High Court News: ಯೋಗೀಶ್ ಗೌಡರ್ ಕೊಲೆ ಪ್ರಕರಣ; ಧಾರವಾಡ ಶಾಸಕ ವಿನಯ್ ಕುಲಕರ್ಣಿ ವಿರುದ್ದ ತೀರ್ಪು ಕಾಯ್ದಿರಿಸಿದ ಕೋರ್ಟ್
Yogesh Gowder murder case: ಯೋಗೀಶ್ ಗೌಡರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದೆ. ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ್ದಾರೆ.
ಬೆಂಗಳೂರು: ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್ ಗೌಡರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ನಿಗದಿಪಡಿಸಿರುವ ದೋಷಾರೋಪಣೆಯಲ್ಲಿ ಸಾಕಷ್ಟು ದೋಷಗಳಿವೆ ಎಂದು ಆಕ್ಷೇಪಿಸಿ ಪ್ರಕರಣದ ಆರೋಪಿಯಾಗಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆಯನ್ನು ಮುಕ್ತಾಯಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್
ನನ್ನ ವಿರುದ್ಧ ಹೊರಿಸಲಾಗಿರುವ ದೋಷಾರೋಪಣೆ ಮತ್ತು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ನ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣಾ ನ್ಯಾಯಾಲಯದ ನ್ಯಾಯ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಕೋರಿ ವಿನಯ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಿನ್ನೆ ( ಮಾರ್ಚ್ 15) ಶಾಸಕರು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಶುಕ್ರವಾರ ಪೂರ್ಣಗೊಳಿಸಿದರು. ವಿನಯ ಕುಲಕರ್ಣಿ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಹಾಗೂ ಸಿಬಿಐ ಪರ ಪಿ. ಪ್ರಸನ್ನಕುಮಾರ್ ವಾದ ಮಂಡಿಸಿದರು.
2016ರ ಜೂನ್ 15ರಂದು ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶ್‌ಗೌಡ ಗೌಡರ್ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಟ್ಟು 21 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಪಡಿಸಿ 2024ರ ಜನವರಿ 29ರಿಂದ ಫೆಬ್ರುವರಿ 1ರವರೆಗೆ ನಿಯಮಿತವಾಗಿ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಆದೇಶಿಸಿತ್ತು. ಪ್ರಕರಣದ ಆರೋಪಿಯೂ ಆದ ವಿನಯ ಕುಲಕರ್ಣಿ, ದೋಷಾರೋಪ ನಿಗದಿ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಸಿಐಡಿ ವಿಚಾರಣೆಗೆ ಸಹಕರಿಸಲು ಶಾಸಕ ರಮೇಶ್ ಜಾರಕಿಹೊಳಿಗೆ ಹೈಕೋರ್ಟ್ ಸೂಚನೆ
ಸೌಭಾಗ್ಯಲಕ್ಷ್ಮೀ ಸಕ್ಕರೆ ಕಾರ್ಖಾನೆ ಅಭಿವೃದ್ಧಿಗೆ ಪಡೆದ ಸಾಲವನ್ನು ಮರುಪಾವತಿ ಮಾಡಿಲ್ಲ ಎಂದು ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಿಚಾರಣೆಗೆ ಸಹಕರಿಸಲು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಹೈಕೋರ್ಟ್ ಸೂಚನೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ಮತ್ತು ಸಿಐಡಿ ನಡೆಸುತ್ತಿರುವ ತನಿಖೆಯನ್ನು ರದ್ದುಪಡಿಸುವಂತೆ ಕೋರಿ ಸೌಭಾಗ್ಯಲಕ್ಷ್ಮೀ ಶುಗರ್ಸ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮೇಶ್ ಜಾರಕಿಹೊಳಿ ಸಲ್ಲಿಸಿರುವ ಅರ್ಜಿಯನ್ನು ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಶುಕ್ರವಾರ ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್, ವಾದ ಮಂಡಿಸಿ ವಿಚಾರಣೆಗೆ ಹಾಜರಾಗುವಂತೆ ಅರ್ಜಿದಾರರಿಗೆ ಸಿಐಡಿ ನೋಟಿಸ್ ಜಾರಿಗೊಳಿಸಿದೆ. ಆದರೆ, ಅವರು ವಿಚಾರಣೆಗೆ ಹಾಜರಾಗುತ್ತಿಲ್ಲ. ಇದರಿಂದ ಪ್ರಕರಣದ ತನಿಖೆಗೆ ಸ್ಥಗಿತಗೊಂಡಿದೆ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು. ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಮೂರ್ತಿಗಳು, ಸಿಐಡಿ ವಿಚಾರಣೆಗೆ ಹಾಜರಾಗಿ ತನಿಖೆ ಮುಂದುವರಿಯಲು ಸಹಕರಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿತು. ಜೊತೆಗೆ, ಅರ್ಜಿದಾರರು ವಿಚಾರಣೆಗೆ ಹಾಜರಾದಲ್ಲಿ, ಅವರನ್ನು ನ್ಯಾಯಾಲಯದ ಅನುಮತಿಯಿಲ್ಲದೆ ಬಂಧಿಸಬಾರದು ಎಂದು ಸಿಐಡಿಗೆ ನಿರ್ದೇಶಿಸಿ ವಿಚಾರಣೆಯನ್ನು ನ್ಯಾಯಮೂರ್ತಿಗಳು ಮುಂದೂಡಿದರು.
ಏನಿದು ಪ್ರಕರಣ?
ಬೆಳಗಾವಿ ಜಿಲ್ಲೆ ಗೋಕಾಕ್‌ನಲ್ಲಿರುವ ಸೌಭಾಗ್ಯಲಕ್ಷ್ಮೀ ಶುಗರ್ ಲಿಮಿಟೆಡ್‌ನಲ್ಲಿ ಯಂತ್ರೋಪಕರಣ ಅಳವಡಿಕೆ, ವಿಸ್ತರಣೆ ಮತ್ತು ನಿರ್ವಹಣೆಗಾಗಿ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ನಿಂದ 2011 ರಿಂದ 2017ರ ಅವಧಿಯಲ್ಲಿ ರೂ. 232.88 ಕೋಟಿ ಸಾಲ ಪಡೆಯಲಾಗಿತ್ತು.
ಸರಿಯಾದ ಸಮಯಕ್ಕೆ ಸರಿಯಾಗಿ ಸಾಲ ಮರು ಪಾವತಿಸದ ಹಿನ್ನೆಲೆಯಲ್ಲಿ ಅಸಲು ಹಾಗೂ ಬಡ್ಡಿ ಸೇರಿ ರೂಪಾಯಿ 439.7 ಕೋಟಿ ಮೊತ್ತವಾಗಿದೆ. ಈ ಮೊತ್ತವನ್ನು ಮರು ಪಾವತಿ ಮಾಡಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಸಾಲ ಪಡೆಯುವ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ಸಕ್ಕರೆ ಕಾರ್ಖಾನೆಗೆ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.
ವರದಿ: ಮಾರುತಿ ಹೆಚ್, ಬೆಂಗಳೂರು