MUDA Scam; ರಾಜೀನಾಮೆ ನೀಡಲ್ಲ, ಕಾನೂನು ಹೋರಾಟ ಮುಂದುವರಿಸುವೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲರ ಕ್ರಮದ ನಂತರ ಮೊದಲ ಪ್ರತಿಕ್ರಿಯೆ-bengaluru news cm siddaramaiah 1st reaction after governors nod to prosecution in muda scam uks ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Muda Scam; ರಾಜೀನಾಮೆ ನೀಡಲ್ಲ, ಕಾನೂನು ಹೋರಾಟ ಮುಂದುವರಿಸುವೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲರ ಕ್ರಮದ ನಂತರ ಮೊದಲ ಪ್ರತಿಕ್ರಿಯೆ

MUDA Scam; ರಾಜೀನಾಮೆ ನೀಡಲ್ಲ, ಕಾನೂನು ಹೋರಾಟ ಮುಂದುವರಿಸುವೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲರ ಕ್ರಮದ ನಂತರ ಮೊದಲ ಪ್ರತಿಕ್ರಿಯೆ

Mysuru Land Case; ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಕಾನೂನು ಹೋರಾಟ ಮಾಡಲು ತೀರ್ಮಾನಿಸಲಾಗಿದೆ. ಇದು ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರ. ಹೀಗಾಗಿ ರಾಜೀನಾಮೆ ನೀಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಜೀನಾಮೆ ನೀಡಲ್ಲ, ಕಾನೂನು ಹೋರಾಟ ಮುಂದುವರಿಸುವೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರ ಕ್ರಮದ ನಂತರ ನೀಡಿದ ಮೊದಲ ಪ್ರತಿಕ್ರಿಯೆ ಇದಾಗಿದೆ.
ರಾಜೀನಾಮೆ ನೀಡಲ್ಲ, ಕಾನೂನು ಹೋರಾಟ ಮುಂದುವರಿಸುವೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರ ಕ್ರಮದ ನಂತರ ನೀಡಿದ ಮೊದಲ ಪ್ರತಿಕ್ರಿಯೆ ಇದಾಗಿದೆ.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟುಗಳ ಹಂಚಿಕೆಯಲ್ಲಿ ಆಗಿರುವ ಅಕ್ರಮದ (ಮುಡಾ ಹಗರಣ) ವಿಚಾರದಲ್ಲಿ ರಾಜ್ಯಪಾಲರ ಕ್ರಮ ಸಂವಿಧಾನ ಬಾಹಿರ. ಅದರ ವಿರುದ್ಧ ಕಾನೂನು ಹೋರಾಟ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು (ಆಗಸ್ಟ್ 17) ಮುಡಾ ಕೇಸ್‌ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಣೆಗೆ ಅನುಮತಿ ನೀಡಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಮೊದಲ ಪ್ರತಿಕ್ರಿಯೆ ಇದು.

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಅವರು ಅನುಮತಿ ನೀಡಿದ್ದಾರೆ. ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿರುವ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್‌ ಅವರಿಗೆ ರಾಜ್ಯಪಾಲರು ರವಾನಿಸಿದ್ದಾರೆ.

ಈ ವಿದ್ಯಮಾನದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಆರೋಪಿಸಿದರು.

ರಾಜ್ಯಪಾಲರ ಸಂವಿಧಾನ ಬಾಹಿರ ನಿರ್ಣಯದ ವಿರುದ್ಧ ಕಾನೂನು ಹೋರಾಟ

ಕರ್ನಾಟಕ ರಾಜ್ಯದ ಚುನಾಯಿತ ಸರ್ಕಾರವನ್ನು ಅಭ್ರಗೊಳಿಸುವ ದೊಡ್ಡ ಷಡ್ಯಂತ್ರ ಇದು. ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲವು ಮುಖಂಡರು ಈ ಷಡ್ಯಂತ್ರದ ಹಿಂದೆ ಕೆಲಸ ಮಾಡಿದ್ದು, ಉತ್ತರಾಖಂಡ, ಜಾರ್ಖಂಡ್, ನವದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಅಂಥದ್ದೇ ಪ್ರಯೋಗ ಮಾಡಿದ್ದಾರೆ. ಮೇಲ್ನೋಟಕ್ಕೆ ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ. ಹೀಗಿರುವಾಗ ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದೆ. ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ , ಜನಾರ್ಧನ ರೆಡ್ಡಿಯವರ ವಿರುದ್ಧ ದೂರು ನೀಡಲಾಗಿದೆ. ಅವರ ವಿರುದ್ಧ ವಿಚಾರಣೆಗೆ ಅನುಮತಿ ಕೋರಿದಾಗ ಅದಕ್ಕೆ ಸ್ಪಂದಿಸ ರಾಜ್ಯಪಾಲರು, ಇದುವರೆಗೆ ಯಾವುದೇ ಕ್ರಮ ತಗೊಂಡಿಲ್ಲ. ನವೆಂಬರ್ ತಿಂಗಳಲ್ಲಿ ಹೆಚ್.ಡಿ. ಕುಮಾರಸ್ವಾಮಿಯವರ ಮೇಲೆ ಅನಧಿಕೃತ ಗಣಿಗಾರಿಕೆ ಪರವಾನಗಿ ನೀಡಿರುವ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೋರಿದ್ದರೂ ಯಾವುದೇ ಕ್ರಮವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದರು.

ರಾಜೀನಾಮೆ ನೀಡುವ ಪ್ರಶ್ನೆಯಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ನನ್ನ ವಿರುದ್ದ ದೂರು ಬಂದ ದಿನವೇ, ರಾಜಭವನದಿಂದ ಶೋಕಾಸ್ ನೋಟೀಸ್ ಬಂದಿತ್ತು. ರಾಜ್ಯಪಾಲರ ಈ ನಡೆಯನ್ನು ನಿರೀಕ್ಷಿಸಲಾಗಿತ್ತು. ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಇದು ರಾಜಕೀಯ ಪಿತೂರಿಯಾಗಿದ್ದು, ನಾನು ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ. ಪ್ರತಿಪಕ್ಷದವರು ರಾಜ್ಯಪಾಲರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೆ ನನ್ನ ರಾಜೀನಾಮೆ ಕೇಳಲು ಯಾವುದೇ ನೈತಿಕ ಹಕ್ಕು ಇಲ್ಲ. ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಅವರಿಗೆ ಸಹಿಸಲಾಗುತ್ತಿಲ್ಲ. ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯ ಹಾಗೂ ಗ್ಯಾರಂಟಿ ಯೋಜನೆಗಳ ವಿರುದ್ಧವಾಗಿದೆ . ಬಿಜೆಪಿಯವರ ಈ ನಿಲುವಿಗೆ ಈಗ ಜೆಡಿಎಸ್‌ನವರೂ ಬೆಂಬಲ ನೀಡಿದ್ದಾರೆ ಎಂದು ಟೀಕಿಸಿದರು.