ಬೆಂಗಳೂರು: ಬಿಎಸ್ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು, ಪೋಕ್ಸೊ ಕೇಸ್ ರದ್ದು ಇಲ್ಲ ಎಂದ ಕರ್ನಾಟಕ ಹೈಕೋರ್ಟ್
BS Yediyurappa: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪೋಕ್ಸೊ ಕೇಸ್‌ನಲ್ಲಿ ದೊಡ್ಡ ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್, ಪೋಕ್ಸೊ ಕೇಸ್ ರದ್ದು ಇಲ್ಲ ಎಂದು ಸ್ಪಷ್ಟಪಡಿಸಿದೆ.

ಬೆಂಗಳೂರು: 'ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕೋ) ಕಾಯ್ದೆ' ಕೇಸ್‌ನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್, ಪೋಕ್ಸೊ ಕೇಸ್ ರದ್ದು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ 'ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ' ಅಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಇಂದು (ಫೆ 7), ಅವರಿಗೆ ಮಧ್ಯಂತರವಾಗಿ ರಿಲೀಫ್ ನೀಡಿದೆ. ಇದರೊಂದಿಗೆ, ವಿಚಾರಣಾ ನ್ಯಾಯಾಲಯ ತನ್ನ ವಿಚಾರಣಾ ಪ್ರಕ್ರಿಯೆ ಮುಂದುವರಿಸಲು ಅವಕಾಶ ನೀಡಿದಂತಾಗಿದೆ.
ಪೋಕ್ಸೊ ಕೇಸ್ ರದ್ದುಗೊಳಿಸಲು ಮಾಜಿ ಸಿಎಂ ಯಡಿಯೂರಪ್ಪ ಅರ್ಜಿ- ಏನಿದು ಕೇಸ್
ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ ಕೇಸ್ ರದ್ದುಪಡಿಸುವಂತೆ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ಕುರಿತ ವಿಚಾರಣೆಯನ್ನು ಜ.17ರಂದು ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಶುಕ್ರವಾರಕ್ಕೆ (ಫೆ 7) ತೀರ್ಪು ಕಾಯ್ದಿರಿಸಿತ್ತು. ಪ್ರಕರಣದ ಕುರಿತು ಸದಾಶಿವನಗರ ಠಾಣಾ ಪೊಲೀಸರು 2024ರ ಮಾ.14ರಂದು ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಅದನ್ನು ರದ್ದುಪಡಿಸಲು ಕೋರಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು 2024ರ ಜೂ.13ರಂದು ಕರ್ನಾಟಕ ಹೈಕೊರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಜೂ.14ರಂದು ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣದ ತನಿಖೆಗೆ ತಡೆ ನೀಡಲು ನಿರಾಕರಿಸಿತ್ತು. ಆದಾಗ್ಯೂ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಸಿಐಡಿ ತನಿಖಾಧಿಕಾರಿಗಳಿಗೆ ಹೈಕೋರ್ಟ್ ನ್ಯಾಯಪೀಠ ಸೂಚಿಸಿತ್ತು.
ನಂತರ ಪ್ರಕರಣದ ಕುರಿತು ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಖುದ್ದು ಹಾಜರಾಗುವುದರಿಂದ ಯಡಿಯೂರಪ್ಪ ಅವರಿಗೆ ವಿನಾಯಿತಿ ನೀಡಿ, 2024ರ ಜು.12ರಂದು ಹೈಕೋರ್ಟ್ ಮತ್ತೊಂದು ಆದೇಶ ಮಾಡಿತ್ತು. ಅಂತಿಮವಾಗಿ 2025ರ ಜ.17ರಂದು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.
ಈಗ ಬಂದಿರುವ ತೀರ್ಪಿನ ಪ್ರಕಾರ, ಪೋಕ್ಸೊ ಕೇಸ್ ವಿಚಾರಣೆ ಮುಂದುವರಿಯಲಿದೆ. ವಿಚಾರಣಾ ನ್ಯಾಯಾಲಯ ಈ ಕೇಸ್‌ಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ತೀರ್ಪು ನೀಡುವುದಕ್ಕೆ ಅವಕಾಶ ಸಿಕ್ಕಂತಾಗಿದೆ. ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸುವುದಕ್ಕೆ ವಾದಿ, ಪ್ರತಿವಾದಿಗಳಿಗೆ ಅವಕಾಶ ಇರುವುದನ್ನು ಕೋರ್ಟ್ ಖಚಿತಪಡಿಸಿದೆ.
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಕೇಸ್ ಹಿನ್ನೆಲೆ
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಕೇಸ್ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ 2024ರ ಮಾರ್ಚ್ 3 ರಂದು ದಾಖಲಾಗಿತ್ತು. ಈ ದೂರಿನ ಆಧಾರದ ಮೇಲೆ ಪೊಲೀಸರು ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೊ ಪ್ರಕಾರ ಎಫ್‌ಐಆರ್ ದಾಖಲಿಸಿದ್ದರು. ಪ್ರಕರಣದ ಗಾಂಭೀರ್ಯವನ್ನು ಪರಿಗಣಿಸಿದ ಕರ್ನಾಟಕ ಸರ್ಕಾರವು ಈ ಕೇಸ್ ಅನ್ನು ಸಿಐಡಿಗೆ ವರ್ಗಾವಣೆ ಮಾಡಿತ್ತು.
ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದರಂತೆ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಗಳನ್ನು ನೀಡಿದ್ದರು. ಈ ನಡುವೆ, ತಮ್ಮ ವಿರುದ್ಧದ ಪೋಕ್ಸೊ ಕೇಸ್ ರದ್ದುಗೊಳಿಸಬೇಕು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುಬೇಕು ಎಂದು ಕೋರಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕರ್ನಾಟಕ ಹೈಕೋರ್ಟ್‌ನಲ್ಲಿ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಅದರ ವಿಚಾರಣೆ ನಡೆದು ಇಂದು (ಫೆ 7) ತೀರ್ಪು ಪ್ರಕಟವಾಗಿದೆ.
