ಮುಡಾ ಹಗರಣದಲ್ಲಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್; ಸಿಎಂ ಪಾತ್ರ ಏನಿಲ್ಲ ಎಂದು ಕ್ಲೀನ್‌ಚಿಟ್ ಕೊಟ್ಟ ಲೋಕಾಯುಕ್ತ ವರದಿ
Muda site Scam: ಮುಡಾ ಸೈಟ್ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ.

ಬೆಂಗಳೂರು: ಕರ್ನಾಟಕದಲ್ಲಿ ಸಂಚಲನ ಮೂಡಿಸಿದ್ದ ಮುಡಾ ಸೈಟ್ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ತನಿಖೆ ಪೂರ್ಣಗೊಳಿಸಿರುವ ಲೋಕಾಯುಕ್ತ, ವರದಿಯನ್ನೂ ಸಿದ್ಧಪಡಿಸಿದೆ. ಲೋಕಾಯುಕ್ತ ತನ್ನ ವರದಿಯಲ್ಲಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿ ಅವರಿಗೆ ಕ್ಲೀನ್‌ಚಿಟ್ ನೀಡಿದೆ ಎಂದು ವರದಿಯಾಗಿದೆ. ಮುಡಾ ಹಗರಣದಲ್ಲಿ ಸಿಎಂ ಪಾತ್ರ ಏನೂ ಇಲ್ಲ ಎಂದು ಇದೇ ವರದಿ ತಿಳಿಸಿದೆ. ಆದರೆ ಡಿ ನೋಟಿಫೈ ವೇಳೆ ಅಧಿಕಾರಿಗಳು ನಿಯಮ ಉಲ್ಲಂಘಿಸಿದ್ದಾರೆ ಎಂದು ಲೋಕಾಯುಕ್ತ ತನ್ನ ವರದಿಯಲ್ಲಿ ತಿಳಿಸಿದೆ ಎನ್ನಲಾಗಿದೆ.
ಮೈಸೂರು ನಗರಾಭಿವೃದ್ಧಿ ಅಧಿಕಾರಿಗಳು ಮತ್ತು ಕಂದಾಯ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ಹೇಳಲಾಗಿದೆ. ಈ ಅಪರಾಧಕ್ಕೆ ಸಂಬಂಧಿಸಿ ಗಾಳಿಗೆ ತೂರಿರುವ ಅಧಿಕಾರಿಗಳ ವಿರುದ್ಧ ಏನೆಲ್ಲಾ ಕ್ರಮ ಕೈಗೊಳ್ಳಬೇಕು ಎನ್ನುವುದರ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲು ಲೋಕಾಯುಕ್ತ ಅಧಿಕಾರಿಗಳು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ತನಿಖೆ ಪೂರ್ಣಗೊಳಿಸಿರುವ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಜನವರಿ 27ರಂದು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ. ಇದು ನಿರೀಕ್ಷಿತವಾದ ವರದಿ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.
ಸ್ನೇಹಮಯಿ ಕೃಷ್ಣ ಹೇಳಿದ್ದೇನು?
ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ನೇಹಮಯಿ ಕೃಷ್ಣ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯಾವುದೇ ಪ್ರಭಾವ ಇಲ್ಲದೆಯೇ ಅಧಿಕಾರಿಗಳು ಅಕ್ರಮ ಎಸಗಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿ ಮತ್ತು ಅವರ ಹೆಂಡತಿಗೆ ಕ್ಲೀನ್ ಚಿಟ್ ನೀಡಿರುವ ಕುರಿತು ಯಾವುದೇ ಮಾಹಿತಿ ಇಲ್ಲ. ಆದರೆ ಇದು ನಿರೀಕ್ಷಿತವಾಗಿತ್ತು. ಹಾಗಂತ ಇದೆಲ್ಲಾ ನನ್ನ ಹೋರಾಟಕ್ಕೆ ಅಡ್ಡಿಯಾಗಲ್ಲ. ಈ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಪ್ರಭಾವ ಬಳಸಿದ್ದಾರೆ. ಅವರ ಪ್ರಭಾವ ಇಲ್ಲದೆಯೇ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘಿಸಲು ಅಸಾಧ್ಯ ಎಂದು ಆರೋಪಿಸಿದ್ದಾರೆ.
ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆಯೂ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ನಡೆಯುತ್ತಿದೆ. ಜನವರಿ 27ರ ಸೋಮವಾರ ಸಿಬಿಐ ತನಿಖೆ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ಇದಕ್ಕೂ ಮುನ್ನ ಲೋಕಾಯುಕ್ತ ಅಧಿಕಾರಿಗಳು ತನಿಖಾ ವರದಿ ನ್ಯಾಯಾಲಯಕ್ಕೆ ಸಲಿಸಲಿದ್ದಾರೆ.
