KCET 2025: ಸಿಇಟಿ ಪರೀಕ್ಷೆ ದಿನಾಂಕ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ; ಅರ್ಜಿ ಸಲ್ಲಿಸಲು ಫೆ 21 ಕೊನೆಯ ದಿನಾಂಕ
Cet exam date 2025 Karnataka: ಎಂಜಿನಿಯರಿಂಗ್, ಪಶುವೈದ್ಯಕೀಯ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಏಪ್ರಿಲ್ 16 ಮತ್ತು 17ರಂದು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ನಡೆಸಲಿದೆ. ಸಿಇಟಿ, ಪಿಜಿಸಿಇಟಿ, ಎಂ.ಫಾರ್ಮಾ ಪ್ರವೇಶ ಪರೀಕ್ಷೆ ದಿನಾಂಕವನ್ನೂ ಪ್ರಕಟಿಸಲಾಗಿದೆ.

ಬೆಂಗಳೂರು: ಕರ್ನಾಟಕದ ಸಿಇಟಿ ಪರೀಕ್ಷೆ ದಿನಾಂಕ ಪ್ರಕಟವಾಗಿದೆ. 2025ನೇ ಸಾಲಿನ ಎಂಜಿನಿಯರಿಂಗ್, ಪಶುವೈದ್ಯಕೀಯ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಏಪ್ರಿಲ್ 16 ಮತ್ತು 17ರಂದು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ನಡೆಸಲಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 23ರಿಂದ ಫೆಬ್ರುವರಿ 21ರವರೆಗೆ ಅವಕಾಶ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಗುರುವಾರ ಪ್ರಕಟಿಸಿದ್ದಾರೆ.
ಇತರೆ ಪ್ರವೇಶ ಪರೀಕ್ಷೆಗಳ ದಿನಾಂಕ
ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ (ಡಿಸಿಇಟಿ), ಪಿಜಿಸಿಇಟಿ ಮತ್ತು ಎಂ.ಫಾರ್ಮಾ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗಳ ದಿನಾಂಕಗಳನ್ನೂ ಸಚಿವರು ಘೋಷಣೆ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ವರ್ಷದಲ್ಲಿ ನಡೆಯುವ ಎಲ್ಲ ವೃತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗಳ ಬಗ್ಗೆ ಒಮ್ಮೆಗೇ ಸಚಿವರು ಮಾಹಿತಿ ನೀಡಿದ್ದು, ಆ ಪ್ರಕಾರ ಎಲ್ಲ ಸಂಬಂಧಪಟ್ಟ ಇಲಾಖೆಗಳೂ ಕೆಲಸ ಮಾಡಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.
ಸಿಇಟಿ ಪರೀಕ್ಷೆ ದಿನಾಂಕ
"ಏಪ್ರಿಲ್ 16ರಂದು ಬೆಳಿಗ್ಗೆ 10.30ರಿಂದ ಭೌತವಿಜ್ಞಾನ ಮತ್ತು ಮಧ್ಯಾಹ್ನ 2.30ರಿಂದ ರಸಾಯನ ವಿಜ್ಞಾನ ಹಾಗೂ ಏಪ್ರಿಲ್ 17ರಂದು ಬೆಳಿಗ್ಗೆ ಗಣಿತ ಮತ್ತು ಮಧ್ಯಾಹ್ನ ಜೀವವಿಜ್ಞಾನ ವಿಷಯಗಳ ಪರೀಕ್ಷೆಗಳು ನಡೆಯಲಿವೆ. ಏ.18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಯೋಗ ಮತ್ತು ನ್ಯಾಚುರೋಪತಿ, ಬಿ-ಫಾರ್ಮ ಮತ್ತು ಫಾರ್ಮಾ-ಡಿ, ಕೃಷಿ ವಿಜ್ಞಾನ ಕೋರ್ಸ್ ಮತ್ತು ಬಿಎಸ್‌ಸಿ (ನರ್ಸಿಂಗ್) ಕೋರ್ಸ್‌ಗಳ ಪ್ರವೇಶಕ್ಕೂ ಇದೇ ಪರೀಕ್ಷೆಯ ಅಂಕಗಳನ್ನು ಪರಿಗಣಿಸಲಾಗುತ್ತದೆ" ಎಂದು ಅವರು ಮಾಹಿತಿ ನೀಡಿದ್ದಾರೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ
ಸಿಇಟಿ-2025 ರ ಅರ್ಜಿಯು ಎಲ್ಲಾ ಕೋರ್ಸುಗಳಿಗೆ ಸಾಮಾನ್ಯ ಅರ್ಜಿಯಾಗಿರುವುದರಿಂದ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಪ್ರವೇಶಾತಿಗೂ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೊಂದಾಯಿಸಿಕೊಂಡು, ಅರ್ಜಿ ಶುಲ್ಕ ಪಾವತಿಸುವುದು ಕಡ್ಡಾಯವಾಗಿರುತ್ತದೆ. ಅದೇ ರೀತಿ ಆರ್ಕಿಟೆಕ್ಚರ್, ಬಿಪಿಟಿ, ಬಿಪಿಒ, ಬಿಎಸ್‌ಸಿ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸುಗಳ ಪ್ರವೇಶಾತಿಗೆ ಇದೇ ಅರ್ಜಿ ಅನ್ವಯವಾಗುತ್ತಿದ್ದು, ಅವರು ಕೂಡ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
ಭದ್ರತೆಯ ದೃಷ್ಟಿಯಿಂದ ಸಿಇಟಿ ಅರ್ಜಿಯನ್ನು ಭರ್ತಿ ಮಾಡುವ ಮತ್ತು ದಾಖಲೆಗಳ ಪರಿಶೀಲನೆ ವಿಷಯದಲ್ಲಿ ಈ ಬಾರಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರಿಂದ ಯಾರದ್ದೊ ಅರ್ಜಿಯನ್ನು ಇನ್ಯಾರೊ ಭರ್ತಿ ಮಾಡಲು ಸಾಧ್ಯವೇ ಇರುವುದಿಲ್ಲ. ಪ್ರತಿ ಹಂತದಲ್ಲಿ ಪ್ರಮಾಣಿಕರಿಸಿಯೇ ಮುಂದಿನ ಪ್ರಕ್ರಿಯೆ ನಡೆಸಲಾಗುತ್ತದೆ. ಇದರಿಂದ ಅಕ್ರಮಗಳಿಗೆ ಬ್ರೇಕ್ ಹಾಕಿದಂತಾಗಲಿದೆ ಎಂದು ಅವರು ವಿವರಿಸಿದ್ದಾರೆ.
ವಿವಿಧ ಪರೀಕ್ಷೆಗಳ ದಿನಾಂಕಗಳು
ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷ ಅಥವಾ 3ನೇ ಸೆಮಿಸ್ಟರ್‌ಗೆ ಸೇರಲು ಡಿಸಿಇಟಿ ಪರೀಕ್ಷೆ ಬರೆಯಬೇಕಾಗುತ್ತದೆ. ಅದಕ್ಕೆ ಅರ್ಜಿ ಸಲ್ಲಿಸಲು ಏಪ್ರಿಲ್ 24ರಿಂದ ಮೇ 10ರವರೆಗೆ ಅವಕಾಶ ನೀಡಲಾಗುತ್ತದೆ. ಈ ಪರೀಕ್ಷೆ ಮೇ 31ರಂದು ನಡೆಯಲಿದೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.
ಪಿಜಿಸಿಇಟಿ (ಎಂಇ, ಎಂಟೆಕ್, ಎಂ.ಆರ್ಕಿಟೆಕ್ಚರ್) ಕೋರ್ಸ್‌ಗಳ ಪ್ರವೇಶಕ್ಕೆ ಮೇ 31ರಂದು ಪರೀಕ್ಷೆ ನಡೆಸಲಾಗುತ್ತದೆ. ಇದಕ್ಕೆ ಅರ್ಜಿ ಸಲ್ಲಿಸಲು ಏಪ್ರಿಲ್ 24ರಿಂದ ಮೇ 10ರವರೆಗೆ ಅವಕಾಶ ನೀಡಲಾಗಿದೆ.
ಅದೇ ರೀತಿ ಎಂಸಿಎ ಮತ್ತು ಎಂಬಿಎ ಕೋರ್ಸ್‌ಗಳ ಪ್ರವೇಶಕ್ಕೆ ಜೂನ್ 22ರಂದು ಪರೀಕ್ಷೆ ನಡೆಸಲಾಗುತ್ತದೆ. ಇದಕ್ಕೆ ಏಪ್ರಿಲ್ 24ರಿಂದ ಜೂನ್ 10ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಎಂ.ಫಾರ್ಮ ಮತ್ತು ಫಾರ್ಮಾ-ಡಿ ಕೋರ್ಸ್‌ಗಳ ಪ್ರವೇಶಕ್ಕೆ ಜೂನ್ 22ರಂದು ಪರೀಕ್ಷೆ ನಡೆಸಲಾಗುತ್ತದೆ. ಏಪ್ರಿಲ್ 24ರಿಂದ ಜೂನ್ 10ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಬಹುತೇಕ ಇದೇ ದಿನಾಂಕಗಳಂದೇ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಇದರಲ್ಲಿ ಯಾವ ಬದಲಾವಣೆಯೂ ಇರುವುದಿಲ್ಲ ಎಂದು ಸುಧಾಕರ್ ತಿಳಿಸಿದ್ದಾರೆ.
