ಕನ್ನಡ ಸುದ್ದಿ  /  Karnataka  /  Bengaluru News Karnataka Hc Stays Proceedings For Handing Over Jayalalithaa S Confiscated Ornaments To Tn Govt Uks

Court News: ಮಾಜಿ ಸಿಎಂ ಜಯಲಲಿತಾಗೆ ಸೇರಿದ ಚಿನ್ನಾಭರಣ ಹಸ್ತಾಂತರ ಪ್ರಕ್ರಿಯೆಗೆ ತಡೆ; ಕರ್ನಾಟಕ ಹೈಕೋರ್ಟ್‌ ಮಧ್ಯಂತರ ಆದೇಶ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರಿಗೆ ವಿಧಿಸಿದ್ದ 100 ಕೋಟಿ ರೂಪಾಯಿ ದಂಡ ಮೊತ್ತ ಸಂಗ್ರಹಿಸುವುದಕ್ಕೆ ಹಿನ್ನಡೆಯಾಗಿದೆ. ಬೆಂಗಳೂರು ನ್ಯಾಯಾಲಯದ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಕಾರಣ ಇಲ್ಲಿದೆ.

ಕರ್ನಾಟಕ ಹೈಕೋರ್ಟ್ (ಎಡ ಚಿತ್ರ); ತಮಿಳು ನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ (ಬಲ ಚಿತ್ರ)
ಕರ್ನಾಟಕ ಹೈಕೋರ್ಟ್ (ಎಡ ಚಿತ್ರ); ತಮಿಳು ನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ (ಬಲ ಚಿತ್ರ)

ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರಿಗೆ ಸೇರಿದ್ದ ಚಿನ್ನಾಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಅವರು ಅಕ್ರಮವಾಗಿ ಗಳಿಸಿದ್ದರು ಎನ್ನಲಾದ ಈ ಚಿನ್ನಾಭರಣಗಳು ಸದ್ಯ ಬೆಂಗಳೂರಿನ ವಿಶೇಷ ನ್ಯಾಯಾಲಯದ ಸುಪರ್ದಿಯಲ್ಲಿದ್ದು, ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು 36ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿತ್ತು.

ಈ ವಿಚಾರವಾಗಿ ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಪುತ್ರಿ ಎಂದು ಹೇಳಿಕೊಳ್ಳುತ್ತಿರುವ ಜೆ.ದೀಪಾ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಧ್ಯಂತರ ತಡೆ ಆದೇಶ ನೀಡಿತು. ಅಲ್ಲದೆ ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಮಾ.26ಕ್ಕೆ ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಜಯಲಲಿತಾ ವಿರುದ್ಧದ ಭ್ರಷ್ಟಾಚಾರ ಆರೋಪ ಸಂಬಂಧ ಸುಪ್ರೀಂ ಕೋರ್ಟ್‌ ತೀರ್ಪು ಬರುವ ಮೊದಲೇ ಅವರು ಮೃತರಾಗಿದ್ದರು. ಆದ ಕಾರಣ ಅವರನ್ನು ಆರೋಪ ಮುಕ್ತರು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಆದ್ದರಿಂದ ಅರ್ಜಿದಾರರು ಜಯಲಲಿತಾ ಅವರ ಕಾನೂನುಬದ್ಧ ವಾರಸುದಾರರಾಗಿದ್ದು ಅವರ ಚಿನ್ನಾಭರಣಗಳನ್ನು ಅರ್ಜಿದಾರರಿಗೆ ಹಸ್ತಾಂತರ ಮಾಡಬೇಕು ಎಂದು ಮನವಿ ಮಾಡಿದರು.

ಈ ಮನವಿ ದಾಖಲಿಸಿಕೊಂಡ ನ್ಯಾಯಪೀಠ, ನಗರದ ವಿಶೇಷ ನ್ಯಾಯಾಲಯದಿಂದ ತಮಿಳುನಾಡು ಸರ್ಕಾರಕ್ಕೆ ನಾಳೆಯಿಂದ (ಮಾ.6) ನಡೆಯಬೇಕಾಗಿದ್ದ ಚಿನ್ನಾಭರಣಗಳ ಹಸ್ತಾಂತರ ಪ್ರಕ್ರಿಯೆಗೆ ತಡೆ ನೀಡಿತು. ಅಷ್ಟೇ ಅಲ್ಲ, ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ, ವಿಚಾರಣೆಯನ್ನು ಮುಂದೂಡಿತು.

ತಮಿಳುನಾಡು ಮಾಜಿ ಸಿಎಂ ಚಿನ್ನಾಭರಣ ಹಸ್ತಾಂತರ ಪ್ರಕ್ರಿಯೆ; ಏನಿದು ಪ್ರಕರಣ?

ಸುಪ್ರೀಂ ಕೋರ್ಟ್ ನಿರ್ದೇಶನ ಪ್ರಕಾರ, ಜಯಲಲಿತಾ ಅಕ್ರಮ ಆಸ್ತಿ ಸಂಪಾದನೆ ಕುರಿತ ಪ್ರಕರಣದ ವಿಚಾರಣೆಯನ್ನು ಕರ್ನಾಟಕದಲ್ಲಿ ನಡೆಸಲಾಗಿತ್ತು. ಪ್ರಸ್ತುತ ಸಂಬಂಧಿತ ಎಲ್ಲಾ ಪುರಾವೆಗಳನ್ನು ನ್ಯಾಯಾಲಯದ ನಿಗಾದಲ್ಲಿ ಕರ್ನಾಟಕ ಖಜಾನೆಯಲ್ಲಿ ಇರಿಸಲಾಗಿದೆ.

ಜಯಲಲಿತಾ ಅವರಿಂದ ವಶಪಡಿಸಿಕೊಳ್ಳಲಾದ ವಸ್ತುಗಳನ್ನು ಹರಾಜು ಮಾಡುವ ಮೂಲಕ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಸರ್ಕಾರ ಖರ್ಚು ಮಾಡಿದ ಮೊತ್ತಕ್ಕೆ ಪರಿಹಾರ ಕೋರಿ ಆರ್ ಟಿಐ ಕಾರ್ಯಕರ್ತ ಟಿ.ನರಸಿಂಹ ಮೂರ್ತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್‌, ವಶಪಡಿಸಿಕೊಂಡ ಆಭರಣಗಳನ್ನು ಹರಾಜು ಹಾಕುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದೆ. ಬದಲಾಗಿ, ಮುಟ್ಟುಗೋಲು ಹಾಕಿಕೊಂಡ ಈ ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ವರ್ಗಾಯಿಸಲು ನಿರ್ದೇಶಿಸಿತು. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಭೌತಿಕ ಪುರಾವೆಗಳೆಂದು ಪರಿಗಣಿಸಲಾದ ಚಿನ್ನ ಮತ್ತು ವಜ್ರದ ಆಭರಣಗಳ ವಿಲೇವಾರಿ ಸೇರಿದಂತೆ ಮುಂದಿನ ಕ್ರಮದ ಜವಾಬ್ದಾರಿಯನ್ನು ತಮಿಳುನಾಡು ಸರ್ಕಾರದ ಮೇಲೆ ಹಾಕಲಾಯಿತು. ಇದರಂತೆ, ಮಾರ್ಚ್ 6 ಮತ್ತು 7ರಂದು ಜಯಲಲಿತಾ ಅವರ ಚಿನ್ನಾಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ದಿನಾಂಕ ನಿಗದಿ ಮಾಡಿತ್ತು.

ಅಲ್ಲದೆ, ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲು ಅಧಿಕೃತ ವ್ಯಕ್ತಿಯೊಬ್ಬರನ್ನು ನೇಮಕ ಮಾಡಿ, ತಮಿಳುನಾಡು ಸರ್ಕಾರದ ಗೃಹ ಇಲಾಖೆಯ ಪ್ರದಾನ ಕಾರ್ಯದರ್ಶಿ, ತಮಿಳುನಾಡು ಐಜಿಪಿ ಅವರೊಂದಿಗೆ ಬರಬೇಕು. ಈ ವೇಳೆ ಛಾಯಾಗ್ರಾಹಕರು, ವಿಡಿಯೋಗ್ರಾಫರ್ ಮತ್ತು ಆರು ದೊಡ್ಡ ಪೆಟ್ಟಿಗೆ (ಟ್ರಂಕ್) ಜತೆಗೆ ಅಗತ್ಯ ಭದ್ರತೆಯೊಂದಿಗೆ ಬಂದು ಚಿನ್ನಾಭರಣಗಳನ್ನು ಪಡೆದುಕೊಳ್ಳಬೇಕು. ಈ ಅಂಶವನ್ನು ತಮಿಳುನಾಡು ಅಧಿಕಾರಿ ಅವರು ತಮಿಳುನಾಡು ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರ ಗಮನಕ್ಕೆ ತರಬೇಕು ಎಂದು ನ್ಯಾಯಾಲಯ ಸೂಚಿಸಿತ್ತು.

(This copy first appeared in Hindustan Times Kannada website. To read more like this please logon to kannada.hindustantimes.com)

IPL_Entry_Point