ಕನ್ನಡ ಸುದ್ದಿ  /  Karnataka  /  Cm Bommai Says Special Plan For The Development Of North Karnataka

Basavaraj Bommai: 'ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ವಿಶೇಷ ಯೋಜನೆ'

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದ ಸಿಎಂ, ಸಂಪೂರ್ಣವಾಗಿದ್ದ ಯೋಜನೆಗಳನ್ನು ಲೋಕಾರ್ಪಣೆಗೊಳಿಸಿದರು.

ಬೆಳಗಾವಿಯಲ್ಲಿ ಸಿಎಂ ಬೊಮ್ಮಾಯಿ
ಬೆಳಗಾವಿಯಲ್ಲಿ ಸಿಎಂ ಬೊಮ್ಮಾಯಿ

ಬೆಳಗಾವಿ: ರಾಜ್ಯದ ಅತಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯು ರಾಜ್ಯದ ಕಿರೀಟವಿದ್ದಂತೆ. ಈ ಜಿಲ್ಲೆಯ ನೀರಾವರಿ, ಕೈಗಾರಿಕೋದ್ಯಮ, ಕೃಷಿ ಅಭಿವೃದ್ಧಿಗೆ ಸರ್ಕಾರ ನೆರವು ನೀಡಲಿದೆ. ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಮುಂಬರುವ ದಿನಗಳಲ್ಲಿ ಸರ್ಕಾರ ವಿಶೇಷ ಯೋಜನೆ ರೂಪಿಸಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಇಂದು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದ ಸಿಎಂ, ಸಂಪೂರ್ಣವಾಗಿದ್ದ ಯೋಜನೆಗಳನ್ನು ಲೋಕಾರ್ಪಣೆಗೊಳಿಸಿದರು.

ಎಲ್ಲ ಸಮುದಾಯಗಳಿಗೆ ಸರ್ಕಾರಿ ಸೌಲಭ್ಯ

ಹತ್ತು ಲಕ್ಷಕ್ಕೂ ಅಧಿಕ ಮಕ್ಕಳಿಗೆ 600 ಕೋಟಿ ರೂಪಾಯಿ ಶಿಷ್ಯವೇತನವನ್ನು ರೈತ ವಿದ್ಯಾನಿಧಿ ಯೋಜನೆ ಮೂಲಕ ಒದಗಿಸಲಾಗಿದೆ. ಇದೇ ರೀತಿ ಕೃಷಿ ಕೂಲಿಕಾರರು, ಮೀನುಗಾರರು, ಚಾಲಕರ ಮಕ್ಕಳಿಗೂ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲಾಗಿದೆ. 6 ಲಕ್ಷ ಕೃಷಿ ಕೂಲಿಕಾರರ ಮಕ್ಕಳಿಗೆ ವಿದ್ಯಾನಿಧಿ ನೀಡಲಾಗುವುದು. ಎಲ್ಲ ಸಮುದಾಯಗಳಿಗೆ ಸರ್ಕಾರಿ ಸೌಲಭ್ಯಗಳನ್ನು ಒದಗಿಸುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಲಾಗಿದೆ.‌ 20 ಕುರಿ ಮತ್ತು 1 ಮೇಕೆಯಂತೆ 20 ಸಾವಿರ ಕುರಿಗಾಹಿಗಳ ಸಂಘಗಳಿಗೆ ನೀಡುವ ಯೋಜನೆಗೆ 354 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ.

ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಕ್ಕೆ ಆದ್ಯತೆ

ಕಾಯಕ, ಸ್ತ್ರೀ ಸಾಮರ್ಥ್ಯ, ವಿವೇಕಾನಂದ ಯುವಶಕ್ತಿ ಯೋಜನೆ ಮೂಲಕ ಎಲ್ಲ ವರ್ಗದ ಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸರ್ಕಾರ ನೆರವು ನೀಡುತ್ತಿದೆ.‌ ವಿವೇಕ ಯೋಜನೆಯಡಿ 8,000 ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗುವುದು. ನಮ್ಮ ಕ್ಲಿನಿಕ್, ಶಾಲಾ ಕೊಠಡಿಗಳ ನಿರ್ಮಾಣ, ಆರೋಗ್ಯ ಸೌಲಭ್ಯ ಹೆಚ್ಚಳ ಮತ್ತಿತರ ವಿಷಯಗಳನ್ನು ಪ್ರಸ್ತಾಪಿಸಿದ ಅವರು, ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಕ್ಕೆ ಆದ್ಯತೆ ನೀಡಲಾಗಿದೆ ಎಂದರು.‌

ಗೋವುಗಳ ರಕ್ಷಣೆ ನಮ್ಮ ಸಂಸ್ಕೃತಿ

ಪ್ರಜಾಪ್ರಭುತ್ವ ಎಂದರೆ ಮತ ಹಾಕುವುದು ಮಾತ್ರವಲ್ಲ; ದೇಶ ಕಟ್ಟುವುದರಲ್ಲಿ ಎಲ್ಲರ ಪಾಲ್ಗೊಳ್ಳುವಿಕೆಯು ಪ್ರಜಾಪ್ರಭುತ್ವದ ಶಕ್ತಿಯಾಗಿದೆ. ಗೋಹತ್ಯೆ ನಿಷೇಧ ಕಾನೂನು ಜಾರಿ ಮಾಡಲಾಗಿದೆ. ಗೋವುಗಳ ರಕ್ಷಣೆ ನಮ್ಮ ಸಂಸ್ಕೃತಿ. 30 ಜಿಲ್ಲೆಗಳಲ್ಲಿ ಗೋಶಾಲೆ ಪ್ರಾರಂಭಿಸಲಾಗಿದ್ದು, ಪುಣ್ಯಕೋಟಿ ದತ್ತು ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದರು.

ಹಿಂದಿನ ಸರ್ಕಾರಗಳಿಗೆ ಇಚ್ಛಾಶಕ್ತಿ ಇಲ್ಲದಿರುವುದರಿಂದ ಪರಿಶಿಷ್ಟ ಜಾತಿ ಅಥವಾ ಪಂಗಡ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳ ಮಾಡಿರಲಿಲ್ಲ. ಆದರೆ ಯಾವುದೇ ಟೀಕೆ-ಟಿಪ್ಪಣಿಗೆ ಸೊಪ್ಪುಹಾಕದೆ ಪರಿಶಿಷ್ಟ ಜಾತಿ/ಪಂಗಡಗಳ ಸಮುದಾಯದ ಮೀಸಲಾತಿ ಹೆಚ್ಚಿಸುವ ದಿಟ್ಟ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ ಎಂದರು.‌

ಕಾರ್ಯಕ್ರಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ, ಲೋಕೋಪಯೋಗಿ ಇಲಾಖೆ ಸಚಿವ ಸಿ ಸಿ ಪಾಟೀಲ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯ ಸಚಿವ ಮುರುಗೇಶ್ ನಿರಾಣಿ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಕೆಎಂಎಫ್ ಅಧ್ಯಕ್ಷರಾದ ಶಾಸಕ ಬಾಲಚಂದ್ರ ಜಾರಕಿಹೊಳಿ, ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಮಂಗಳ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಿ ರಾಜೀವ್, ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಾರುತಿ ಅಷ್ಟಗಿ, ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ಹನುಮಂತ ನಿರಾಣಿ, ಶಾಸಕರಾದ ಅನಿಲ್ ಬೆನಕೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ ಮತ್ತಿತರರು ಉಪಸ್ಥಿತರಿದ್ದರು.

IPL_Entry_Point