ಬಿಬಿಎಂಪಿ ವ್ಯಾಪ್ತಿಯಲ್ಲಿ 5 ಗ್ಯಾರೆಂಟಿ ಯೋಜನೆ ಅನುಷ್ಠಾನಕ್ಕೆ ಸಹಾಯವಾಣಿ ಶುರು; ಕುಂದುಕೊರತೆ ಅಹವಾಲು ಸಲ್ಲಿಸುವ ನಂಬರ್ ಮತ್ತು ವಿವರ ಇಲ್ಲಿದೆ
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ 5 ಗ್ಯಾರೆಂಟಿ ಯೋಜನೆಗಳನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸುವುದಕ್ಕೆ ಸಹಾಯವಾಣಿ ಶುರುವಾಗಿದೆ. ಕುಂದುಕೊರತೆ ದೂರು ದಾಖಲಿಸಿಕೊಂಡು ಸ್ಪಂದಿಸುವಂತೆ ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಜಿ. ಕೃಷ್ಣಪ್ಪ ಸೂಚಿಸಿದರು. ಸಹಾಯವಾಣಿ ಸಂಖ್ಯೆ ಮತ್ತು ಇತರೆ ವಿವರ ಇಲ್ಲಿದೆ.
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಕುಂದುಕೊರತೆಗಳನ್ನು ಆಲಿಸುವುದಕ್ಕಾಗಿ ಸಹಾಯವಾಣಿಯನ್ನು ಶುರುಮಾಡಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಜಿ. ಕೃಷ್ಣಪ್ಪ ತಿಳಿಸಿದರು.
ಅವರು ಬುಧವಾರ (ಆಗಸ್ಟ್ 28) ಬಿಬಿಎಂಪಿ ವ್ಯಾಪ್ತಿಯ ವಿಧಾನ ಸಭಾ ಕ್ಷೇತ್ರಗಳಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಾರ್ಯಸೂಚಿಯ ಸಭೆ ನಡೆಸಿದ ಬಳಿಕ ಈ ವಿಚಾರ ಸುದ್ದಿಗಾರರಿಗೆ ತಿಳಿಸಿದರು.
ಬಿಬಿಎಂಪಿ ವ್ಯಾಪ್ತಿಯ ವಿಧಾನ ಸಭಾ ಕ್ಷೇತ್ರಗಳಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 28 ವಿಧಾನ ಸಭಾ ಕ್ಷೇತ್ರಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ರಚಿಸಿರುವ ಸಮಿತಿಯ ಅಧ್ಯಕ್ಷ ಕೃಷ್ಣಪ್ಪ ಅವರು ಕಾರ್ಯಸೂಚಿಯ ವಿಷಯವಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಇಂದು ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿದರು.
ಇದೇ ವೇಳೆ ಅವರು, ಪಾಲಿಕೆ ವ್ಯಾಪ್ತಿಯಲ್ಲಿ 5 ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ, ಅನ್ನ ಭಾಗ್ಯ ಯೋಜನೆ, ಗೃಹ ಜ್ಯೋತಿ ಯೋಜನೆ ಹಾಗೂ ಯುವ ಶಕ್ತಿ ಯೋಜನೆಗಳ ಕುರಿತಾಗಿ ಸಾರ್ವಜನಿಕರು ಅಗತ್ಯ ಮಾಹಿತಿ ನೀಡಲು ಸಹಾಯವಾಣಿ ಶುರು ಮಾಡಿರುವ ವಿಚಾರ ತಿಳಿಸಿದರು.
ಬೆಂಗಳೂರಿನಲ್ಲಿ ಈ ಸಹಾಯವಾಣಿಯು ಗ್ಯಾರೆಂಟಿ ಯೋಜನೆಗಳ ಮಾಹಿತಿ ನೀಡುವುದಕ್ಕಷ್ಟೇ ಅಲ್ಲ, ದೂರು ದಾಖಲಿಸುವ ಸಹಾಯವಾಣಿಯಾಗಿಯೂ ಕೆಲಸ ಮಾಡಲಿದೆ ಎಂದು ಕೃಷ್ಣಪ್ಪ ಅವರು ವಿವರಿಸಿದರು.
ಸಾರ್ವಜನಿಕರ, ಫಲಾನುಭವಿಗಳ ಅಹವಾಲುಗಳಿಗೆ ಕೂಡಲೇ ಸ್ಪಂದಿಸಲು ಅಧಿಕಾರಿಗಳಿಗೆ ಸೂಚನೆ
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಾದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಸಾರ್ವಜನಿಕರಿಂದ ಯಾವುದಾದರು ಅಹವಾಲು ಅಥವಾ ದೂರು ಬಂದರೆ ತಕ್ಷಣ ಸಂಬಂಧಪಟ್ಟ ಇಲಾಖೆಯ ನೋಡಲ್ ಅಧಿಕಾರಿಗಳಿಗೆ ಮಾಹಿತಿ ನೀಡಿ, ಕುಂದುಕೊರತೆಗಳನ್ನು ಪರಿಶೀಲಿಸಿ, ಯಾವುದೇ ಅರ್ಹ ಫಲಾನುಭವಿಗಳು ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗದಂತೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಕೃಷ್ಣಪ್ಪ ಸೂಚಿಸಿದರು.
ಗ್ಯಾರೆಂಟಿ ಯೋಜನೆಯ ಸಹಾಯವಾಣಿಯಾಗಿ ಮೊಬೈಲ್ ದೂರವಾಣಿ ಸಂಖ್ಯೆ 9480683972 ಯನ್ನು ನೀಡಲಾಗಿದೆ. ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಂಡು ಸರ್ಕಾದರ ಮಹತ್ವಾಕಾಂಕ್ಷೆ ಯೋಜನೆಗಳ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೃಷ್ಣಪ್ಪ ಹೇಳಿದರು.
ಈ ವೇಳೆ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಜನಾರ್ಧನ್, ರಮೇಶ್ ಹೆಚ್, ನೌಶೀರ್ ಅಹ್ಮದ್, ಬಿ.ಎಸ್ ಗೋಪಾಲ ಕೃಷ್ಣ, 28 ವಿಧಾನಸಭಾ ಕ್ಷೇತ್ರಗಳ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ವಿಭಾಗದ ವಿಶೇಷ ಆಯುಕ್ತರು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿ ಅವಿನಾಶ್ ಮೆನನ್ ರಾಜೇಂದ್ರನ್, ಗ್ಯಾರಂಟಿ ಯೋಜನೆಗಳಿಗೆ ಸಂಬಂಧಪಟ್ಟ ಇಲಾಖೆಗಳ ನೋಡಲ್ ಅಧಿಕಾರಿಗಳು ಹಾಗೂ ಇನ್ನಿತರೆ ಸಂಬಂಧಪಟ್ಟ ಬಿಬಿಎಂಪಿ ಅಧಿಕಾರಿಗಳು ಉಪಸ್ಥಿತರಿದ್ದರು.