ಬೆಂಗಳೂರು ಬೀದಿ ಕಾಳಗ ಕೇಸ್: ವಿನಾಕರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು ಬೀದಿ ಕಾಳಗ ಕೇಸ್: ವಿನಾಕರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ರಾಷ್ಟ್ರೀಯ ಮಾಧ್ಯಮಗಳು ಕರ್ನಾಟಕದ ಘನತೆಗೆ ಮಸಿಬಳಿಯುವ ಕೆಲಸವನ್ನು ಮಾಡಿದ್ದು ನಿಜಕ್ಕೂ ವಿಷಾದನೀಯ ಎಂದು ಸಿಎಂ ಖೇದ ವ್ಯಕ್ತಪಡಿಸಿದರು.

ಬೆಂಗಳೂರು ಬೀದಿ ಕಾಳಗ ಕೇಸ್: ಬೆಂಗಳೂರಿನ ಸಿವಿ ರಾಮನ್ ನಗರದ ಗೋಪಾಲನ್ ಗ್ರ್ಯಾಂಡ್ ಮಾಲ್ ಸಮೀಪ ಸೋಮವಾರ (ಏಪ್ರಿಲ್ 21) ಬೆಳಿಗ್ಗೆ ವಿಂಗ್ ಕಮಾಂಡರ್ ಶೀಲಾದಿತ್ಯ ಬೋಸ್ ಮೇಲೆ ಬೈಕ್ ಸವಾರನೊಬ್ಬ ಹಲ್ಲೆ ನಡೆಸಿದ್ದಾಗಿ ಆರೋಪಿಸಿದ ಘಟನೆ ಸಂಚಲನ ಮೂಡಿಸಿತ್ತು. ಅದಾದ ಬಳಿಕ ಬಹಿರಂಗವಾದ ಸಿಸಿಟಿವಿ ದೃಶ್ಯಗಳು ವಿಂಗ್ ಕಮಾಂಡರ್ ಶೀಲಾದಿತ್ಯ ಬೋಸ್ ಅವರು ಆಕ್ರಮಣಕಾರಿಯಾಗಿ ವರ್ತಿಸಿದ್ದು ಕಂಡುಬಂದಿದೆ. ಇದು ಈ ಹಲ್ಲೆ ಪ್ರಕರಣದ ಚಿತ್ರಣವನ್ನು ಬದಲಾಯಿಸಿದ್ದು, ವಿಂಗ್ ಕಮಾಂಡರ್ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ಈ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ತಪ್ಪಿತಸ್ಥರು ಯಾರಿದ್ದರೂ ಅವರ ವಿರುದ್ಧ ಕ್ರಮಕ್ಕೆ ಆದೇಶ ನೀಡಿದ್ದಾಗಿ ಹೇಳಿದ್ದಾರೆ.
ವಿನಾಕರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ. ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ. ಭಾಷೆಯ ವಿಚಾರಕ್ಕೆ ವಿನಾಕರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದೇಶದ ಮೂಲೆ ಮೂಲೆಗಳಿಂದ ಬಂದು ಇಲ್ಲಿ ನೆಲೆಸಿರುವ ಪ್ರತಿಯೊಬ್ಬರನ್ನು ಗೌರವದಿಂದ ಕಾಣುತ್ತಿರುವ, ಅವರನ್ನೂ ಕನ್ನಡಿಗರೇ ಎಂದು ಪ್ರೀತಿಸುವ ಸಂಸ್ಕೃತಿ ಕನ್ನಡ ಮಣ್ಣಿನದ್ದು. ಇದಕ್ಕೆ ಇತಿಹಾಸ ಸಾಕ್ಷಿ ಎಂದು ಸಿಎಂ ಪ್ರತಿಪಾದಿಸಿದರು.
ಕರ್ನಾಟಕದ ಘನತೆಗೆ ಮಸಿಬಳಿಯುವ ಕೆಲಸವನ್ನು ಮಾಡಿದ್ದು ನಿಜಕ್ಕೂ ವಿಷಾದನೀಯ
ರಾಷ್ಟ್ರೀಯ ಮಾಧ್ಯಮಗಳು ತಮ್ಮ ಜವಾಬ್ದಾರಿ ಮತ್ತು ವೃತ್ತಿಧರ್ಮ ಮರೆತು ಯಾರೋ ಒಬ್ಬ ಮಾಡಿದ ಆಧಾರ ರಹಿತ ಆರೋಪವನ್ನು ಹಿಡಿದುಕೊಂಡು ಇಡೀ ಕರ್ನಾಟಕದ ಘನತೆಗೆ ಮಸಿಬಳಿಯುವ ಕೆಲಸವನ್ನು ಮಾಡಿದ್ದು ನಿಜಕ್ಕೂ ವಿಷಾದನೀಯ. ಇದರಿಂದ ಪ್ರತಿಯೊಬ್ಬ ಕನ್ನಡಿಗನ ಮನಸಿಗೆ ಘಾಸಿಯಾಗಿದೆ.
ಕನ್ನಡಿಗರು ಉದ್ವೇಗ ಅಥವಾ ಪ್ರಚೋದನೆಗಳಿಗೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು. ಕನ್ನಡಿಗರಿಂದ ಆಯ್ಕೆಯಾದ ಕನ್ನಡದ್ದೆ ಸರ್ಕಾರ ಕರ್ನಾಟಕದಲ್ಲಿದೆ.
ನಿನ್ನೆಯ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿರಲಿ, ಯಾವ ಹುದ್ದೆಯಲ್ಲೇ ಇರಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಕಮಿಷನರ್ ಅವರಿಗೆ ಆದೇಶಿಸಿದ್ದೇನೆ. ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಅನ್ಯಾಯಕ್ಕೊಳಗಾದ ವ್ಯಕ್ತಿಗೆ ನ್ಯಾಯ ಕೊಡಿಸಲು ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.