ಬಿಸಿಗೆ ತತ್ತರಿಸಿದ ಬೆಂಗಳೂರು ಜನರಿಗೆ ಸಿಹಿ ಸುದ್ದಿ; ಮೇ ತಿಂಗಳಲ್ಲಿ ನಗರಕ್ಕೆ ಮಳೆ ಬರುವ ಸಾಧ್ಯತೆ ಎಂದ ಹವಾಮಾನ ಇಲಾಖೆ
ಮುಂದಿನ 48 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರ ನಡುವೆ ಮೇ ತಿಂಗಳಲ್ಲಿ ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಬೆಂಗಳೂರು: ಸಿಲಿಕಾನ್ ಸಿಟಿಯ ಜನರು ರಣ ಬಿಸಿಲಿಗೆ (Heat Wave) ಹೈರಾಣವಾಗಿದ್ದಾರೆ. ಬೆಳಗ್ಗೆ 10 ಗಂಟೆಯ ನಂತರ ಮನೆಯಿಂದ ಹೊರಗಡೆ ಬೇರಬೇಕಾದರೂ ಹಿಂದೆ ಮುಂದೆ ನೋಡುವಂತಾಗಿದೆ. ಅಷ್ಟರ ಮಟ್ಟಿಗೆ ಬಿಸಿಲು ಜನರ ಮೇಲೆ ಪರಿಣಾಮ ಬೀರಿದೆ. ಏಪ್ರಿಲ್‌ನಲ್ಲಿ ಮಳೆಯ ಮುನ್ಸೂಚನೆ (Rain Forecast) ಇತ್ತು ಆದರೆ ನಿರೀಕ್ಷಿತ ಮಟ್ಟದಲ್ಲಿ ನಗರಕ್ಕೆ ವರುಣ ಕೃಪೆ ತೋರಲಿಲ್ಲ. ಆದರೆ ಮುಂದಿನ ತಿಂಗಳು ಅಂದರೆ ಮೇನಲ್ಲಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ (Bengaluru Rain) ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂದಿನ ಕೆಲವು ದಿನಗಳವರೆಗೆ ಯಾವ ಜಿಲ್ಲೆಗಳಲ್ಲಿ ಬಿಸಿ ಹೆಚ್ಚಾಗಿರಲಿದೆ ಎಂಬ ಮಾಹಿತಿಯ ಜೊತೆಗೆ ಮೇ ತಿಂಗಳ ಮಳೆಯ ಮಾಹಿತಿಯನ್ನ ಭಾರತ ಹವಾಮಾನ ಇಲಾಖೆ (IMD) ನೀಡಿದೆ.
ಕರ್ನಾಟಕದಲ್ಲಿ (Karnataka Weather) ಕನಿಷ್ಠ ಕೆಲವು ದಿನಗಳವರೆಗೆ ಬಿಸಿಗಾಳಿ ಪರಿಸ್ಥಿತಿಗಳು ಮುಂದುವರಿಯುತ್ತವೆ ಎಂದು ಮುನ್ಸೂಚನೆ ನೀಡಿವೆ. ಇಂದಿನಿಂದ (ಏಪ್ರಿಲ್ 27, ಶುಕ್ರವಾರ) ರಿಂದ 30 ರವರೆಗೆ (ಮಂಗಳವಾರ) ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಬೀದರ್, ವಿಜಯನಗರ, ಗದಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಹಾವೇರಿ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ತಾಪಮಾನ ಮತ್ತು ಸುಡುವ ಶಾಖ ಹೆಚ್ಚಾಗಲಿದೆ ಎಂದು ಐಎಂಡಿ ತನ್ನ ದೈನಂದಿನ ಬುಲೆಟಿನ್ ನಲ್ಲಿ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಮುನ್ಸೂಚನೆ
ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆಗಳಲ್ಲಿ ಬೆಳಿಗ್ಗೆ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಶುಭ್ರ ಆಕಾಶ ಇರಲಿದ್ದು, ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉತ್ತರ ಕರ್ನಾಟಕದ ರಾಯಚೂರು ಜಿಲ್ಲೆಯಲ್ಲಿ ಸರಾಸರಿ 43.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್‌ಡಿಎಂಸಿ) ತಿಳಿಸಿದೆ. ರಾಜ್ಯದ ಭೌಗೋಳಿಕ ಪ್ರದೇಶದ ಶೇಕಡಾ 83 ರಷ್ಟು ಗರಿಷ್ಠ ತಾಪಮಾನವು 36 ರಿಂದ 42 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಯಚೂರು, ಕಲಬುರಗಿ, ವಿಜಯಪುರ, ಬೀದರ್, ಕೊಪ್ಪಳ, ಬಾಗಲಕೋಟೆ, ಯಾದಗಿರಿ ಮತ್ತು ಬಳ್ಳಾರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 42 ರಿಂದ 44 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಶಾಖಾಘಾತ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ದೀರ್ಘಕಾಲದ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವ ಅಥವಾ ಭಾರಿ ದೈಹಿಕ ಶ್ರಮದಲ್ಲಿ ತೊಡಗಿರುವ ವ್ಯಕ್ತಿಗಳಲ್ಲಿ ಶಾಖ-ಸಂಬಂಧಿತ ಅನಾರೋಗ್ಯದ ರೋಗಲಕ್ಷಣಗಳ ಹೆಚ್ಚಿನ ಅಪಾಯವನ್ನು ಸೂಚಿಸುತ್ತದೆ ಎಂದು ವರದಿಯೊಂದು ತಿಳಿಸಿದೆ.
ಏಪ್ರಿಲ್ 30 ರಿಂದ ಮೇ 3ರವರೆಗೆ ಈ ಜಿಲ್ಲೆಗಳಲ್ಲಿ ಲಘು ಮಳೆ ಸಾಧ್ಯತೆ
ಬೆಂಗಳೂರು ನಗರ, ವಿಜಯಪುರ, ಹಾಸನ, ಚಿತ್ರದುರ್ಗ, ರಾಯಚೂರು, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ತುಮಕೂರು, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಚಾಮರಾಜನಗರ, ರಾಮನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಏಪ್ರಿಲ್ 30 ರಿಂದ ಮೇ 3 ರವರೆಗೆ ಲಘು ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಹಳೆಯ ದಾಖಲೆಗಳನ್ನು ಮುರಿದ ಉಷ್ಣಾಂಶ
ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕ ಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಇಂದಿನಿಂದ (ಏಪ್ರಿಲ್ 27, ಶನಿವಾರ) ಮೇ 2 ರ (ಗುರುವಾರ) ಬೆಳಿಗ್ಗೆವರೆಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿತ್ತು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.