ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಹೋಟೆಲ್-ಅಪಾರ್ಟ್‌ಮೆಂಟ್ ಮೇಲೆ ಸಿಸಿಬಿ ದಾಳಿ; ವಿದೇಶ-ಹೊರ ರಾಜ್ಯಗಳ ಯುವತಿಯರ ರಕ್ಷಣೆ
ಬೆಂಗಳೂರಿನ ವಿವಿಧ ಭಾಗಗಳಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಹೋಟೆಲ್, ಮನೆ ಹಾಗೂ ಅಪಾರ್ಟ್‌ಮೆಂಟ್ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದರಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸಿ, ವಿದೇಶ ಹಾಗೂ ಹೊರ ರಾಜ್ಯಗಳ ಯುವತಿಯರನ್ನು ರಕ್ಷಣೆ ಮಾಡಲಾಗಿದೆ. (ವರದಿ: ಎಚ್. ಮಾರುತಿ, ಬೆಂಗಳೂರು)

ಬೆಂಗಳೂರು: ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್, ಮನೆ ಹಾಗೂ ಅಪಾರ್ಟ್‌ಮೆಂಟ್‌ಗಳ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ದಾಳಿ ನಡೆಸಿ, ಹೊರ ರಾಜ್ಯ ಹಾಗೂ ವಿದೇಶಗಳ ಯುವತಿಯರನ್ನು ರಕ್ಷಿಸಿದ್ದಾರೆ. ಈ ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಹೊರ ರಾಜ್ಯ ಹಾಗೂ ವಿದೇಶಗಳಿಂದ ಮಾನವ ಕಳ್ಳ ಸಾಗಣೆ ಮೂಲಕ ಮಹಿಳೆಯರನ್ನು ಕರೆತಂದು ಕೆಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರತಿಷ್ಠಿತ ಹೋಟೆಲ್‌ವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಓರ್ವ ವಿದೇಶಿ ಮಹಿಳೆ ಹಾಗೂ ಹೊರ ರಾಜ್ಯದ ನಾಲ್ವರು ಮಹಿಳೆಯರನ್ನು ಪೊಲೀಸರು ರಕ್ಷಿಸಿದ್ದಾರೆ.
ಈ ಯುವತಿಯರನ್ನು ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ ಬೆಂಗಳೂರಿಗೆ ಕರೆಸಿಕೊಳ್ಳುತ್ತಿದ್ದರು. ನಂತರ ಸಂಪಿಗೆಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಈ ಅಕ್ರಮ ಚಟುವಟಿಕೆಯ ಖಚಿತ ಮಾಹಿತಿ ಲಭ್ಯವಾದ ನಂತರ ದಾಳಿ ನಡೆಸಿದ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಸಿಬ್ಬಂದಿ ಆರೋಪಿಯನ್ನು ಬಂಧಿಸಿ ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ವಿದೇಶದ ಇಬ್ಬರು ಮಹಿಳೆಯರನ್ನು ಮಾನವ ಕಳ್ಳ ಸಾಗಣೆ ಮೂಲಕ ಕರೆತಂದು ರಾಮಮೂರ್ತಿನಗರ ಹಾಗೂ ಎಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ಕೂಡಿಹಾಕಿ ವೇಶ್ಯಾವಾಟಿಕೆಗೆ ಬಳಸಿಕೊಳ್ಳುತ್ತಿದ್ದರು. ಈ ಇಬ್ಬರು ಮಹಿಳೆಯರು ಮತ್ತು ನಾಲ್ಕು ವರ್ಷದ ಮಗುವನ್ನು ಪೊಲೀಸರು ರಕ್ಷಿಸಿದ್ದಾರೆ. ಈ ಮಹಿಳೆಯರನ್ನು ತುಮಕೂರಿನಲ್ಲಿರುವ ವಲಸಿಗರ ಬಂಧನ ಕೇಂದ್ರದಲ್ಲಿ ಇರಿಸಲಾಗಿತ್ತು. ನಂತರ ಅವರನ್ನು ಚೆನ್ನೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಲಸೆ ವಿಭಾಗದ ಅಧಿಕಾರಿಗಳ ವಶಕ್ಕೆ ನೀಡಲಾಗಿತ್ತು. ಅಲ್ಲಿನ ಅಧಿಕಾರಿಗಳು ಮಹಿಳೆಯರನ್ನು ಅವರ ದೇಶಕ್ಕೆ ವಾಪಸ್ ಕಳುಹಿಸಿದ್ದಾರೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ಹಣದ ಆಮಿಷವೊಡ್ಡಿ ವೇಶ್ಯಾವಾಟಿಕೆ ದಂಧೆ
ಮೂರನೇ ಪ್ರಕರಣದಲ್ಲಿ ಶ್ರೀನಗರದ ಮನೆಯೊಂದರಲ್ಲಿ ವಿದೇಶಿ ಮಹಿಳೆಯನ್ನು ಬಳಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವ ಖಚಿತ ಮಾಹಿತಿ ಸಿಸಿಬಿ ಪೊಲೀಸರಿಗೆ ಸಿಕ್ಕಿತ್ತು. ಮನೆಯ ಮೇಲೆ ದಾಳಿ ನಡೆಸಿ ಓರ್ವ ವಿದೇಶಿ ಮಹಿಳೆಯನ್ನು ರಕ್ಷಿಸಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದ್ದಾರೆ. ಈಕೆಗೆ ಹಣದ ಆಮಿಷವೊಡ್ಡಿ ಕರೆಸಿಕೊಂಡಿದ್ದರು ಎಂದು ತಿಳಿದು ಬಂದಿದೆ.
ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಐಡಿಐ ಲೇಔಟ್‌ನಲ್ಲಿ ನೆಲಸಿದ್ದ ನಾಲ್ವರು ಅಕ್ರಮ ವಲಸಿಗರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಮಧ್ಯವರ್ತಿಗಳ ಮೂಲಕ ಪಾನ್‌ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಪಡೆದುಕೊಂಡು ವಾಸವಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಮಹಿಳೆಯರನ್ನು ಚುಡಾಯಿಸುತ್ತಿದ್ದ ಆರೋಪಿ ಬಂಧನ
ರಸ್ತೆಯಲ್ಲಿ ನಡೆದುಕೊಂಡು ಹೋಗುವ ಮಹಿಳೆಯರನ್ನು ಚುಡಾಯಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಬನಶಂಕರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂನ ಇಸ್ಲಾಂವುದ್ದೀನ್ (31) ಬಂಧಿತ ಆರೋಪಿ. ಈತನ ವಿರುದ್ಧ 36 ವರ್ಷದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ದೂರು ಆಧರಿಸಿ, ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ದೂರುದಾರ ಮಹಿಳೆಯು ಜನವರಿ 23ರಂದು ಬೆಳಗ್ಗೆ 8.30ರ ವೇಳೆಗೆ ಬನಶಂಕರಿ ಎರಡನೇ ಹಂತದ ರಸ್ತೆಯೊಂದರಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಒಂಟಿಯಾಗಿ ತೆರಳುತ್ತಿದ್ದ ಮಹಿಳೆಯನ್ನು ಗಮನಿಸಿದ ಆರೋಪಿ, ಮಹಿಳೆಯ ಹಿಂಭಾಗಕ್ಕೆ ಹೊಡೆದು ಪರಾರಿಯಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ.
ದೂರುದಾರ ಮಹಿಳೆ ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆಯನ್ನು ನೆನಪಿನಲ್ಲಿಟ್ಟುಕೊಂಡಿದ್ದರು. ವಾಹನದ ಸಂಖ್ಯೆಯನ್ನು ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಇಸ್ಲಾಂವುದ್ದೀನ್ ಇದೇ ರೀತಿ ಹಲವು ರಸ್ತೆಗಳಲ್ಲಿ ಮಹಿಳೆಯರನ್ನು ಚುಡಾಯಿಸುತ್ತಿರುವುದು ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ವರದಿ: ಎಚ್. ಮಾರುತಿ, ಬೆಂಗಳೂರು
