ಕನ್ನಡ ಸುದ್ದಿ  /  ಕರ್ನಾಟಕ  /  Monsoon 2024: ಮಳೆಗಾಲ ನಿರ್ವಹಣೆಗೆ ತಾಲ್ಲೂಕು ಮಟ್ಟದಲ್ಲೂ ತಂಡ ರಚಿಸಿ ಸಕ್ರಿಯರಾಗಿರಿ; ಸರ್ಕಾರದ ಕಟ್ಟುನಿಟ್ಟಿನ ಸೂಚನೆ

Monsoon 2024: ಮಳೆಗಾಲ ನಿರ್ವಹಣೆಗೆ ತಾಲ್ಲೂಕು ಮಟ್ಟದಲ್ಲೂ ತಂಡ ರಚಿಸಿ ಸಕ್ರಿಯರಾಗಿರಿ; ಸರ್ಕಾರದ ಕಟ್ಟುನಿಟ್ಟಿನ ಸೂಚನೆ

Rain Season ಕರ್ನಾಟಕದಲ್ಲಿ ಮುಂಗಾರು ಆರಂಭಗೊಂಡಿದ್ದು, ಮಳೆಯಿಂದ ಹಾನಿಯಾಗಬಲ್ಲ ಭಾಗದಲ್ಲಿ ಈಗಿನಿಂದಲೇ ತಂಡ ರಚಿಸಿ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಎಂಟು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಭೆಯನ್ನು ಸಚಿವ ಕೃಷ್ಣಬೈರೇಗೌಡ ನಡೆಸಿದರು.
ಬೆಳಗಾವಿಯಲ್ಲಿ ಎಂಟು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಭೆಯನ್ನು ಸಚಿವ ಕೃಷ್ಣಬೈರೇಗೌಡ ನಡೆಸಿದರು.

ಬೆಳಗಾವಿ: ಪ್ರಸಕ್ತ ಮಾನ್ಸೂನ್‌ ಋತುವಿನಲ್ಲಿ ರಾಜ್ಯಕ್ಕೆ ಉತ್ತಮ ಮಳೆಯಾಗಲಿದೆ. ಹಲವೆಡೆ ಪ್ರವಾಹ ಸ್ಥಿತಿ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಅಧಿಕಾರಿಗಳು ಪ್ರವಾಹ ಪೀಡಿತ ಪ್ರದೇಶಗಳನ್ನು ಮೊದಲೇ ಗುರುತಿಸಿ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಾಕೀತು ಮಾಡಿದರು. ಬೆಳಗಾವಿಯ ಸುವರ್ಣಸೌಧ ಭವನದಲ್ಲಿ ಬೆಳಗಾವಿ ವಿಭಾಗದ ಜಿಲ್ಲೆಗಳ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಹಾಗೂ ಮಳೆ, ಪ್ರವಾಹ ವಿಷಯದ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನಾ ಸಭೆ ನಡೆಸಿದರು. ಮೊದಲಿಗೆ ಕಳೆದ ಒಂದು ವರ್ಷದಲ್ಲಿ ಬೆಳಗಾವಿ ವಿಭಾಗದಲ್ಲಿ ಸಾಕಷ್ಟು ಪ್ರಗತಿ ಕೆಲಸಗಳಾಗಿರುವುದನ್ನು ತಿಳಿಸಿ ಅಧಿಕಾರಿಗಳಿಗೆ ಅಭಿನಂದಿಸಿದರು. ಆದರೂ, ಕೆಲವು ಅಧಿಕಾರಿಗಳು ನಿರೀಕ್ಷಿತ ಮಟ್ಟದಲ್ಲಿ ಕೆಲಸ ನಿರ್ವಹಿಸದಿರುವುದರಿಂದ ಮುಂದಿನ ದಿನಗಳಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸಲು ಸೂಚಿಸಿದರು.

ಮಳೆಗಾಲ ನಿರ್ವಹಣೆ ಬಗ್ಗೆ ಗಮನ ಸೆಳೆದ ಅವರು, ಈ ವರ್ಷದ ಮಳೆಗಾಲದಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ. ಹೀಗಾಗಿ ಹಲವಾರು ಪ್ರದೇಶಗಳು ಪ್ರವಾಹಕ್ಕೆ ತುತ್ತಾಗುವ ಸಾಧ್ಯತೆಗಳಿವೆ. ಜನ ಪ್ರವಾಹಕ್ಕೆ ತುತ್ತಾಗಿ ಅವಘಡಗಳು ಸಂಭವಿಸಿದ ನಂತರ ಅಧಿಕಾರಿಗಳು ಎದ್ದುಬಿದ್ದು ಹೋಗೋದಕ್ಕಿಂತ ಮೊದಲೇ ಒಂದು ತಂಡ ರಚಿಸಿ ಎಲ್ಲರೂ ಒಟ್ಟಾಗಿ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.

ಯಾವ ತಾಲೂಕುಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ, ಯಾವ ಪ್ರದೇಶ ಪ್ರವಾಹಕ್ಕೆ ತುತ್ತಾಗಬಹುದು? ಎಂಬ ಕುರಿತು ಈಗಲೇ ಒಂದು ಪಟ್ಟಿ ತಯಾರಿಸಿ. ಅಂತಹ ಭಾಗದಲ್ಲಿ ಕಂದಾಯ ಇಲಾಖೆ, ಅಗ್ನಿಶಾಮಕ ದಳ, ಪಂಚಾಯತ್‌ ದೊಡ್ಡ-ಸಣ್ಣ ನೀರಾವರಿ ಅಧಿಕಾರಿಗಳನ್ನೊಳಗೊಂಡ ಒಂದು ತಂಡ ರಚಿಸಿ. ಮಳೆಗಾಲ ಮುಗಿಯುವ ವರೆಗೂ ಪ್ರತಿಯೊಂದು ತಾಲೂಕಿನಲ್ಲೂ ಇಂತಹದ್ದೊಂದು ತಂಡ ರಚಿಸಿ ಕಾರ್ಯಪ್ರವೃತ್ತರಾಗಿ, ತುಂಬಾ ಸಮಸ್ಯೆ ಉಂಟಾಗಬಹುದಾದ ಪಂಚಾಯತ್‌ ಮಟ್ಟದಲ್ಲೂ ತಂಡ ರಚಿಸಿ ಎಂದು ಸೂಚಿಸಿದರು.

ಟ್ರೆಂಡಿಂಗ್​ ಸುದ್ದಿ

ಅಲ್ಲದೆ, ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಗಳ ಜೊತೆಗೆ ಪ್ರತಿವಾರ ಸಭೆ ನಡೆಸಬೇಕು, ಮಳೆ-ಪ್ರವಾಹ ಪರಿಸ್ಥಿತಿ ಹತೋಟಿಯಲ್ಲಿರುವ ಬಗ್ಗೆ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಜನರಿಗೆ ಮಾಹಿತಿ ನೀಡಬೇಕು. ಹೀಗೆ ಮಾಡಿದಲ್ಲಿ ಮಾತ್ರ ಜನರಿಗೂ ಸರ್ಕಾರ ಮತ್ತು ಅಧಿಕಾರಿ ವರ್ಗದ ಮೇಲೆ ನಂಬಿಕೆ ಮೂಡುತ್ತದೆ. ನಮ್ಮ ಪ್ರಯತ್ನಗಳ ಬಗ್ಗೆ ವಿಶ್ವಾಸ ಮೂಡುತ್ತದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಬಗರ್ ಹುಕುಂ ಅರ್ಜಿ ವಿಲೇಗೆ ಒತ್ತು

ನಮೂನೆ 50, 53, 57ಕ್ಕೆ ಸಂಬಂಧಿಸಿದಂತೆ ಅಕ್ರಮ-ಸಕ್ರಮಗೊಳಿಸಿ ಸಾಗುವಳಿ ಚೀಟಿ ನೀಡಲು ಕೋರಿ ಲಕ್ಷಾಂತರ ಜನ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಅರ್ಹರಿಗೆ ಮಾತ್ರ ಜಮೀನು ಮಂಜೂರು ಮಾಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಈ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಅವರು, ಈ ಹಿಂದೆ ಬಗರ್ ಹುಕುಂ ಸಾಗುವಳಿ ಚೀಟಿ ನೀಡುವ ವೇಳೆ ಅನರ್ಹರಿಗೂ ಜಮೀನು ಮಂಜೂರು ಮಾಡಲಾಗಿದೆ. ನಿಯಮ ಮೀರಿ ಸಾಕಷ್ಟು ಅಕ್ರಮ ನಡೆಸಲಾಗಿದೆ. ಆದರೆ ಈ ಬಾರಿ ಅಂತಹ ಯಾವುದೇ ಪ್ರಹಸನಗಳಿಗೆ ಆಸ್ಪದ ಇಲ್ಲ. ಬಗರ್ ಹುಕುಂ ಸಭೆಯ ಬಯೋ ಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿ ಪಡೆಯಬೇಕು" ಎಂದು ತಾಕೀತು ಮಾಡಿದರು.

ಬಗರ್ ಹುಕುಂ ಅರ್ಜಿ ವಿಲೇವಾರಿ ಸಂದರ್ಭದಲ್ಲಿ ಅಧಿಕಾರಿಗಳು ಯಾವುದೇ ಪ್ರಭಾವಿಗಳ ಅಥವಾ ರಾಜಕೀಯ ಪಕ್ಷದ ನಾಯಕರಿಗೆ ಅನುಕೂಲವಾಗುವಂತೆ ವರ್ತಿಸಬಾರದು, ಬದಲಾಗಿ ಬಡ ಜನರಿಗೆ ಮತ್ತು ಅರ್ಹರಿಗೆ ನ್ಯಾಯ ಒದಗಿಸಲು ಬದ್ಧರಾಗಿರಬೇಕು. ಮುಂದಿನ 6 ತಿಂಗಳಲ್ಲಿ ಅರ್ಹರಿಗೆ ಸಾಗುವಳಿ ಚೀಟಿ ನೀಡಬೇಕು,ಸಾಗುವಳಿ ಚೀಟಿ ನೀಡುತ್ತಿದ್ದಂತೆ ಹೊಸ ಸರ್ವೇ ನಂಬರ್ ಪೋಡಿಯನ್ನೂ ಸಹ ಒದಗಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೀಟ್ ಆ್ಯಪ್ ಮೂಲಕ ಸರ್ಕಾರಿ ಜಮೀನು ರಕ್ಷಣೆ

ಸರ್ಕಾರಿ ಒತ್ತುವರಿ ತೆರವುಗೊಳಿಸಲು ಈಗಾಗಲೇ ಅಧಿಕಾರಿಗಳಿಗೆ ಬೀಟ್ ಆ್ಯಪ್ ನೀಡಗಿದೆ. ಇದರ ಸಹಾಯದಿಂದ ಸರ್ಕಾರಿ ಆಸ್ತಿಯನ್ನು ಉಳಿಸುವ ಕೆಲಸ ಆಗಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಈ ಬಗ್ಗೆ ಗಮನ ಸೆಳೆದ ಅವರು,ಎಲ್ಲಾ ಜಿಲ್ಲೆಯಲ್ಲೂ ಸರ್ಕಾರಿ ಭೂ ಒತ್ತುವರಿ ದೊಡ್ಡ ಸಮಸ್ಯೆಯಾಗಿದೆ. ಮುಖ್ಯಂತ್ರಿಗಳಿಗೆ ಉತ್ತರ ನೀಡುವುದು ಕಷ್ಟವಾಗಿದೆ. ಹೀಗಾಗಿ ಮೊದಲು ನಮ್ಮ ದಾಖಲೆಯಲ್ಲಿರುವ ಸರ್ಕಾರಿ ಭೂಮಿಯನ್ನು ಗುರುತಿಸಿ ರಕ್ಷಿಸುವ ಕೆಲಸ ಆಗಬೇಕು. ಸರ್ಕಾರಿ ಭೂಮಿಗಳನ್ನು ಗುರುತಿಸಲು " ಬೀಟ್" ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಗ್ರಾಮ ಲೆಕ್ಕಾಧಿಕಾರಿಗಳು ಈ ಆ್ಯಪ್ ಮೂಲಕ ಸರ್ಕಾರಿ ಭೂಮಿಯನ್ನು ಗುರುತಿಸಿ ಒತ್ತುವರಿ ತೆರವಿಗೆ ತಹಶೀಲ್ದಾರ್ ಗೆ ಪ್ರಸ್ತಾಪ ಸಲ್ಲಿಸಬೇಕು. ಅಲ್ಲದೆ, ಪ್ರತಿ ಮೂರು ತಿಂಗಳಿಗೊಮ್ಮೆ ತನ್ನ ವ್ಯಾಪ್ತಿಯ ಸರ್ಕಾರಿ ಭೂಮಿಗೆ ತೆರಳಿ ಪರಿಶೀಲಿಸಿ ಆ್ಯಪ್‌ನಲ್ಲಿ ದಾಖಲಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಟಾರಿಯಾ, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ವಿ. ರಶ್ಮಿ ಮಹೇಶ್‌, ಕಂದಾಯ ಇಲಾಖೆ ಆಯುಕ್ತರಾದ ಸುನೀಲ್‌ ಕುಮಾರ್‌ ಉಪಸ್ಥಿತರಿದ್ದರು.