ಗಣರಾಜ್ಯೋತ್ಸವಕ್ಕೆ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜು; ರಾಜ್ಯಪಾಲರಿಂದ ಧ್ವಜಾರೋಹಣ, ಆಕರ್ಷಕ ಪಥಸಂಚಲನ-ಸಾಂಸ್ಕೃತಿಕ ಕಾರ್ಯಕ್ರಮ
ಗಣರಾಜ್ಯೋತ್ಸವಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗುತ್ತಿದೆ. ಜನವರಿ 26ರಂದು ಬೆಳಗ್ಗೆ 8.58ಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. ಆ ಬಳಿಕ ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. (ವರದಿ: ಎಚ್.ಮಾರುತಿ, ಬೆಂಗಳೂರು)

ಬೆಂಗಳೂರು: ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಪ್ರಸಕ್ತ ಸಾಲಿನ ಗಣರಾಜ್ಯೋತ್ಸವ ದಿನಾಚರಣೆಯನ್ನು ವೈಭವದಿಂದ ಆಚರಿಸಲಾಗುತ್ತಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್.ಜಿ, ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಅನುಚೇತ್ ಸಿದ್ದತೆಗಳನ್ನು ಪರಿಶೀಲಿಸಿದ್ದಾರೆ. ಜನವರಿ 26ರಂದು ಬೆಳಗ್ಗೆ 8.58ಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ತೆರೆದ ಜೀಪ್‌ನಲ್ಲಿ ಪರೇಡ್ ಪರಿವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕರಿಸಿ ನಾಡಿನ ಜನತೆಗೆ ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ.
ಪೊಲೀಸರು, ಸ್ಕೌಟ್ಸ್ ಮತ್ತು ಗೈಡ್ಸ್, ಎನ್‌ಸಿಸಿ, ಸೇವಾದಳ ಹಾಗೂ ವಿವಿಧ ಶಾಲೆಗಳ ಮಕ್ಕಳು ಪಥಸಂಚಲನ, ಕವಾಯತು ಮತ್ತು ಬ್ಯಾಂಡ್‌ನಲ್ಲಿ 1150 ಮಂದಿ ಭಾಗವಹಿಸಲಿದ್ದಾರೆ. 1500 ಶಾಲಾ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ. ಪೊಲೀಸ್ ಮಿಲಿಟರಿ ಪಡೆಗಳು ಕೂಡಾ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳ ನಂತರ ರಾಜ್ಯಪಾಲರು ವಿಜೇತರಿಗೆ ಬಹುಮಾನ ವಿತರಣೆ ಮಾಡಲಿದ್ದಾರೆ.
ಕಿಕ್ಕೇರಿ ಕೃಷ್ಣಮೂರ್ತಿ ಮತ್ತು ತಂಡದಿಂದ ನಾಡಗೀತೆ ಮತ್ತು ರೈತಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಬೆಂಗಳೂರು ದಕ್ಷಿಣ ವಲಯ-3 ಅಗರದ ಕರ್ನಾಟಕ ಪಬ್ಲಿಕ್ ಶಾಲೆಯ 800 ಮಕ್ಕಳು 'ನಾವೆಲ್ಲರೂ ಒಂದೇ ನಾವು ಭಾರತೀಯರು' ಹಾಗೂ ಹೇರೋಹಳ್ಳಿಯ ಬಿಬಿಎಂಪಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ 650 ಮಕ್ಕಳು 'ಅರಿವೇ ಅಂಬೇಡ್ಕರ್' ಕುರಿತು ನೃತ್ಯ ಪ್ರದರ್ಶಿಸಲಿದ್ದಾರೆ. ಗೂರ್ಖಾ ರೈಫಲ್ಸ್ ತಂಡದಿಂದ ಖುಕ್ರಿ ನೃತ್ಯ ಹಾಗೂ ಪಂಜಾಬ್‌ನ ಸೈನಿಕರಿಂದ ಭಾಂಗ್ರಾ ಪಂಜಾಬಿ ಜಾನಪದ ನೃತ್ಯ ಮತ್ತು ಗ್ಯಾಟ್ಕಾ ಟೀಮ್, ಮೈಸೂರಿನ ಕೆಐಆರ್‌ಪಿ ಮೌಂಟೆಡ್ ಪೊಲೀಸ್ ತಂಡದಿಂದ ಟೆಂಟ್ ಪೆಗ್ಗಿಂಗ್ ನಡೆಯಲಿದೆ.
ವೈದ್ಯಕೀಯ ವ್ಯವಸ್ಥೆ
ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ವೀಕ್ಷಿಸಲು ಆಗಮಿಸುವ ಅತಿಗಣ್ಯ, ಗಣ್ಯ ಹಾಗೂ ಇತರ ಸಾರ್ವಜನಿಕರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ಆಂಬುಲೆನ್ಸ್, ವೈದ್ಯಕೀಯ ಹಾಗೂ ವೈದ್ಯಕೀಯೇತರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹಲವು ಆಸ್ಪತ್ರೆಗಳನ್ನು ಗುರುತಿಸಿ ಅಗತ್ಯ ಸಂಖ್ಯೆಯಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ.
ಭದ್ರತಾ ವ್ಯವಸ್ಥೆ
ಗಣರಾಜ್ಯೋತ್ಸವ ದಿನಾಚರಣೆ ವೇಳೆ ಅಹಿತಕರ ಘಟನೆಗಳು ನಡೆಯದಂತೆ ನಗರದಲ್ಲಿ ಭದ್ರತೆಗಾಗಿ 8 ಮಂದಿ ಡಿಸಿಪಿ, 17 ಮಂದಿ ಎಸಿಪಿ, 44 ಮಂದಿ ಪಿಐ, 114 ಮಂದಿ ಪಿಎಸ್ಐ, 58 ಮಂದಿ ಎಎಸ್ಐ, 80 ಸಿಬ್ಬಂದಿ, 30 ಜನ ಕ್ಯಾಮೆರಾ ಸಿಬ್ಬಂದಿ ಸೇರಿದಂತೆ ಒಟ್ಟು 1051 ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಬಂದೋಬಸ್ತ್‌ಗೆ 10 ಕೆಎಸ್ಆರ್‌ಪಿ ತುಕಡಿ, 2 ಅಗ್ನಿಶಾಮಕ ವಾಹನ, ಕ್ಷಿಪ್ರ ಕಾರ್ಯಾಚರಣೆ ತಂಡವೂ ಇರುತ್ತದೆ. ಮೈದಾನದ ಸುತ್ತ 103 ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ. ಮಾಣಿಕ್ ಷಾ ಮೈದಾನ ಬಂದೋಬಸ್ತ್ ಕರ್ತವ್ಯಕ್ಕಾಗಿ 10 ಕೆಎಸ್ಆರ್‌ಪಿ/ಸಿಎಆರ್ ತುಕಡಿಗಳು, 2 ಅಗ್ನಿಶಾಮಕ ವಾಹನಗಳು, 2 ಅಂಬುಲೆನ್ಸ್, 1 ಕ್ಷಿಪ್ರ ಕಾರ್ಯಾಚರಣೆ ಪಡೆ, 1 ಆರ್‌ಐಪಿ ಪಡೆಯನ್ನು ಭದ್ರತಾ ವ್ಯವಸ್ಥೆಗೆ ನಿಯೋಜಿಸಲಾಗಿದೆ. ಮೈದಾನದ ಸುತ್ತ ಭದ್ರತೆ ಮತ್ತು ಸುರಕ್ಷತೆಗಾಗಿ 103 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ವಿವಿಧ ಗೇಟ್‌ಗಳಲ್ಲಿ ಪ್ರವೇಶಕ್ಕೆ ಅವಕಾಶ
ಕಲರ್ ಕೋಡ್‌ಗಳ ಮೂಲಕ ಪಾಸ್ ವಿತರಿಸಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಪಿಂಕ್ ಬಣ್ಣದ ಪಾಸ್ ನೀಡಲಾಗುತ್ತದೆ. ವಿಐಪಿ ಪಾಸ್ ಹೊಂದಿರುವವರು ಗೇಟ್-2ರ ಮೂಲಕ ಪ್ರವೇಶಿಸಬಹುದಾಗಿದೆ. ಮುಖ್ಯ ಅತಿಥಿಗಳು, ಗಣ್ಯರು ಗೇಟ್-3 ಮೂಲಕ ಪ್ರವೇಶಿಸಬಹುದು. ಗೇಟ್-4ರಲ್ಲಿ ಬಿಳಿ ಪಾಸ್ ನೀಡಲಾಗುತ್ತದೆ ಮತ್ತು ಇಲ್ಲಿ ಮಾಧ್ಯಮದವರಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.
ಜ.26ರಂದು ಬೆಳಗ್ಗೆ 8.30ರಿಂದ 10.30ರವರೆಗೆ ಕಬ್ಬನ್ ರಸ್ತೆ, ಕಾಮರಾಜ ರಸ್ತೆ, ಬಿಆರ್‌ವಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ರಸ್ತೆಗಳಲ್ಲಿ ಸಂಚರಿಸಲು ನಗರ ಸಂಚಾರ ಪೊಲೀಸರ ಸೂಚನೆ ನೀಡಿದ್ದಾರೆ. ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತ, ಶಿವಾಜಿನಗರ ಬಸ್ ನಿಲ್ದಾಣ, ಕಬ್ಬನ್ ರಸ್ತೆ, ಸಿಟಿಒ ವೃತ್ತದಿಂದ ಕೆಆರ್ ರಸ್ತೆ, ಕಬ್ಬನ್ ಜಂಕ್ಷನ್‌ವರೆಗೆ, ಎಂಜಿ ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.
ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರೂ ಪಾಸ್ ಮತ್ತು ಗುರುತಿನ ಚೀಟಿಯನ್ನು ಹೊಂದಿರಬೇಕು. ಪರ್ಸ್ ಮತ್ತು ಮೊಬೈಲ್ ಹೊರೆತುಪಡಿಸಿ ಬೇರೆ ಯಾವುದೇ ವಸ್ತುಗಳನ್ನು ಕಾರ್ಯಕ್ರಮಕ್ಕೆ ತರುವಂತಿಲ್ಲ ಎಂದು ಸೂಚಿಸಲಾಗಿದೆ.
ವರದಿ: ಎಚ್.ಮಾರುತಿ, ಬೆಂಗಳೂರು
