ಚನ್ನಪಟ್ಟಣದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಕಗ್ಗಂಟು; ಕಾಂಗ್ರೆಸ್‌ನಿಂದ ಬಹುತೇಕ ಇದೇ ಅಭ್ಯರ್ಥಿ ಕಣಕ್ಕಿಳಿಯುವ ಸಾಧ್ಯತೆ
ಬಿಜೆಪಿ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಸಂಡೂರು ಕ್ಷೇತ್ರಕ್ಕೆ ಬಂಗಾರು ಹನುಮಂತು ಅವರಿಗೆ ಟಿಕೆಟ್ ನೀಡಿದೆ. ಶಿಗ್ಗಾಂವಿ ಕ್ಷೇತ್ರಕ್ಕೆ ಭರತ್ ಬಸವರಾಜ್ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಿದೆ. ಜೆಡಿಎಸ್ ಹಾಗೂ ಕಾಂಗ್ರೇಸ್‌ನಿಂದ ಯಾರು? ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ.
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13 ರಂದು ಉಪ ಚುನಾವಣೆ ನಡೆಯಲಿದೆ. ಬಿಜೆಪಿ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಸಂಡೂರು ಕ್ಷೇತ್ರಕ್ಕೆ ಬಂಗಾರು ಹನುಮಂತು ಅವರಿಗೆ ಟಿಕೆಟ್ ನೀಡಿದೆ. ಶಿಗ್ಗಾಂವಿ ಕ್ಷೇತ್ರಕ್ಕೆ ಭರತ್ ಬಸವರಾಜ್ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಿದೆ.
ಚನ್ನಪಟ್ಟಣದಲ್ಲಿ ಯಾವ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂಬ ಚರ್ಚೆಯಲ್ಲೇ ಬಿಜೆಪಿ ಜೆಡಿಎಸ್ ಮುಳುಗಿದ್ದು ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ಮಾಜಿ ಮುಖ್ಯಮಂತ್ರಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರಕ್ಕೆ ಎನ್ ಡಿಎ ಮೈತ್ರಿ ಕೂಟದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗುವುದು ಖಚಿತವಾಗಿದೆ.
ಕಾಂಗ್ರೆಸ್ ನಿಂದ ಮಾಜಿ ಸಂಸದ ಡಿ.ಕೆ.ಸುರೇಶ್ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಉಪಮುಖ್ಯಮಂತ್ರಿ ಮತ್ತು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಈಗಾಗಲೇ ಹತ್ತಾರು ಬಾರಿ ಚನ್ನಪಟ್ಟಣಕ್ಕೆ ಭೇಟಿ ನೀಡಿದ್ದಾರೆ. ನೂರಾರು ಕೋಟಿ ರೂ.ಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನೂ ನೆರವೇರಿಸಿದ್ದಾರೆ. ಡಿಕೆ ಸೋದರರು ಈಗಾಗಲೇ ಚುನಾವಣಾ ಪ್ರಚಾರವನ್ನೂ ಆರಂಭಿಸಿದ್ದಾರೆ.
ಜೆಡಿಎಸ್ ಗೆ ಚನ್ನಪಟ್ಟಣದದಲ್ಲಿ ಸಿ.ಪಿ. ಯೋಗೇಶ್ವರ್ ತಲೆನೋವಾಗಿ ಪರಿಣಮಿಸಬಹುದು ಎನ್ನಲಾಗುತ್ತಿದೆ. ಯೋಗೇಶ್ವರ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಅವರ ಆಪ್ತರು ಹೇಳುತ್ತಿದ್ದಾರೆ. ಮೂರು ಕ್ಷೇತ್ರಗಳು ಮೂರೂ ಪಕ್ಷಗಳ ಕ್ಷೇತ್ರಗಳಾಗಿದ್ದು ಉಳಿಸಿಕೊಳ್ಳುತ್ತವೆಯೋ ಅಥವಾ ಕಳೆದುಕೊಳ್ಳುತ್ತವೆಯೋ ಎಂದು ಕಾದು ನೋಡಬೇಕಿದೆ.
ಸಂಡೂರಿನಿಂದ ಬಿಜೆಪಿ ಟಿಕೆಟ್ ಗಾಗಿ ಮಾಜಿ ಸಂಸದ ದೇವೇಂದ್ರಪ್ಪ, ಶ್ರೀರಾಮುಲು ಮತ್ತು ಎಸ್ ಟಿ ಮೋರ್ಚಾ ಅಧ್ಯಕ್ಷ ಕೆ.ದಿವಾಕರ್ ಆಕಾಂಕ್ಷಿಗಳಾಗಿದ್ದರು. ಇದೀಗ ಅವರಿಗೆ ನಿರಾಶೆಯಾಗಿದೆ. ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾದ ತುಕಾರಾಂ ಅವರು ಸಂಡೂರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಲ್ಲಿ ಕಾಂಗ್ರೆಸ್ ನಿಂದ ತುಕಾರಾಂ ಅವರ ಪತ್ನಿ ಇಲ್ಲವೇ ಪುತ್ರಿ ಅಭ್ಯರ್ಥಿಯಾಗುವುದು ಖಚಿತ ಎಂದು ಪಕ್ಷದ ಮೂಲಗಳು ತಿಳಿಸಿವೆ.
ವರದಿ: ಎಚ್. ಮಾರುತಿ
ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿಗಳ ಡಿಜಿಟಲೀಕರಣ: ಬೆಂಗಳೂರಿನಲ್ಲಿ ಆಸ್ತಿ ನೋದಣಿಗೆ ಅಂತಿಮ ಇ-ಖಾತಾ ಹೀಗೆ ಪಡೆಯಿರಿ