ಕನ್ನಡ ಸುದ್ದಿ  /  Karnataka  /  Bengaluru Rameshwaram Cafe Blast Case Cm Siddaramaiah Instructs To Take Action Against People Who Spread Fake News Mgb

ರಾಮೇಶ್ವರ ಕೆಫೆ ಸ್ಫೋಟ: ಸುಳ್ಳು ಸುದ್ದಿ ಹರಡುವ ಸಮಾಜ ದ್ರೋಹಿಗಳ ವಿರುದ್ಧ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಲು ಸಿಎಂ ಸೂಚನೆ

Rameshwaram Cafe Blast Case: ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವ ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ರಾಮೇಶ್ವರ ಕೆಫೆಯಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಸಭೆ
ರಾಮೇಶ್ವರ ಕೆಫೆಯಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಸಭೆ

ಬೆಂಗಳೂರು: ರಾಮೇಶ್ವರ ಕೆಫೆ ಬಾಂಬ್​ ಸ್ಫೋಟ ಪ್ರಕರಣ ಸಂಬಂಧ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಗೆ ಪರಿಣಾಮಕಾರಿಯಾಗಿ ಬಳಸಿ. ಪೊಲೀಸರು ಇಂಥ ಘಟನೆ ನಡೆದಾಗ ಮಾತ್ರ ಎಚ್ಚರಿಕೆ ವಹಿಸಿ ಆ ನಂತರ ಮೈ ಮರೆಯುವುದಾಗಬಾರದು. ಸಾಮಾಜಿಕ ಮಾಧ್ಯಮ ಸೇರಿ ಇನ್ನಿತರೆ ಯಾವುದೇ ಒತ್ತಡಕ್ಕೆ ಒಳಗಾಗದೆ ನಿಸ್ಪಕ್ಷಪಾತವಾಗಿ ತನಿಖೆ ನಡೆಸಿ. ಜನನಿಬಿಡ ಸ್ಥಳಗಳಲ್ಲಿ ಗಸ್ತು ಹೆಚ್ಚಿಸಿ ಜನರಿಗೆ ರಕ್ಷಣೆ ಒದಗಿಸಬೇಕು. ಸುಳ್ಳು ಮತ್ತು ತಪ್ಪು ಸುದ್ದಿ ಹರಡುತ್ತಿರುವವರ ಮೇಲೆ ಕಟ್ಟುನಿಟ್ಟಿನ ನಿಗಾ ಇಟ್ಟು ಕ್ರಮ ಜರುಗಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಇಂದು (ಮಾ 3) ಗೃಹ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಇಂಥ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು. ಇಂಟೆಲಿಜೆನ್ಸ್ ಹೆಚ್ಚು ಜಾಗೃತವಾಗಿರಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವ ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು. ಈ ಬಗ್ಗೆಯೇ ಪೊಲೀಸ್ ಇಲಾಖೆ ಜೊತೆಗೆ ಪ್ರತ್ಯೇಕ ಸಭೆ ಕರೆಯುವುದಾಗಿ ಹೇಳಿದರು. ಸಮಯ ಸಂದರ್ಭಕ್ಕೆ ತಕ್ಕಂತೆ ನಾವೂ ಬದಲಾಗಬೇಕು. ತ್ವರಿತ ಗತಿಯಲ್ಲಿ ಕೆಲಸ ಮಾಡಬೇಕು ಎಂದರು.

ಸಭೆಯಲ್ಲಿ ಸಚಿವ ಪ್ರಿಯಾಂಕ್​ ಖರ್ಗೆ, ಗೃಹ ಸಚಿವ ಜಿ.ಪರಮೇಶ್ವರ್ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್ , ಕಾರ್ಯದರ್ಶಿ ಡಾ: ತ್ರಿಲೋಕ್ ಚಂದ್ರ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಪೊಲೀಸ್ ಆಯುಕ್ತ ಬಿ.ದಯಾನಂದ್, ಮೊದಲಾದವರು ಉಪಸ್ಥಿತರಿದ್ದರು.

ರಾಮೇಶ್ವರ ಕೆಫೆ ಬಾಂಬ್​ ಸ್ಫೋಟ

ಮಾರ್ಚ್​ 1 ರಂದು ಮಧ್ಯಾಹ್ನ ಬೆಂಗಳೂರಿನ ಕುಂದಲಹಳ್ಳಿಯ ಬ್ರೂಕ್‌ಫೀಲ್ಡ್‌ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿದ್ದು, 10 ಜನ ಗಾಯಗೊಂಡಿದ್ದಾರೆ. ಆರಂಭದಲ್ಲಿ ಸಿಲಿಂಡರ್ ಅಥವಾ ಬಾಯ್ಲರ್ ಸ್ಫೋಟ ಇರಬಹುದು ಎಂದು ಶಂಕಿಸಿದ್ದರೂ, ಬಳಿಕ ಇದು ಬಾಂಬ್ (ಐಇಡಿ) ಸ್ಫೋಟ ಎಂದು ಕರ್ನಾಟಕ ಸರ್ಕಾರ ಖಚಿತಪಡಿಸಿದೆ. 10 ಸೆಕೆಂಡ್ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿತ್ತು. ಅದು ಲಘು ಪ್ರಮಾಣದ ಐಇಡಿ ಸ್ಫೋಟ ಎಂಬುದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ. ಸ್ಫೋಟಕ್ಕೆ ಸಂಬಂಧಿಸಿದ ವಿಡಿಯೋಗಳು ಸೋಷಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿವೆ. ಸ್ಫೋಟಕ್ಕೆ ಸಂಬಂಧಿಸಿ ಮಹತ್ವದ ಬೆಳವಣಿಗೆಯಲ್ಲಿ ಶಂಕಿತ ಆರೋಪಿಯ ಚಲನವಲನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೊಲೀಸರು ಶಂಕಿತ ಆರೋಪಿಯ ಚಹರೆ ಗುರುತಿಸಿದ್ದು, ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ. ನಾಲ್ವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಮಂಗಳೂರಿನ ಕುಕ್ಕರ್ ಬಾಂಬ್‌ ಸ್ಫೋಟಕ್ಕೂ ನಂಟು ಇದೆ. ಈ ಕುರಿತು ತನಿಖೆ ನಡೆದಿದೆ. ಮಂಗಳೂರು ಮತ್ತು ಶಿವಮೊಗ್ಗ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದು ಸಿಸಿಬಿ ಪೊಲೀಸರ ಜೊತೆಗೆ ತನಿಖೆಯಲ್ಲಿ ಭಾಗಿಯಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

IPL_Entry_Point