕೆಯನ್ನು ದಾಖಲಿಸಿರುವುದು ಆಶ್ವರ್ಯ ತಂದಿದೆ. ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಪ್ರಕರಣದ ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಯಡಿಯೂರಪ್ಪ ಕೆಲವು ದಿನಗಳ ಹಿಂದೆಯೇ ಹೇಳಿದ್ದರು. ಅದರಂತೆಯೇ ಈಗಾಗಲೇ ಪ್ರಕರಣದ ಕುರಿತು ಹೇಳಿಕೆಗಳನ್ನು ಅವರು ದಾಖಲಿಸಿದ್ದಾರೆ. ಈಗ ಧ್ವನಿ ಮಾದರಿ ನೀಡಿದ್ದಾರೆ.

ಮೇಲ್ಸೇತುವೆಯಿಂದ ಹಾರಿ ನವ ವಿವಾಹಿತ ಆತ್ಮಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಮೈಸೂರು ರಸ್ತೆಯ ನಾಯಂಡಹಳ್ಳಿ ಮೇಲ್ಸೇತುವೆಯಿಂದ ಯುವಕನೊಬ್ಬ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

30 ವರ್ಷದ ನವೀನ್ ಮೃತ ದುರ್ದೈವಿ. ಇವರು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್‌) ದಲ್ಲಿ ಗುತ್ತಿಗೆ ನೌಕರರಾಗಿ ಕೆಲಸ‌ ಮಾಡುತ್ತಿದ್ದರು. ಜ್ಞಾನಭಾರತಿ ನಿವಾಸಿಯಾಗಿದ್ದರು. ಎಂದಿನಂತೆ ಶುಕ್ರವಾರ ಬೆಳಿಗ್ಗೆ 8:20 ರ ವೇಳೆಗೆ ನವೀನ್ ತಮ್ಮ ದ್ವಿಚಕ್ರ ವಾಹನದಲ್ಲಿ ಆಗಮಿಸಿದ್ದಾರೆ. ನಾಯಂಡಹಳ್ಳಿ ಮೇಲ್ಸೇತುವೆ ಮೇಲೆ ಬೈಕ್ ನಿಲ್ಲಿಸಿ ಏಕಾಏಕಿ ಮೇಲ್ಸೆತುವೆಯಿಂದ ಕೆಳಗೆ ಹಾರಿದ್ದಾರೆ. ಇವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ನವೀನ್ ಅವರಿಗೆ ನಾಲ್ಕು ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು ಎಂದು ತಿಳಿದು ಬಂದಿದೆ.

ಅಲ್ಲಿಯೇ ಇದ್ದ ಬ್ಯಾಟರಾಯನಪುರ ಸಂಚಾರ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಆದರೆ ಆ ವೇಳೆಗೆ ಅವರ ಜೀವ ಹೋಗಿತ್ತು. ಬ್ಯಾಟರಾಯನಪುರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪ್ರತಿದಿನ ದಂತೆ ನವೀನ್ ಕರ್ತವ್ಯಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದಾರೆ. ಆದರೆ ಏಕೆ ಆತ್ಮಹತ್ಯೆ ಮಾಡಿಕೊಂಡರು ಎನ್ನುವುದು ತಿಳಿದು ಬಂದಿಲ್ಲವಾದರೂ ಬಹುಶಃ ಕೌಟುಂಬಿಕ ಕಲಹ ಕಾರಣ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ವರದಿ: ಎಚ್‌.ಮಾರುತಿ. ಬೆಂಗಳೂರು

IPL_Entry_Point