Prajwal Revanna Scandal: ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ; ಶೀಘ್ರದಲ್ಲೇ ಹಾಸನ ಸಂಸದ ಇರುವ ಸ್ಥಳ ಪತ್ತೆ-blue corner notice issued against prajwal revanna soon hassan mp will be located soon says g parameshwara rmy ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Prajwal Revanna Scandal: ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ; ಶೀಘ್ರದಲ್ಲೇ ಹಾಸನ ಸಂಸದ ಇರುವ ಸ್ಥಳ ಪತ್ತೆ

Prajwal Revanna Scandal: ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ; ಶೀಘ್ರದಲ್ಲೇ ಹಾಸನ ಸಂಸದ ಇರುವ ಸ್ಥಳ ಪತ್ತೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಎಸ್‌ಐಟಿ ಮನವಿ ಬೆನ್ನಲ್ಲೇ ಸಿಬಿಐ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದೆ.

ಪ್ರಜ್ವಲ್ ರೇವಣ್ಣ ಇರುವ ಸ್ಥಳ ಪತ್ತೆ ಹಚ್ಚಲು ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ಇರುವ ಸ್ಥಳ ಪತ್ತೆ ಹಚ್ಚಲು ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಲೈಂಗಿಕ ಕಿರುಕುಳ ಮತ್ತು ಅಪಹರಣ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna Sex Scandal) ಪತ್ತೆಗೆ ಈಗಾಗಲೇ ಬ್ಲೂ ಕಾರ್ನರ್ ನೋಟಿಸ್ (Blue Corner Notice) ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (Dr G Parameshwar) ತಿಳಿಸಿದ್ದಾರೆ. ಪ್ರಕರಣದ ತನಿಖೆ ನಡೆಸಲು ವಿಶೇಷ ತನಿಖಾ ತಂಡಕ್ಕೆ (SIT) ರಾಜ್ಯ ಸರ್ಕಾರ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ ಎಂದು ಅವರು ಹೇಳಿದ್ದಾರೆ.

ಇಂದು (ಮೇ 5, ಭಾನುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಜಿ.ಪರಮೇಶ್ವರ್, "ಎಸ್ಐಟಿ ಕಾರ್ಯವಿಧಾನದ ಪ್ರಕಾರ ಕೆಲಸ ಮಾಡುತ್ತಿದೆ ಮತ್ತು ನ್ಯಾಯಯುತ ತನಿಖೆ ನಡೆಸಲಾಗುವುದು. ನ್ಯಾಯಯುತ ತನಿಖೆಗಾಗಿ ನಾವು ಎಸ್ಐಟಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ. ಅವರು ಈಗಾಗಲೇ ಆ ಕೆಲಸದಲ್ಲಿದ್ದಾರೆ" ಎಂದು ಮಾಹಿತಿ ನೀಡಿದ್ದಾರೆ.

ದೇಶದಿಂದ ಪರಾರಿಯಾಗಿರುವ ಪ್ರಜ್ವಲ್ ರೇವಣ್ಣ ಅವರಿಗೆ ಬ್ಲೂ ಕಾರ್ನರ್ ನೋಟಿಸ್ ನೀಡಲಾಗಿದೆ ಎಂಬ ವರದಿಗಳ ಬಗ್ಗೆ ಕೇಳಿದಾಗ, "ಅವರನ್ನು ಹುಡುಕಲು ಬ್ಲೂ ಕಾರ್ನರ್ ನೋಟಿಸ್ ನೀಡಿರುವುದು ನಿಜ. ಸಂಬಂಧಪಟ್ಟ ಅಧಿಕಾರಿಗಳು ಆತನನ್ನು ಪತ್ತೆಹಚ್ಚುತ್ತಾರೆ. ನಾವು ಅವರನ್ನು ದೇಶಕ್ಕೆ ಮರಳಿ ಕರೆತರಲು ಪ್ರಯತ್ನಿಸುತ್ತಿದ್ದೇವೆ. ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸುವ ಮೂಲಕ ಅವರನ್ನು ಭಾರತಕ್ಕೆ ಕರೆತರಲು ಎಸ್ಐಟಿ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ವಿವರಿಸಿದ್ದಾರೆ.

ಜೆಡಿಎಸ್‌ನಿಂದ ಈಗಾಗಲೇ ಅಮಾನತುಗೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಅಶ್ಲೀಲ ವಿಡಿಯೊದಲ್ಲಿ ಇದ್ದಾರೆ ಎನ್ನಲಾದ ಮಹಿಳೆಯನ್ನು ಅಪಹರಣ ಮಾಡಿದ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ಅವರ ತಂದೆ ಶಾಸಕ ಎಚ್.ಡಿ.ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ (ಎಸ್ಐಟಿ)ದ ಅಧಿಕಾರಿಗಳು ಶನಿವಾರ (ಮೇ 4) ಸಂಜೆ ಬಂಧಿಸಿದ್ದಾರೆ. ಬೆಂಗಳೂರಿನ ನ್ಯಾಯಾಲಯವು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಕೂಡಲೇ ಅವರನ್ನು ಬಂಧಿಸಲಾಯಿತು.

ಶನಿವಾರ ಸಂಜೆ ಬೌರಿಂಗ್ ಆಸ್ಪತ್ರೆಯಲ್ಲಿ ಎಚ್.ಡಿ.ರೇವಣ್ಣ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಇವತ್ತು ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಎಚ್.ಡಿ.ರೇವಣ್ಣ ಮತ್ತು ಅವರ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದ ಬೆನ್ನಲ್ಲೇ ಎಚ್.ಡಿ.ರೇವಣ್ಣ ಹಾಗೂ ಅವರ ಆಪ್ತ ಸತೀಶ್ ಬಾಬಣ್ಣ ವಿರುದ್ಧ ಮೈಸೂರಿನಲ್ಲಿ ಗುರುವಾರ ರಾತ್ರಿ ಹೊಸ ಪ್ರಕರಣ ದಾಖಲಾಗಿದೆ. ತಮ್ಮ ಪುತ್ರ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಯನ್ನು ಅಪಹರಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ವಿಚಾರಣೆಗೆ ಹಾಜರಾಗದ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಈಗಾಗಲೇ ಎರಡನೇ ಲುಕ್ ಔಟ್ ನೋಟಿಸ್ ಜಾರಿ ಮಾಡಿದೆ.

ಪ್ರಜ್ವಲ್ ರೇವಣ್ಣ ಪ್ರಕರಣ ದೇಶ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲೂ ಸದ್ದು ಮಾಡಿದೆ. ಇದೇ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರ ನಡುವೆ ಆರೋಪ, ಪ್ರತ್ಯಾರೋಪಗಳು ಜೋರಾಗಿಯೇ ನಡೆಯುತ್ತಿವೆ.

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ (ಮೇ 4) ಎಸ್‌ಐಟಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಪ್ರಕರಣದ ಸಂಬಂಧ ಇದುವರೆಗಿನ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿಯವರು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದು, ಲುಕ್ಔಟ್ ನೋಟಿಸ್ ಜೊತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಅಧಿಕಾರಿಗಳು ವಿವರಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ಧಾಕ್ಷಿಣ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ಹಾಗೂ ವಿಳಂಬ ಧೋರಣೆ ಸಹಿಸಲಾಗದು ಎಂದು ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

mysore-dasara_Entry_Point