ಕನ್ನಡ ಸುದ್ದಿ  /  Karnataka  /  Bangalore News Surpur Congress Mla Raja Venkatappa Nayaka Passed Away In Manipal Hospital Rmy

ಬಹು ಅಂಗಾಂಗ ವೈಫಲ್ಯದಿಂದ ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪನಾಯಕ ವಿಧಿವಶ; ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಕಂಬನಿ

ಅನಾರೋಗ್ಯದಿಂದ ಬಳಲುತ್ತಿದ್ದ ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪನಾಯಕ ವಿಧಿವಶರಾಗಿದ್ದಾರೆ.

ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪನಾಯಕ ಬಹು ಅಂಗಾಂಗ ವೈಫಲ್ಯದಿಂದ ವಿಧಿವಶರಾಗಿದ್ದಾರೆ.
ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪನಾಯಕ ಬಹು ಅಂಗಾಂಗ ವೈಫಲ್ಯದಿಂದ ವಿಧಿವಶರಾಗಿದ್ದಾರೆ.

ಬೆಂಗಳೂರು: ಬಹು ಅಂಗಾಂಗಳ ವೈಫಲ್ಯ ದಿಂದ ಬಳಲುತ್ತಿದ್ದ ಕಾಂಗ್ರೆಸ್‌ನ ಸುರಪುರ ಶಾಸಕ ರಾಜಾ ವೆಂಕಟಪ್ಪನಾಯಕ ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು.

ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಸೇರಿದಂತೆ ಗಣ್ಯರು ರಾಜಾ ವೆಂಕಟಪ್ಪನಾಯಕ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಈ ಕುರಿತು ಎಕ್ಸ್‌ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ, ಸುರಪುರದ ಶಾಸಕರು, ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಅತೀವ ನೋವುಂಟುಮಾಡಿದೆ. ಮೂರು ದಿನದ ಹಿಂದೆಯಷ್ಟೇ ಅವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದ್ದೆ.

ಜನಾನುರಾಗಿ ವ್ಯಕ್ತಿತ್ವದ ರಾಜಾ ವೆಂಕಟಪ್ಪ ನಾಯಕ ಅವರ ಅಗಲಿಕೆ ವೈಯಕ್ತಿಕವಾಗಿ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಸುರಪುರ ಶಾಸಕ ರಾಜಾ ವೆಂಕಟಪ್ಪನಾಯಕ ನಿಧನಕ್ಕೆ ಸಿಎಂ ನುಡಿನಮನ

ಬಹಳ ಸಂಭಾವಿತ ರಾಜಕಾರಣಿ. ಕ್ಷೇತ್ರದ ಅಭಿವೃದ್ಧಿ, ಜನರ ಸಮಸ್ಯೆಗಳ ಬಗ್ಗೆಯೇ ಹೆಚ್ಚೆಚ್ಚು ಕಾಳಜಿ ವಹಿಸಿದ್ದರು. ಸೋತಾಗಲೂ ಜನರ ನಡುವೆಯೇ ಇದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು. ವೇರ್ ಹೌಸಿಂಗ್ ಕಾರ್ಪೊರೇಷನ್ ಅಧ್ಯಕ್ಷರಾಗಿ ಕೆಲಸ ಮಾಡಲು ಸಾಧ್ಯವಾಗಲಿಲ್ಲ ಎನ್ನುವ ಬೇಸರ ನನಗಿದೆ. ಮೊನ್ನೆ ಸ್ವಲ್ಪ ಗುಣಮುಖರಾಗುತ್ತಿದ್ದರು. ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎನ್ನುವ ನಿರೀಕ್ಷೆ ಇರಲಿಲ್ಲ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ.

ಶಾಸಕರ ನಿಧನದ ಹಿನ್ನೆಲೆಯಲ್ಲಿ ಸೋಮವಾರದ ಅಧಿವೇಶನವನ್ನು ಸಂತಾಪ ಸೂಚಕವಾಗಿ ಒಂದು ದಿನ ಮುಂದೂಡಲಾಗುವುದು. ಮಂಗಳವಾರ ರಾಜ್ಯಸಭಾ ಚುನಾವಣೆ ಇರುವುದರಿಂದ ಬುಧವಾರಕ್ಕೆ ಅಧಿವೇಶನ ಮುಂದೂಡಬೇಕಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ.

ಜೆಡಿಎಸ್ ನಾಯಕ ಹಾಗೂ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ಸುರಪುರ ವಿಧಾನಸಭೆ ಕ್ಷೇತ್ರದ ಶಾಸಕರಾದ ಶ್ರೀ ರಾಜಾ ವೆಂಕಟಪ್ಪ ನಾಯಕ ಅವರ ನಿಧನದ ವಾರ್ತೆ ಕೇಳಿ ನನಗೆ ಬಹಳ ನೋವುಂಟಾಯಿತು. ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ನಾಯಕರು, ಜನಾನುರಾಗಿಗಳೂ ಆಗಿದ್ದ ಅವರ ನಿಧನ ರಾಜ್ಯ ರಾಜಕಾರಣಕ್ಕೆ ಆಗಿರುವ ಬಹುದೊಡ್ಡ ನಷ್ಟ.

ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಭಿಮಾನಿಗಳು, ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ನಾಯಕರೂ ಕೂಡ ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪನಾಯಕ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

(This copy first appeared in Hindustan Times Kannada website. To read more like this please logon to kannada.hindustantimes.com )

IPL_Entry_Point