SM Krishna: ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣಗೆ ಆರೋಗ್ಯ ಸ್ಥಿರ; ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವ ಮಾಜಿ ಸಿಎಂ ಎಸ್‌ಎಂ ಕೃಷ್ಣ ಅವರಿಗೆ ಡಾ ಸತ್ಯನಾರಾಯಣ ಮತ್ತು ಡಾ.ಸುನಿಲ್ ಕಾರಂತ್ ನೇತೃತ್ವದ ತೀವ್ರ ನಿಗಾ ತಂಡದ ವೈದ್ಯರು ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಿದ್ದಾರೆ.
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ (SM Krishna) ಅವರಿಗೆ ನಗರದ ಮಣಿಪಾಲ್ ಆಸ್ಪತ್ರೆಯೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದು ಬಂದಿದೆ. ಡಾ ಸತ್ಯನಾರಾಯಣ ಮತ್ತು ಡಾ ಸುನಿಲ್ ಕಾರಂತ್ ನೇತೃತ್ವದ ತೀವ್ರ ನಿಗಾ ತಂಡದ ವೈದ್ಯರು ಕೃಷ್ಣ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ ಮತ್ತು ಚೇತರಿಸಿಕೊಳ್ಳುತ್ತಿದೆ ಎಂದು ಹೇಳಲಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದರು.
ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಶೀಘ್ರ ಗುಣಮುಖರಾಗಲಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾರೈಸಿದ್ದಾರೆ. ಮಾಜಿ ಕೇಂದ್ರ ಸಚಿವರನ್ನು ಭೇಟಿಯಾದ ನಂತರ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, "ನಾನು ಅವರನ್ನು ಭೇಟಿಯಾಗಲು ಬಂದಿದ್ದೇನೆ. ಅವರ ಆರೋಗ್ಯ ಸುಧಾರಿಸುತ್ತದೆ. ನಾನು ಅವರಿಗೆ ಶುಭ ಹಾರೈಸುತ್ತೇನೆ ಮತ್ತು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ" ಎಂದು ಟ್ವೀಟ್ ಮಾಡಿದ್ದಾರೆ.
91 ವರ್ಷದ ಕೃಷ್ಣ ಅವರು ಯುಪಿಎ ಸರ್ಕಾರದಲ್ಲಿ ವಿದೇಶಾಂಗ ವ್ಯವಹಾರಗಳು ಸೇರಿದಂತೆ ಪ್ರಮುಖ ಖಾತೆಗಳನ್ನು ನಿರ್ವಹಿಸಿದ್ದಾರೆ. 1999ರ ಅಕ್ಟೋಬರ್ 11 ರಿಂದ 2004ರ ಮೇ 28ರ ವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಎಸ್‌ಎಂ ಕೃಷ್ಣ ಅವರು ಸೇವೆ ಸಲ್ಲಿಸಿದ್ದಾರೆ. ಮನಮೋಹನ್ ಸಿಂಗ್ ನೇತೃತ್ವದ ಯುನೈಟೆಡ್ ಪ್ರೊಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಸರ್ಕಾರದಲ್ಲಿ 2009 ರಿಂದ 2012 ರವರೆಗೆ ವಿದೇಶಾಂಗ ಸಚಿವರಾಗಿ ಮತ್ತು ಮಹಾರಾಷ್ಟ್ರ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ.
2017ರ ಮಾರ್ಚ್‌ನಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಆ ಮೂಲಕ ಕಾಂಗ್ರೆಸ್‌ದೊಂದಿಗಿನ ಸುಮಾರು 50 ವರ್ಷಗಳ ಸಂಬಂಧವನ್ನು ಕೊನೆಗೊಳಿಸಿದರು. 2023ರಲ್ಲಿ ವರ್ಷ ಸಕ್ರಿಯ ರಾಜಕೀಯದಿಂದ ನಿವೃತ್ತಿಯಾಗಿದ್ದಾರೆ. ಕರ್ನಾಟಕದ ರಾಜಕಾರಣದಲ್ಲಿ ಎಸ್‌ಎಂ ಕೃಷ್ಣ ಅವರು ವಿವಿಧ ಯೋಜನೆಗಳನ್ನು ಜಾರಿಗೆ ತರುವ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.