ಬಿಎಸ್ ಯಡಿಯೂರಪ್ಪ ಬಂಧನ ಬೇಡ: ಮಧ್ಯಂತರ ಆದೇಶ ವಿಸ್ತರಣೆ, ಮತ್ತೆ ರಿಲೀಫ್ ಕಂಡ ಮಾಜಿ ಸಿಎಂ ಆ 30ಕ್ಕೆ ವಿಚಾರಣೆ ನಿಗದಿ
ಕನ್ನಡ ಸುದ್ದಿ  /  ಕರ್ನಾಟಕ  /  ಬಿಎಸ್ ಯಡಿಯೂರಪ್ಪ ಬಂಧನ ಬೇಡ: ಮಧ್ಯಂತರ ಆದೇಶ ವಿಸ್ತರಣೆ, ಮತ್ತೆ ರಿಲೀಫ್ ಕಂಡ ಮಾಜಿ ಸಿಎಂ ಆ 30ಕ್ಕೆ ವಿಚಾರಣೆ ನಿಗದಿ

ಬಿಎಸ್ ಯಡಿಯೂರಪ್ಪ ಬಂಧನ ಬೇಡ: ಮಧ್ಯಂತರ ಆದೇಶ ವಿಸ್ತರಣೆ, ಮತ್ತೆ ರಿಲೀಫ್ ಕಂಡ ಮಾಜಿ ಸಿಎಂ ಆ 30ಕ್ಕೆ ವಿಚಾರಣೆ ನಿಗದಿ

BS Yediyurappa: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸುವುದು ಬೇಡ ಎಂದು ಹೈಕೋರ್ಟ್ ಸೂಚಿಸಿದೆ. ಮಧ್ಯಂತರ ಆದೇಶ ವಿಸ್ತರಿಸಿ ಆಗಸ್ಟ್ 30ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ. (ವರದಿ-ಎಚ್. ಮಾರುತಿ)

ಬಿಎಸ್ ಯಡಿಯೂರಪ್ಪ ಬಂಧನ ಬೇಡ ಎಂದ ಹೈಕೋರ್ಟ್
ಬಿಎಸ್ ಯಡಿಯೂರಪ್ಪ ಬಂಧನ ಬೇಡ ಎಂದ ಹೈಕೋರ್ಟ್

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪೋಕ್ಸೋ ಪ್ರಕರಣದಲ್ಲಿ ಹಿರಿಯ ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ತನ್ನ ಮಧ್ಯಂತರ ಆದೇಶವನ್ನು ಹೈಕೋರ್ಟ್ ಪುನಃ ವಿಸ್ತರಿಸಿದೆ. ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಪೋಕ್ರೋ ಪ್ರಕರಣದಲ್ಲಿ ಪೊಲೀಸರು ಯಡಿಯೂರಪ್ಪ ಅವರನ್ನು ಬಂಧಿಸಬಾರದು ಮತ್ತು ವಿಚಾರಣೆಗಾಗಿ ಅವರ ಖುದ್ದು ಹಾಜರಾತಿಗೆ ವಿನಾಯಿತಿ ನೀಡಲಾಗಿದೆ ಎಂಬ ತನ್ನ ಮಧ್ಯಂತರ ಆದೇಶವನ್ನು ಪುನಃ ವಿಸ್ತರಿಸಿದೆ.

ಈ ಪ್ರಕರಣ ರದ್ದುಪಡಿಸುವಂತೆ ಕೋರಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಆದ ಯಡಿಯೂರಪ್ಪ ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆಯನ್ನು ಶಾಸಕರು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಮುಂದೆ ಆಗಸ್ಟ್ 22ಕ್ಕೆ ನಿಗದಿಯಾಗಿತ್ತು. ಆದರೆ ದಿನದ ಪಟ್ಟಿಯಲ್ಲಿ ಪ್ರಕರಣದ ಸಂಖ್ಯೆ ನಮೂದಾಗಿರದ ಕಾರಣ ವಿಶೇಷ ಪ್ರಾಸಿಕ್ಯೂಟರ್ ಅಶೋಕ್ ಎನ್. ನಾಯಕ್ ಅವರು ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳುವಂತೆ ಕೋರಿ ಗುರುವಾರ ಬೆಳಿಗ್ಗೆ ತುರ್ತು ಮೆಮೊ ಸಲ್ಲಿಸಿದ್ದರು.

ನ್ಯಾಯಪೀಠವು, ಈ ಮೆಮೊವನ್ನು ದಿನದ ಕಲಾಪದ ಕೊನೆಗೆ ಕೈಗೆತ್ತಿಕೊಂಡಿತು. ಆದರೆ ಆಗ ಸಮಯ ಸಂಜೆ 5 ಗಂಟೆಯಾಗಿರುವ ಕಾರಣ ವಾದ ಆಲಿಸಲು ಸಮಯಾವಕಾಶದ ಕೊರತೆ ಇದೆ. ಆದ್ದರಿಂದ ವಿಚಾರಣೆಯನ್ನು ಇದೇ 30ಕ್ಕೆ ಮುಂದೂಡಿತು. ಬಿಎಸ್ ಯಡಿಯೂರಪ್ಪ ಪರ ವಕೀಲೆ ಸ್ವಾಮಿನಿ ಗಣೇಶ ಮೋಹನಂಬಾಳ್ ಹಾಗೂ ಸಂತ್ರಸ್ತ ಬಾಲಕಿಯ ಪರವಾಗಿ ಎಸ್.ಬಾಲನ್ ಹಾಜರಿದ್ದರು.

ಏನಿದು ಪ್ರಕರಣ?

ತಮ್ಮ 17 ವರ್ಷದ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು 53 ವರ್ಷದ ಮಹಿಳೆಯೊಬ್ಬರು ಯಡಿಯೂರಪ್ಪ ವಿರುದ್ಧ ಮಾರ್ಚ್ 14ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಮ್ಮ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು ನ್ಯಾಯಕ್ಕಾಗಿ ಸಹಾಯ ಮಾಡುವಂತೆ ಕೋರಿ ಯಡಿಯೂರಪ್ಪ ಅವರ ಬಳಿ ಹೋಗಿದ್ದಾಗಿ ಆ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿಯ ಮನೆಗೆ ತೆರಳಿ ಸಹಾಯ ಕೇಳಿದಾಗ ಅವರು ನನ್ನ ಪುತ್ರಿಯನ್ನು ಪ್ರತ್ಯೇಕ ಕೊಠಡಿಯೊಳಕ್ಕೆ ಕರೆದೊಯ್ದು ನನ್ನ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ವಿಷಯವನ್ನು ಯಾರಿಗೂ ಹೇಳದಂತೆ ಒಂದಿಷ್ಟು ಹಣ ನೀಡಿದ್ದರು ಎಂದು ಸಂತ್ರಸ್ತ ಬಾಲಕಿಯ ತಾಯಿ ಆರೋಪಿಸಿದ್ದರು.

ಈ ಆರೋಪಕ್ಕೆ ಪೂರಕವಾಗಿ ಈ ಮಹಿಳೆಯ ಮೊಬೈಲ್‌ ನಲ್ಲಿ ರೆಕಾರ್ಡ್ ಮಾಡಲಾಗಿದ್ದ ವಿಡಿಯೋ ತುಣುಕುಗಳನ್ನು ಯಡಿಯೂರಪ್ಪ ಅವರ ಬೆಂಬಲಿಗರು ಬಲವಂತವಾಗಿ ಅಳಿಸಿ ಹಾಕಿದ್ದರು. ಆ ಮಹಿಳೆಯು ತಿಂಗಳ ಹಿಂದೆ ಅನಾರೋಗ್ಯದಿಂದ ಮೃತರಾಗಿದ್ದಾರೆ. ನಂತರ ಸದಾಶಿವ ನಗರ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಅಡಿಯಲ್ಲಿ ಎಫ್​ಐಆರ್ ದಾಖಲಿಸಿದ್ದರು. ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ 2 ಬಾರಿ ನೋಟಿಸ್ ನೀಡಿದ್ದರೂ ಬಿಎಸ್​ವೈ ಗೈರಾಗಿದ್ದರು.

ಅಂತಿಮವಾಗಿ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ವಿರುದ್ಧ ಬಂಧನ ವಾರಂಟ್ ಹೊರಡಿಸುವಂತೆ ಕೋರಿ ನಗರದ 1ನೇ ತ್ವರಿತಗತಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ ಅವರ ಬಂಧನಕ್ಕೆ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ತಮ್ಮ ವಿರುದ್ಧ ದಾಖಲಾಗಿರುವ ದೂರು ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಹೈಕೋರ್ಟ್‌ ನಲ್ಲಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ನಿರ್ದೇಶನದಂತೆ ಯಡಿಯೂರಪ್ಪ ಅವರು ಸಿಐಡಿ ಎದುರು ವಿಚಾರಣೆಗೆ ಹಾಜರಾಗಿದ್ದರು. ಈ ಪ್ರಕರಣದಲ್ಲಿ ಜಾಮೀನು ಪಡೆದು ಕೊಂಡಿರುವ ಅವರು ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯುತ್ತಿದೆ.

Whats_app_banner