Breaking News: ಕರ್ನಾಟಕದಲ್ಲಿ ಕೋವಿಡ್‌ಗೆ ಬೆಂಗಳೂರಿನ ವೃದ್ದ ಬಲಿ, ತೀವ್ರ ಉಸಿರಾಟದ ಸಮಸ್ಯೆಯಿಂದ ಸಾವು
ಬೆಂಗಳೂರಿನಲ್ಲಿ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವೃದ್ದರೊಬ್ಬರು ಕೋವಿಡ್‌ಗೆ ಬಲಿಯಾಗಿದ್ದಾರೆ. ಏಳು ದಿನದ ಹಿಂದೆಯೇ ಮೃತಪಟ್ಟಿದ್ದರೂ ಈಗ ವರದಿ ಬಂದಿದೆ.

ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳು ನಿಧಾನವಾಗಿ ಏರಿಕೆಯಾಗುತ್ತಿರುವ ನಡುವೆ ಕೋವಿಡ್ ಪಾಸಿಟಿವ್ ಆಗಿದ್ದ ವೃದ್ದರೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಮೂಲಕ ಸದ್ಯದ ಸನ್ನಿವೇಶದಲ್ಲಿ ಕೋವಿಡ್ ಪ್ರಕರಣಕ್ಕೆ ಬಲಿಯಾದ ವ್ಯಕ್ತಿ ಬೆಂಗಳೂರಿನ ನಿವಾಸಿಯಾಗಿದ್ದಾರೆ. ಬೆಂಗಳೂರಿನ ವೈಟ್ ಫೀಲ್ಡ್ ಮೂಲದ 85 ವರ್ಷದ ವ್ಯಕ್ತಿ ಉಸಿರಾಟದ ಸಮಸ್ಯೆ, ಇತರೆ ಖಾಯಿಲೆಗಳಿಂದ ಬಳಲುತ್ತಿದ್ದರು. ಅಂಗಾಂಗ ವೈಫಲ್ಯ ಸಮಸ್ಯೆ ಇದ್ದ ವ್ಯಕ್ತಿಯನ್ನು ಖಾಸಗಿ ಆಸ್ಫತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕೋವಿಡ್‌ನಿಂದ ಈ ವ್ಯಕ್ತಿ ಮೃತಪಟ್ಟಿದಾರೆ ಎಂದು ಉನ್ನತ ಮೂಲಗಳು ಖಚಿತಪಡಿಸಿವೆ. ಕೊಮಾರ್ಬಿಡ್ ಲಕ್ಷಣ ಇದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆರೋಗ್ಯ ಇಲಾಖೆಗೂ ಈ ಕುರಿತು ಮಾಹಿತಿ ನೀಡಲಾಗಿತ್ತು. ಈಗ ಆ ವ್ಯಕ್ತಿ ಕೋವಿಡ್‌ನಿಂದ ಮೃತಪಟ್ಟಿರುವುದು ಖಚಿತವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗಿದ್ದು, ಈವರೆಗೂ 35 ಪ್ರಕರಣ ವರದಿಯಾಗಿದೆ. ಶನಿವಾರ ಒಂದೇ 5 ಪಾಸಿಟಿವ್ ಪ್ರಕರಣ ವರದಿಯಾಗಿವೆ. ಬೆಂಗಳೂರು, ಮೈಸೂರು, ಬೆಳಗಾವಿಯಲ್ಲಿ ಪ್ರಕರಣಗಳು ಇರುವ ಕುರಿತು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕರ್ನಾಟಕದಲ್ಲಿ ಕೋವಿಡ್‌ಗೆ ಸಂಬಂಧಿಸಿದಂತೆ ಪರೀಕ್ಷೆಯನ್ನು ಆರಂಭಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದ್ದು, ಮುಂದಿನ ದಿನಗಳಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಾಣಬಹುದು ಎನ್ನುವ ಅಭಿಪ್ರಾಯ ಕೇಳಿ ಬಂದಿದೆ.
ಕಳೆದ ಒಂದು ವಾರದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಕೋವಿಡ್ ಪಾಸಿಟಿವ್ ಸೋಂಕಿತರಲ್ಲಿ ಕೊಂಚ ಏರಿಕೆಯಾಗಿದೆ. ಮುಂಜಾಗ್ರತ ಕ್ರಮಗಳನ್ನ ಸರ್ಕಾರ ತೆಗೆದುಕೊಳ್ಳುತ್ತಿದೆ. ಉಸಿರಾಟದ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆಯಿಂದ ಆಸ್ಪತ್ರೆಗಳಲ್ಲಿ ಅಡ್ಮಿಟ್ ಆದವರನ್ನ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಗೆ ಒಳಪಡಿಸಲು ಸೂಚಿಸಲಾಗಿದೆ. ಅಗತ್ಯ ಟೆಸ್ಟಿಂಗ್ ಕಿಟ್ ಗಳನ್ನ ತೆಗೆದಿರಿಸಿಕೊಳ್ಳಲು ಅಧಿಕಾರಿಗಳಿಗೆ ನಾನು ಸೂಚಿನೆ ನೀಡಲಾಗಿದೆ. ಒಂದು ತಿಂಗಳಿಗೆ ಬೇಕಾಗುವ 5 ಸಾವಿರ RTPCR ಹಾಗೂ 5 ಸಾವಿರ VDRL ಟೆಸ್ಟಿಂಗ್ ಕಿಟ್ ಗಳ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಬಾಣಂತಿಯರು, ಗರ್ಭೀಣಿಯರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಉತ್ತಮ. ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಹೊಂದಿದ 35 ಜನರಲ್ಲಿ ಕೋವಿಡ್ ಗಂಭೀರವಾಗಿಲ್ಲ. ಸೌಮ್ಯ ಸ್ವಭಾವದ ಲಕ್ಷಣಗಳು ಕಂಡುಬಂದಿವೆ. ಹೀಗಾಗಿ ಸಾರ್ವಜನಿಕರು ಕೋವಿಡ್ ಬಂತು ಎಂದು ಆತಂಕಗೊಳ್ಳದೇ ತಮ್ಮ ಸಹಜ ಜೀವನ ನಡೆಸಬಹುದು. ಕೋವಿಡ್ ಪ್ರಕರಣಗಳಿಂದ ರಾಜ್ಯದ ಜನರು ಆತಂಕ ಪಡುವ ಅಗತ್ಯವಿಲ್ಲ ಎನ್ನುವುದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಸೂಚನೆ.