Muda Scam; ಮುಡಾ ನಿವೇಶನ ಅಕ್ರಮ ಆರೋಪ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರು
Mysuru Land Scam; ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್ ಹಂಚಿಕೆ ಅಕ್ರಮ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಇದು ರಾಜಕೀಯ ಸಂಚಲನ ಸೃಷ್ಟಿಸಿದ್ದು, ಸಚಿವರು ಮತ್ತು ಅಧಿಕಾರಿಗಳು ಸಮಾಲೋಚನೆ ನಡೆಸಿದ್ದಾರೆ. (ವರದಿ- ಎಚ್.ಮಾರುತಿ, ಬೆಂಗಳೂರು)
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್ ಹಂಚಿಕೆ ಅಕ್ರಮ (ಮುಡಾ ಹಗರಣ)ದ ಕೇಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ನಡೆಸುವುದಕ್ಕೆ (ವಿಚಾರಣೆಗೆ ಒಳಪಡಿಸುವುದಕ್ಕೆ) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶನಿವಾರ (ಆಗಸ್ಟ್ 17) ಅನುಮತಿ ನೀಡಿದ್ದಾರೆ. ಇದರಿಂದಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆ ಉಂಟಾಗಿದೆ.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅನುಮತಿ ನೀಡಿದ್ದಾರೆ, ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರಿಗೆ ರಾಜ್ಯಪಾರು ರವಾನಿಸಿದ್ದಾರೆ. ಮುಖ್ಯಮಂತ್ರಿಗಳ ಕಚೇರಿ ಮೂಲಗಳು ಈ ಪ್ರಕ್ರಿಯೆಯನ್ನು ಖಚಿತಪಡಿಸಿವೆ.
ಇದಲ್ಲದೆ, ರಾಜ್ಯಪಾಲರಿಗೆ ದೂರು ನೀಡಿದ್ದ ಟಿ.ಜೆ. ಅಬ್ರಹಾಂ, ಸಾಮಾಜಿಕ ಕಾರ್ಯಕರ್ತರಾದ ಸ್ನೇಹಮಯಿ ಕೃಷ್ಣ ಮತ್ತು ಪ್ರದೀಪ್ ಅವರನ್ನು ರಾಜಭವನಕ್ಕೆ ಬರಹೇಳಲಾಗಿದೆ. ಪ್ರದೀಪ್ ಅವರು ಈಗಾಗಲೇ ರಾಜಭವನಕ್ಕೆ ಆಗಮಿಸಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಪತ್ರವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ರಾಜಭವನದ ಮೂಲಗಳು ತಿಳಿಸಿವೆ.
ಮುಡಾ ಸೈಟ್ ಹಂಚಿಕೆ ಕೇಸ್; ರಾಜಭವನದಲ್ಲಿ ಏನೇನಾಯಿತು
ಮೈಸೂರು ಸೈಟ್ ಹಂಚಿಕೆ ಅಕ್ರಮ ಕೇಸ್ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ಜುಲೈ 26ರಂದು ಟಿ.ಜೆ. ಅಬ್ರಹಾಂ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು. ಜುಲೈ27ರಂದೇ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದರು. ರಾಜ್ಯಪಾಲರ ಈ ನಿರ್ಧಾರಕ್ಕೆ ಮುಖ್ಯಮಂತ್ರಿಗಳ ಆದಿಯಾಗಿ ಇಡೀ ಸಚಿವ ಸಂಪುಟ ಆಕ್ಷೇಪ ವ್ಯಕ್ತಪಡಿಸಿತ್ತು.
ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ ಆಗಸ್ಟ್ 1ರಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮಂತ್ರಿ ಪರಿಷತ್ ಸಭೆಯಲ್ಲಿ ಮುಖ್ಯಮಂತ್ರಿಗಳಿಗೆ ನೀಡಿರುವ ಶೋಕಾಸ್ ನೋಟಿಸ್ ನೀಡಿರುವ ಕ್ರಮಕ್ಕೆ ಆಕ್ಷೇಪ ವ್ಯಕ್ತವಾಗಿತ್ತು. ನೋಟಿಸ್ ಹಿಂಪಡೆಯಬೇಕು ಮತ್ತು ಅಬ್ರಹಾಂ ನಡಿರುವ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ರಾಜ್ಯಪಾಲರಿಗೆ ಸಲಹೆ ನೀಡುವ ತೀರ್ಮಾನವನ್ನು ಕೈಗೊಳ್ಳಲಾಗಿತ್ತು.
ಮೈಸೂರು ಸೈಟ್ ಹಂಚಿಕೆ ಅಕ್ರಮ ಕೇಸ್ ಕಂಟಕ- ರಾಜಕೀಯ ಸಂಚಲನ
ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇಂದು ಸಂಜೆ ಉಪಮುಖ್ಯಮಂತ್ರಿ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮಂತ್ರಿ ಪರಿಷತ್ ಸಭೆ ನಡೆಯಲಿದೆ. ಈಗಾಗಲೇ ಅನೇಕ ಸಚಿವರು ಮತ್ತು ಶಾಸಕರು ಮುಖ್ಯಮಂತ್ರಿಗಳ ನಿವಾಸಕ್ಕೆ ದೌಡಾಯಿಸಿ ಚರ್ಚೆಯಲ್ಲಿ ತೊಡಗಿದ್ದಾರೆ. ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರೂ ಮುಖ್ಯಮಂತ್ರಿಗಳ ಭೇಟಿಗೆ ಆಗಮಿಸಿದ್ದಾರೆ. ಸಚಿವರಾದ ದಿನೇಶ್ ಗುಂಡೂರಾವ್, ಭೈರತಿ ಬಸವರಾಜ್ ಸೇರಿದಂತೆ ಅನೇಕ ಸಚಿವರು ಮುಖ್ಯಮಂತ್ರಿಗಳ ಜತೆ ಸಮಾಲೋಚನೆಯಲ್ಲಿ ತೊಡಗಿದ್ದಾರೆ.
ಮುಡಾ ಪ್ರಕರಣದಲ್ಲಿ ಅಬ್ರಹಾಂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಮುಂದಿನ ವಾರ ಈ ಪ್ಕರಣ ಕುರಿತು ಮತ್ತೆ ವಿಚಾರಣೆ ನಡೆಯಲಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿರುವ ಅನುಮತಿಯನ್ನು ಪ್ರಶ್ನಿಸಿ ಸೋಮವಾರ ಹೈಕೋರ್ಟ್ ಮೆಟ್ಟಿಲೇರುವ ಸಾಧ್ಯತೆಗಳಿವೆ.
ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ: ಸಿಎಂ ಸಿದ್ದರಾಮಯ್ಯ ಅವರ 40 ವರ್ಷದ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆ ಇರಲಿಲ್ಲ. ಇದರ ವಿರುದ್ಧ ಹೋರಾಟ ಮಾಡುತ್ತೇವೆ. ಶಾಸಕರು, ಸಚಿವರು, ಹೈಕಮಾಂಡ್ ಸಿಎಂ ಬೆನ್ನಿಗೆ ನಿಲ್ಲುತ್ತೇವೆ. ಈಗಾಗಲೇ ಮುಡಾ ಹಗರಣ ತನಿಖೆಮಾಡಲು ಕಮಿಟಿಮಾಡಲಾಗಿದೆ. ಸಿಎಂ ಖುದ್ದು ತಮ್ಮ ವಿರುದ್ಧ ಕಮಿಟಿ ಮಾಡಿದ್ದಾರೆ. ಸಿಎಂ ಹೆದರಿಕೊಂಡಿದ್ದರೆ ಕಮಿಟಿ ಮಾಡುತ್ತಿರಲಿಲ್ಲ. ಆ ಕಮಿಟಿ ಇನ್ನೂ ವರದಿ ಕೊಟ್ಟಿಲ್ಲ. ಹೀಗಿರುವಾಗ ಪ್ರಾಸ್ಯೂಕ್ಯೂಷನ್‌ಗೆ ಅನುಮತಿ ಹೇಗೆ ಕೊಡ್ತಾರೆ. ಕಮಿಷನ್ ವರದಿ ಏನು ಇಲ್ಲ ಅಂತ ಬಂದಾಗ ರಾಜ್ಯಪಾಲರ ನಡೆ ಸಾರ್ವಜನಿಕರು ಪ್ರಶ್ನೆ ಮಾಡುತ್ತಾರೆ. ರಾಜ್ಯಪಾಲರ ವಾಪಸ್ ಕರೆಸಿಕೊಳ್ಳುವ ಬಗ್ಗೆ ಹೋರಾಟ ಮಾಡುತ್ತೇವೆ. ನನಗೆ ಈಗ ತಾನೆ ಸುದ್ದಿ ಬಂದಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.
(ವರದಿ- ಎಚ್.ಮಾರುತಿ, ಬೆಂಗಳೂರು)