ಕೆಪಿಎಸ್‌ಸಿ ಮರುಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಆದೇಶ; ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳು ಅಮಾನತು
Karnataka Public Service Commission: ಇನ್ನೆರೆಡು ತಿಂಗಳೊಳಗೆ ಕೆಎಎಸ್ ಪ್ರಿಲಿಮ್ಸ್ ಮರು ಪರೀಕ್ಷೆ ನಡೆಸಲು ಸೂಚನೆ ನೀಡಿದ್ದೇನೆ ಎಂದು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ತಿಳಿಸಿದ್ದಾರೆ.
ಬೆಂಗಳೂರು: ಕೆಪಿಎಸ್‌ಸಿ 384 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗಾಗಿ ನಡೆದ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಲೋಪದೋಷ ಉಂಟಾಗಿದ್ದರ ಕುರಿತು ರಾಜ್ಯ ಸರ್ಕಾರದ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದು, ಮರು ಪರೀಕ್ಷೆ ನಡೆಸುವಂತೆ ಕರ್ನಾಟಕ ಲೋಕ ಸೇವಾ ಆಯೋಗಕ್ಕೆ (Karnataka Public Service Commission) ಆದೇಶಿಸಿದ್ದಾರೆ.
ಕೆಎಎಸ್ ಪೂರ್ವಭಾವಿ ಪರೀಕ್ಷೆ ಆಗಸ್ಟ್ 27ರಂದು ನಡೆದಿತ್ತು. ಆದರೆ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಕಂಡು ಗ್ರಾಮೀಣ ಭಾಗದ ಹಾಗೂ ಕನ್ನಡ ಮಾಧ್ಯಮದ ಪರೀಕ್ಷಾರ್ಥಿಗಳು ಕಂಡು ದಂಗಾಗಿದ್ದರು. ಪ್ರಶ್ನೆ ಪತ್ರಿಕೆಯಲ್ಲಿ ಪ್ರಶ್ನೆಗಳ ಭಾಷಾಂತರ ಸರಿಯಾಗಿಲ್ಲ. ಅನುವಾದ ಮಾಡುವಲ್ಲಿ ಭಾರಿ ಪ್ರಮಾದ ಎಸಗಿದ್ದಾರೆ. ಹೀಗಾದರೆ ನಾವು ಪಾಸ್ ಆಗುವುದಾದರೂ ಹೇಗೆ ಎಂದು ಸರ್ಕಾರ ವಿರುದ್ಧ ಕಿಡಿಕಾರಿದ್ದರು.
ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಅರ್ಹತೆ ಪಡೆದುಕೊಳ್ಳಲು ನಿಗದಿಪಡಿಸಲಾಗಿದ್ದ ಪತ್ರಿಕೆ-1 ಮತ್ತು ಪತ್ರಿಕೆ-2 ರಲ್ಲಿ ಕನ್ನಡ ಭಾಷೆಯ ಭಾಷಾಂತರದಲ್ಲಿ ಸಾಕಷ್ಟು ಲೋಪದೋಷಗಳಿದ್ದವು. ಕೆಪಿಎಸ್ಸಿಯೇ ಕನ್ನಡವನ್ನು ಕಗ್ಗೊಲೆ ಮಾಡಿದೆ ಎಂದು ಕನ್ನಡದ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿದ್ದಾರೆ. ಇಂಥ ಅಕ್ರಮಗಳನ್ನು ಎಸಗುವುದು ಪ್ಲೇಗ್‌ನಂತಹ ಸಾಂಕ್ರಾಮಿಕ ರೋಗಕ್ಕೆ ಸಮ ಎಂದೆಲ್ಲಾ ನೆಟ್ಟಿಗರು ಆಕ್ರೋಶ ಹೊರಹಾಕಿದ್ದರು. ಇದರ ಬೆನ್ನಲ್ಲೇ ಸಿದ್ದು ಪ್ರತಿಕ್ರಿಯಿಸಿದ್ದಾರೆ.
ಅದಲ್ಲದೆ, ಇದಕ್ಕೆ ಧ್ವನಿಗೂಡಿಸಿದ್ದ ಬಿಜೆಪಿ ನಾಯಕರು ಸಹ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಮತ್ತೊಮ್ಮೆ ಪರೀಕ್ಷೆ ನಡೆಸುವಂತೆ ಆಗ್ರಹಿಸಿದ್ದರು. ಇದೀಗ ಭಾರೀ ಟೀಕೆ ಎದುರಿಸಿದ ಬೆನ್ನಲ್ಲೇ ಸರ್ಕಾರ ಮರು ಪರೀಕ್ಷೆಗೆ ಆದೇಶ ಹೊರಡಿಸಿದೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ, ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ಒದಗಿಸಿಕೊಟ್ಟಿದ್ದಾರೆ.
ಸಿದ್ದರಾಮಯ್ಯ ಪೋಸ್ಟ್ನಲ್ಲಿ ಏನಿದೆ?
ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ ಎಂದು ಪೋಸ್ಟ್ನಲ್ಲಿ ಮಾಹಿತಿ ನೀಡಿದ್ದಾರೆ. ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ.
ಇದೇ ಪೋಸ್ಟ್ನಲ್ಲಿ ತಮ್ಮ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದಾರೆ. ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.