Prajwal Revanna: ಸಂಸದ ಸ್ಥಾನ ಕಳೆದುಕೊಂಡ ಪ್ರಜ್ವಲ್ ರೇವಣ್ಣ ಮುಂದೇನು ಮಾಡ್ತಾರೆ
ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇರುವಾಗ ಜೆಡಿಎಸ್ ಯುವ ನಾಯಕ ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಕಳೆದುಕೊಂಡಿದ್ದಾರೆ. ಎ. ಮಂಜು ಮತ್ತು ವಕೀಲ ದೇವರಾಜೇಗೌಡ ಸಲ್ಲಿಸಿದ್ದ ತಕರಾರು ಅರ್ಜಿಯ ಪರಿಣಾಮ ಇದು. ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ಅವರಿಗೆ ಎದುರಾಳಿಯಾಗಿದ್ದ ಎ.ಮಂಜು ಈಗ ಜೆಡಿಎಸ್ ಶಾಸಕ. ಈ ವಿದ್ಯಮಾನದ ವಿವರ ನೀಡಿದ್ದಾರೆ ಎಚ್.ಮಾರುತಿ.
ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಸದಸ್ಯ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.
ಅಂದಿನ ಬಿಜೆಪಿ ಅಭ್ಯರ್ಥಿ ಎ ಮಂಜು ಮತ್ತು ವಕೀಲ ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಈ ಮಹತ್ವದ ಆದೇಶ ಹೊರಡಿಸಿದೆ. ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅಫಿಡವಿಟ್‌ನಲ್ಲಿ ಸುಮಾರು ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಬಗ್ಗೆ ವಿವರ ನೀಡಿಲ್ಲ ಎಂದು ಅರ್ಜಿದಾರರು ಅರ್ಜಿ ಸಲ್ಲಿಸಿ ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಕೆ.ನಟರಾಜನ್ ಅವರು ಈ ಆದೇಶ ಹೊರಡಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಅವರ ಮುಂದಿನ ನಡೆಯೇನು
ಹೈಕೋರ್ಟ್ ಆದೇಶ ಪ್ರಕಟಿಸಿದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಒಂದು ವೇಳೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡದಿದ್ದರೆ, ಆಗ ಪ್ರಜ್ವಲ್ ರೇವಣ್ಣ ಸಂಸದ ಸ್ಥಾನದಿಂದ ಕಾಯಂ ಅನರ್ಹರಾಗುತ್ತಾರೆ. ಸಾಮಾನ್ಯವಾಗಿ ಇಂತಹ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡುವ ಸಾಧ್ಯತೆಗಳೇ ಹೆಚ್ಚು.
ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿರುವ ಕಾರಣ ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ಪ್ರಜ್ವಲ್ ರೇವಣ್ಣ ಅವರನ್ನು ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸಬಹುದಾಗಿದೆ. ಹೈ ಕೋರ್ಟ್ ತೀರ್ಪನ್ನು ಪ್ರಶ್ನಿಸಿ 30 ದಿನಗಳ ಒಳಗಾಗಿ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಪ್ರಜ್ವಲ್ ರೇವಣ್ಣಗೆ ಅವಕಾಶ ಇದೆ.
ಅಲ್ಲಿ ಹೈಕೋರ್ಟ್ ತೀರ್ಪಿಗೆ ತಡೆ ಪಡೆದರೆ ಮಾತ್ರ ಪ್ರಜ್ವಲ್ ರೇವಣ್ಣ ಚುನಾವಣೆಗೆ ಸ್ಪರ್ಧಿಸಲು ಅವಕಾಶವಿರುತ್ತದೆ. ಒಂದು ವೇಳೆ ಅನರ್ಹಗೊಂಡರೆ ಪ್ರಜ್ವಲ್ ಚುನಾವಣೆಗೆ 6 ವರ್ಷ ಸ್ಪರ್ಧಿಸುವಂತಿಲ್ಲ.
ಏನಿದು ಪ್ರಕರಣ?
ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಕುರಿತು ವಿವರ ನೀಡಿಲ್ಲ ಎಂದು ದೂರು ಬಂದ ಬಳಿಕ ಪ್ರಕರಣದ ಬಗ್ಗೆ ವರದಿ ನೀಡಿದ್ದ ಅಂದಿನ ಹಾಸನ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫಾನ್ಸಿಸ್ ಅವರು ಕೂಡ ಈ ಪ್ರಕರಣ ಕುರಿತು ಆದಾಯ ತೆರಿಗೆ ಇಲಾಖೆ ತನಿಖೆ ನಡೆಸಬಹುದು ಎಂದು ವರದಿ ನೀಡಿದ್ದರು. ಇದರಿಂದ ಈ ಪ್ರಕರಣ ಮತ್ತಷ್ಟು ಗಟ್ಟಿಯಾಗಿತ್ತು. ಪ್ರಕರಣದ ಸಂಬಂಧ ಪ್ರಜ್ವಲ್ ರೇವಣ್ಣ ಹೈ ಕೋರ್ಟ್ ಮುಂದೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು.
ಹೊಳೆನರಸೀಪುರದಲ್ಲಿರುವ ಚೆನ್ನಾಂಬಿಕ ಕನ್ವೆನ್ಷನ್ ಸೆಂಟರ್ ಕಟ್ಟಡ ಕನಿಷ್ಠ 5 ಕೋಟಿ ರೂ. ಬೆಲೆ ಬಾಳುತ್ತದೆ. ಆದರೆ ಅದರ ಮೌಲ್ಯವನ್ನು 14 ರೂ. ಲಕ್ಷ ಎಂದು ತೋರಿಸಲಾಗಿದೆ. ಬೆಂಗಳೂರಿನ ಮಿನರ್ವ ಸರ್ಕಲ್ ನಲ್ಲಿರುವ ಕರ್ನಾಟಕ ಬ್ಯಾಂಕ್ ಖಾತೆಯಲ್ಲಿ 48 ಲಕ್ಷ ರೂ. ಹೊಂದಿದ್ದರೂ ಕೇವಲ 5 ಲಕ್ಷ ಇದೆ ಎಂದು ತೋರಿಸಿದ್ದಾರೆ ಎಂದು ದೇವರಾಜೇಗೌಡ ಆರೋಪಿದ್ದರು.
ಎ. ಮಂಜು ಅಂದು ಎದುರಾಳಿ; ಇಂದು ಜೆಡಿಎಸ್ ಶಾಸಕ
2019ರಲ್ಲಿ ನಡೆದ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಪ್ರಜ್ವಲ್ ರೇವಣ್ಣ ಅವರಿಗೆ 6,76,606 ಮತಗಳು ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಎ ಮಂಜು ಅವರು 5,35,282 ಮತಗಳನ್ನು ಪಡೆದುಕೊಂಡಿದ್ದರು. ಪ್ರಜ್ವಲ್ 1,41, 324 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದರು. ಪ್ರಜ್ವಲ್ ರೇವಣ್ಣ ಅವರು ಚೊಚ್ಚಲ ಪ್ರಯತ್ನದಲ್ಲೇ ಜಯ ಗಳಿಸಿದ್ದರು.
ಪ್ರಜ್ವಲ್ ರೇವಣ್ಣ ಅವರು ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿ ಸ್ಪರ್ಧೆ ಮಾಡಿ ಗೆದ್ದಿದ್ದಾರೆ. ಅವರನ್ನು ಅನರ್ಹಗೊಳಿಸಿ ನನ್ನನ್ನು ಲೋಕಸಭಾ ಸದಸ್ಯ ಎಂದು ಘೋಷಣೆ ಮಾಡುವಂತೆ ಎ.ಮಂಜು ನ್ಯಾಯಾಲಯದ ಮೊರೆ ಹೋಗಿದ್ದರು. ಈ ಪ್ರಕರಣ ಇನ್ನೂ ವಿಚಾರಣೆಗೆ ಬಾಕಿ ಇರುವ ಬೆನ್ನಲ್ಲೇ ಮಂಜು 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗಿ, ಈಗ ಶಾಸಕರಾಗಿ ಆಯ್ಕೆಯಾಗಿದ್ದಾರೆ.