ಬೆಂಗಳೂರು ಕ್ರೈಮ್: ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಅರೆಸ್ಟ್, ಪೊಲೀಸ್ ಮೇಲೆ ಹಲ್ಲೆ ಮಾಡಿದ್ದ ಮಹಿಳೆಯ ಬಂಧನ
ಬೆಂಗಳೂರು ಅಪರಾಧ ಸುದ್ದಿಗಳು: ಬೆಂಗಳೂರಿನಲ್ಲಿ ವಿದೇಶಿ ಡ್ರಗ್ಸ್ ಪೆಡ್ಲರ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಅತ್ತ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಮಹಿಳೆಯನ್ನು ಬಂಧಿಸಲಾಗಿದೆ. ಇದೇ ವೇಳೆ 31 ಬೈಕ್ ಕಳವು ಮಾಡಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಂಗಳೂರು: ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದ ನೈಜೀರಿಯಾ ದೇಶದ ಡ್ರಗ್ ಪೆಡ್ಲರ್‌ವೊಬ್ಬನನ್ನು ಬಂಧಿಸಿದ್ದಾರೆ. ಆತನಿಂದ 1.50 ಕೋಟಿ ರೂ. ಮೌಲ್ಯದ ಎಂಡಿಎಂಎ ಕ್ರಿಸ್ಟಲ್ ವಶಪಡಿಸಿಕೊಂಡಿದ್ದಾರೆ. ಯುಜೋವುಂ ಲಿವೋನಸ್ ಬಂಧಿತ ನೈಜೀರಿಯಾ ಪ್ರಜೆ. ಈತ ಲಕ್ಕಸಂದ್ರದ ಸಮೀಪ ತನ್ನ ದ್ವಿಚಕ್ರ ವಾಹನವನ್ನು ನಿಲ್ಲಿಸಿಕೊಂಡು ಎಂಡಿಎಂಎ ಕ್ರಿಸ್ಟಲ್ ಅನ್ನು ಮಾರಾಟ ಮಾಡುತ್ತಿದ್ದ. ಆರೋಪಿಯನ್ನು ಬಂಧಿಸಿ 1.3 ಕೆಜಿ ಎಂಡಿಎಂಎ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
2018ರಲ್ಲಿ ಮುಂಬೈನಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ಈತನನ್ನು ಬಂಧಿಸಿ ಎನ್‌ಡಿಪಿಎಸ್ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈಗ ಮತ್ತೊಮ್ಮೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಯು ದೇಶ ವಿದೇಶಗಳಿಂದ ಮಾದಕ ವಸ್ತುಗಳನ್ನು ತರಿಸಿಕೊಂಡು ಪರಿಚಿತ ಪೆಡ್ಲರ್‌ಗಳಿಗೆ ಮಾರಾಟ ಮಾಡುತ್ತಿದ್ದ. ನಂತರ ಅವರು ಕಾಲೇಜು ವಿದ್ಯಾರ್ಥಿಗಳು ಮತ್ತು ಪರಿಚಯಸ್ಥ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಮಹಿಳೆ ಬಂಧನ
ಕರ್ತವ್ಯ ನಿರತ ಸಂಚಾರ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಹಲ್ಲೆ ನಡೆಸಿದ ಮಹಿಳೆಯನ್ನು ಪೊಲೀಸರು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಸಂಚಾರ ನಿಯಮ ಉಲ್ಲಂಘಿಸಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಉತ್ತರ ಭಾರತದ ನಿವಾಸಿ ಸೋನಮ್ ಎಂಬುವರನ್ನು ಕಾನ್‌ಸ್ಟೇಬಲ್ ಪ್ರಶ್ನಿಸಿದ್ದಾರೆ. ಈ ವಿಚಾರಕ್ಕೆ ಮಹಿಳೆ ಸಂಘರ್ಷಕ್ಕಿಳಿದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಕಾಲಿನಿಂದ ಒದ್ದು, ಪೊಲೀಸರ ಕಾಲರ್ ಪಟ್ಟಿ ಹಿಡಿದು ಹಲ್ಲೆ ನಡೆಸಿದ್ದಾರೆ. ಸಾರ್ವಜನಿಕರೊಬ್ಬರು ಈ ದೃಶ್ಯವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮಹಿಳೆಯನ್ನು ಬಂಧಿಸಿ ಬಿಡುಗಡೆ ಮಾಡಿದ್ದಾರೆ.
ಕಾರಿನ ಲಾಕರ್ ತೆರೆದು ಕಳವು ಮಾಡಿದ್ದ ಆರೋಪಿ ಅರೆಸ್ಟ್
ಕಾರಿನ ಲಾಕರ್ ತೆರೆದು ಹಣ ಹಾಗೂ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯೊಬ್ಬನನ್ನು ಬಂಧಿಸಿ 13.75 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈಜಿಪುರದ ಸೈಯದ್ ಮಹಮದ್ ವಾಸಿಫ್ ಬಂಧಿತ ಆರೋಪಿ. ಈತನಿಂದ 2 ಲಕ್ಷ ರೂ. ನಗದು ಮತ್ತು ಒಂದು ಕಾರನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಮಹಿಳೆಯೊಬ್ಬರು ತಮ್ಮ ಪತಿಯನ್ನು ಬಾಣಸವಾಡಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆಸ್ಪತ್ರೆ ಸಮೀಪದ ರಸ್ತೆಯಲ್ಲಿ ಕಾರನ್ನು ನಿಲ್ಲಿಸಿ ಆಸ್ಪತ್ರೆಗೆ ಹೋಗಿದ್ದರು. ಕಾರಿನಲ್ಲಿ ಹಣ ಮತ್ತು ಚಿನ್ನಾಭರಣಗಳನ್ನಿಟ್ಟಿದ್ದರು. ಆರೋಪಿಯು ಸ್ಕೇಲ್ ಬಳಸಿಕೋಂಡು ಕಳವು ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಕಳವು ಸಂಬಂಧ ಮಹಿಳೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯ ಚಿಕಿತ್ಸೆಗೆ ಹಣ ಹೊಂದಿಸಲು ಕಳ್ಳತನ ಮಾಡಿದ್ದಾಗಿ ಆರೋಪಿ ತಿಳಿಸಿದ್ದಾನೆ.
31 ಬೈಕ್ ಕಳವು ಮಾಡಿದ್ದ ಮೂವರು ಆರೋಪಿಗಳ ಬಂಧನ
ಬೆಂಗಳೂರಿನ ವಿವಿಧ ಭಾಗಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ 18 ಲಕ್ಷ ರೂ. ಮೌಲ್ಯದ 31 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ಅಫ್ಜಲ್ ಮತ್ತು ಸಲ್ಮಾನ್ ಎಂಬುವರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಇವರಿಬ್ಬರ ಬಂಧನದಿಂದ 11 ಕಳವು ಪ್ರಕರಣಗಳು ಪತ್ತೆಯಾಗಿವೆ. ಆರೋಪಿಗಳು ಕದ್ದ ವಾಹನಗಳಲ್ಲಿ ವ್ಹೀಲಿಂಗ್ ಮಾಡುತ್ತಿದ್ದರು. ಜಾಲಿ ರೈಡ್ ಮಾಡುವ ಉದ್ಧೇಶದಿಂದ ಕಳವು ಮಾಡುತ್ತಿದ್ದುದಾಗಿ ಆರೋಪಿಗಳು ಹೇಳಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಮಡಿವಾಳ ಪೊಲೀಸರು ಇನ್ನೊಬ್ಬ ಆರೋಪಿಯನ್ನು ಬಂಧಿಸಿ 10 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈತನ ಬಂಧನದಿಂದ 9 ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನಷ್ಟು ಅಪರಾಧ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ | Crime News: ಮಂಗಳೂರು ಹೊರವಲಯದಲ್ಲಿ ಯುವಕರ ನಡುರಾತ್ರಿಯ ತಲವಾರ್ ಕಾಳಗ; ಇಬ್ಬರ ಸ್ಥಿತಿ ಗಂಭೀರ