ಮಾಜಿ ಸಚಿವರಿಂದ ಹಣ ಸುಲಿಗೆಗೆ ಯತ್ನ: ನಲಪಾಡ್ ಬ್ರಿಗೇಡ್‌ನ ಕಲಬುರಗಿ ಅಧ್ಯಕ್ಷೆ ಮಂಜುಳಾ ಮತ್ತು ಆಕೆಯ ಪತಿಯ ಬಂಧನ
ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ಅವರಿಂದ ಹಣ ಸುಲಿಗೆಗೆ ಯತ್ನ ಮಾಡಿದ ಪ್ರಕರಣದಲ್ಲಿ ನಲಪಾಡ್ ಬ್ರಿಗೇಡ್‌ನ ಕಲಬುರಗಿ ಅಧ್ಯಕ್ಷೆ ಮಂಜುಳಾ ಮತ್ತು ಆಕೆಯ ಪತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರತ್ಯೇಕ ಪ್ರಕರಣದಲ್ಲಿ ಇನ್ನಿಬ್ಬರು ರೌಡಿಶೀಟರ್‌ಗಳ ಬಂಧನವಾಗಿದೆ.(ವರದಿ- ಎಚ್ ಮಾರುತಿ, ಬೆಂಗಳೂರು)
ಬೆಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ಅವರಿಗೆ ಬ್ಲಾಕ್‌ಮೇಲ್ ಮಾಡಿ 20 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ದಂಪತಿಯನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ನಲಪಾಡ್ ಬ್ರಿಗೇಡ್‌ನ ಕಲಬುರಗಿ ಅಧ್ಯಕ್ಷೆ 32 ವರ್ಷದ ಮಂಜುಳಾ ಪಾಟೀಲ ಹಾಗೂ ಅವರ ಪತಿ 39 ವರ್ಷದ ಶಿವರಾಜ್ ಪಾಟೀಲ ಬಂಧಿತ ಆರೋಪಿಗಳು. ಇವರು ಕಲಬುರಗಿ ನಿವಾಸಿಗಳಾಗಿದ್ದಾರೆ. ಮಾಲಿಕಯ್ಯ ಗುತ್ತೇದಾರ್ ಅವರ ಪುತ್ರ ರಿತೇಶ್ ಗುತ್ತೇದಾರ್ ಅವರು ನೀಡಿದ ದೂರಿನ ಅನ್ವಯ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಇಬ್ಬರೂ ಆರೋಪಿಗಳನ್ನು ಶನಿವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, 8 ದಿನಗಳ ಪೊಲೀಸ್ ವಶಕ್ಕೆ ನೀಡಲಾಗಿದೆ.
ಸುಲಿಗೆ ಮಾಡಲು ಹೊಂಚು ಹಾಕಿದ್ದ ರೌಡಿ ಶೀಟರ್ ಬಂಧನ
ಸಾರ್ವಜನಿಕರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ಬೆಲೆ ಬಾಳುವ ಆಭರಣಗಳನ್ನು ಮತ್ತು ಹಣವನ್ನು ಸುಲಿಗೆ ಮಾಡಲು ಸಂಚು ಹೂಡಿದ್ದ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯ ರೌಡಿ ಶೀಟರ್ ಮತ್ತು ಆತನ ಸಹಚರರನ್ನು ಬಂಧಿಸಲಾಗಿದೆ. ಈತ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಸಿ.ಇ.ಸಿ.ಹೆಚ್.ಎಸ್ ಲೇಔಟ್‌ನ ಮುಖ್ಯ ರಸ್ತೆಯಲ್ಲಿ ಸುಲಿಗೆ ಮಾಡಲು ಹೊಂಚು ಹಾಕುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಸಿಸಿಬಿ, ಸಂಘಟಿತ ಅಪರಾಧ ದಳ (ಪೂರ್ವ) ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದುಕೊಂಡು ಅವರಿಂದ ಎರಡು ಕಬ್ಬಿಣದ ಮಚ್ಚುಗಳನ್ನು ವಶಪಡಿಸಿಕೊಳ್ಳಲಾಗಿದೆ. ರೌಡಿಯ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ರೌಡಿಯ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್, ಆಡುಗೋಡಿ ಮತ್ತು ಕೆ.ಜಿ.ಹಳ್ಳಿ ಪೊಲೀಸ್ ಠಾಣೆಗಳಲ್ಲಿ 3 ಪ್ರಕರಣಗಳು ದಾಖಲಾಗಿವೆ. ಈ ರೌಡಿಶೀಟರ್‌ನ ಅಪರಾಧಿ ಚಟುವಟಿಕೆಗಳನ್ನು ನಿಯಂತ್ರಿಸುವ ಸಲುವಾಗಿ ಈತನನ್ನು 6 ತಿಂಗಳ ಹಿಂದೆ ಕೋಲಾರಕ್ಕೆ ಗಡೀಪಾರು ಮಾಡಲಾಗಿತ್ತು. ಆದರೂ ಈತ 20 ದಿನಗಳ ಹಿಂದ ಕೋಲಾರದಿಂದ ಬೆಂಗಳೂರಿಗೆ ಬಂದು ಅಪರಾಧ ಕೃತ್ಯವೆಸಗಲು ಹೊಂಚುಹಾಕುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ತಲೆಮರೆಸಿಕೊಂಡಿದ್ದ ರೌಡಿ ಅರೆಸ್ಟ್
ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿ ಪ್ರಕರಣದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯ ರೌಡಿಶೀಟರ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರ ಲ್ಲಿ ಈತ ಪೊಲೀಸರಿಗೆ ಬೇಕಾಗಿದ್ದ. ಈ ರೌಡಿಶೀಟರ್ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಬಿ.ಎನ್.ಎಸ್.ಎಸ್. ಅಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ. ಈ ರೌಡಿಯ ವಿರುದ್ಧ ಪುಲಿಕೇಶಿನಗರ, ಸಂಪಿಗೆಹಳ್ಳಿ ಹಾಗೂ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಗಳಲ್ಲಿ ಹಲವಾರು ಪ್ರಕರಣಗಳು ದಾಖಲಾಗಿವೆ ಎಂದು ತಿಳಿದು ಬಂದಿದೆ.
(ವರದಿ- ಎಚ್ ಮಾರುತಿ, ಬೆಂಗಳೂರು)