ರಾಜ್ಯದ ಜನರ ರಕ್ಷಣೆಗೆ ಮೊದಲ ಆದ್ಯತೆ; ಎಲ್ಲಾ ಜಿಲ್ಲೆಗಳಲ್ಲಿ ಅಣಕು ಕಾರ್ಯಾಚರಣೆ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚನೆ
ಅಗ್ನಿಶಾಮಕ ದಳದ ಕೇಂದ್ರಗಳು ದಿನದ 24 ಗಂಟೆ ಸನ್ನದ್ಧ ಸ್ಥಿತಿಯಲ್ಲಿರಬೇಕು. ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆದು, ಸಹಾಯವಾಣಿ ಆರಂಭಿಸಬೇಕು. ಪೌರ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಿ, ಅವರಿಗೆ ಸೂಕ್ತ ತರಬೇತಿ ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಅತ್ತ ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವೆ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಯುದ್ಧದ ವಾತಾವರಣ ಸೃಷ್ಟಿಯಾಗಿದೆ. ಭಾರತದಾದ್ಯಂತ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಪರಿಸ್ಥಿತಿ ಅರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಆಯಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಅದರಂತೆಯೇ ರಾಜ್ಯದ ಕಾನೂನು ಸುವ್ಯವಸ್ಥೆಗಿಂತ ಯಾವುದೂ ದೊಡ್ಡದಲ್ಲ ಎಂದಿರುವ ಕರ್ನಾಟಕ ಸಿಎಂ ಸಿದ್ದರಾಮಯ್ಯ, ರಾಜ್ಯದ ಜನರ ರಕ್ಷಣೆಗೆ ಮೊದಲ ಆದ್ಯತೆ ನೀಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮುಖ್ಯವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಣಕು ಕಾರ್ಯಾಚರಣೆ (mock drill) ನಡೆಸಲು ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ನಾಗರಿಕರ ರಕ್ಷಣಾ ಕಾರ್ಯಚಟುವಟಿಕೆಗಳ ಕುರಿತು ರಾಜ್ಯದ ಹಿರಿಯ ಪೋಲಿಸ್ ಅಧಿಕಾರಿಗಳು, ಎಲ್ಲಾ ಮಹಾನಗರಗಳ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರಿಂದ ಮಾಹಿತಿ ಪಡೆದರು. ಈ ವೇಳೆ ಗೃಹ ಸಚಿವ ಡಾ. ಜಿ ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡರು.
ಸಭೆಯಲ್ಲಿ ಸಿಎಂ ನೀಡಿದ ಸೂಚನೆಗಳು
ಕಾನೂನು ಸುವ್ಯವಸ್ಥೆಯೊಂದಿಗೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದ ಸಿಎಂ, ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿರಬೇಕು ಎಂದು ಸೂಚಿಸಿದರು. ಈ ಕುರಿತು ರಾಜ್ಯ ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಮಾರ್ಗಸೂಚಿಯನ್ನು ಸಿದ್ಧಪಡಿಸಬೇಕು ಎಂದರು. ಮುಖ್ಯವಾಗಿ ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಮಾಕ್ ಡ್ರಿಲ್ ಮಾಡಲು ಸೂಚನೆ ನೀಡಿದರು.
ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು. ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ನಿಗಾ ವಹಿಸಬೇಕು. ವದಂತಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಫ್ಯಾಕ್ಟ್ ಚೆಕ್ ನಿರಂತರವಾಗಿ ಮಾಡಬೇಕು. ಸುಳ್ಳು ಸುದ್ದಿ ಬಗ್ಗೆ ಮೂಲದಲ್ಲೇ ಅಧಿಕೃತ ಸ್ಪಷ್ಟೀಕರಣ ನೀಡಬೇಕು.
ಗುಪ್ತಚರ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕು. ಸಾರ್ವಜನಿಕ ಸೇವೆ ಒದಗಿಸುವ ತಾಣಗಳಲ್ಲಿ ಹೆಚ್ಚಿನ ಸುರಕ್ಷತೆಯನ್ನು ಖಾತ್ರಿಪಡಿಸಬೇಕು. ಅಕ್ರಮ ದಾಸ್ತಾನು ಮತ್ತು ಕಾಳಸಂತೆಯ ಮೇಲೆ ನಿರಂತರ ನಿಗಾವಹಿಸಿ, ಅನಗತ್ಯವಾಗಿ ಸಾಮಾಗ್ರಿಗಳ ಬೆಲೆ ಹೆಚ್ಚು ಮಾಡುವ ಪ್ರಯತ್ನಗಳನ್ನು ತಡೆಯಬೇಕು.
ಅಗ್ನಿಶಾಮಕ ದಳದ ಕೇಂದ್ರಗಳು ದಿನದ 24 ಗಂಟೆ ಸನ್ನದ್ಧ ಸ್ಥಿತಿಯಲ್ಲಿರಬೇಕು. ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆದು, ಸಹಾಯವಾಣಿ ಆರಂಭಿಸಬೇಕು. ಪೌರ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಿ, ಅವರಿಗೆ ಸೂಕ್ತ ತರಬೇತಿ ಒದಗಿಸಬೇಕು. ಎಲ್ಲಾ ಜಿಲ್ಲೆಗಳಲ್ಲಿ ಪೌರ ರಕ್ಷಣಾ ವ್ಯವಸ್ಥೆಗೆ ಸ್ವಯಂಸೇವಕರನ್ನು ನೇಮಕ ಮಾಡುವ ಕಾರ್ಯ ಆರಂಭಿಸಬೇಕು. ಆನ್‌ಲೈನ್‌ನಲ್ಲಿ ಹೆಸರು ನೋಂದಾಯಿಸಲು ವ್ಯವಸ್ಥೆ ಕಲ್ಪಿಸಬೇಕು.
ಕರಾವಳಿಯಲ್ಲಿ ಭದ್ರತೆ ಹೆಚ್ಚಿಸಿ
ಕರಾವಳಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಬೇಕು. ಎಲ್ಲಾ ಪ್ರಮುಖ ಸ್ಥಳಗಳಲ್ಲಿ ನಿರಂತರ ಗಸ್ತು ವ್ಯವಸ್ಥೆ ಮಾಡಬೇಕು. ಪರಿಸ್ಥಿತಿಯನ್ನು ದುರುಪಯೋಗ ಪಡಿಸಿಕೊಂಡು ದೇಶದ, ರಾಜ್ಯದ ಸಹಭಾಳ್ವೆಗೆ ಧಕ್ಕೆ ತರುವ, ಕೋಮುಭಾವನೆ ಕೆರಳಿಸಿ, ಕೋಮು ವಿಭಜನೆ ತರಲು, ದೇಶದ ಭದ್ರತೆಗೆ ಅಪಾಯ ತರಲು ಷಡ್ಯಂತ್ರ ನಡೆಸುತ್ತಿರುವ ಎಲ್ಲರ ಪಟ್ಟಿ ಸಿದ್ದಪಡಿಸಿ ಕಾನೂನು ಕ್ರಮಕ್ಕೆ ಒಳಪಡಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೂ ಕ್ರಮ ವಹಿಸಬೇಕು. ಕೋಮು ಸಾಮರಸ್ಯ ಕದಡುವ ಪ್ರಯತ್ನಗಳ ಮೇಲೆ ನಿಗಾ ಇರಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಕೋಮು ಗೂಂಡಾಗಳ ಪಟ್ಟಿ ಅಪ್ಡೇಟ್ ಮಾಡಬೇಕು. ಅವರ ಮೇಲೆ ನಿಗಾ ಇಡಬೇಕು ಎಂದರು.