ಹೈದರಾಬಾದ್​​ನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆ; ರೋಚಕ ಕಾರ್ಯಾಚರಣೆ ಹೀಗಿತ್ತು
ಕನ್ನಡ ಸುದ್ದಿ  /  ಕರ್ನಾಟಕ  /  ಹೈದರಾಬಾದ್​​ನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆ; ರೋಚಕ ಕಾರ್ಯಾಚರಣೆ ಹೀಗಿತ್ತು

ಹೈದರಾಬಾದ್​​ನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆ; ರೋಚಕ ಕಾರ್ಯಾಚರಣೆ ಹೀಗಿತ್ತು

Mysore Sandal Soap: ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಹೈದರಾಬಾದಿನಲ್ಲಿ ಭೇದಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. (ವರದಿ: ಎಚ್​ ಮಾರುತಿ)

ಹೈದರಾಬಾದ್​​ನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆ
ಹೈದರಾಬಾದ್​​ನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆ

ಕರ್ನಾಟಕ ಸರ್ಕಾರಿ ಸ್ವಾಮ್ಯದ ಪ್ರತಿಷ್ಠಿತ ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಹೈದರಾಬಾದಿನಲ್ಲಿ ಭೇದಿಸಲಾಗಿದೆ. ಈ ಕಾರ್ಯಾಚರಣೆ ವೇಳೆ ನಕಲಿ ಸೋಪು, ಅದರ ಪ್ಯಾಕಿಂಗ್​​ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಗಳು ಸೇರಿದಂತೆ ಸುಮಾರು 2 ಕೋಟಿ ರೂಪಾಯಿ ಬೆಲೆಯ ವಸ್ತುಗಳು ಪತ್ತೆಯಾಗಿದೆ.

ನಕಲಿ ಮೈಸೂರು ಸ್ಯಾಂಡಲ್ ಸೋಪು ಉತ್ಪಾದನೆಯಲ್ಲಿ ತೊಡಗಿದ್ದ ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬವವರನ್ನು ಬಂಧಿಸಲಾಗಿದೆ. ಅಲ್ಲಿನ ಮಾಲಕಪೇಟೆ ಪೊಲೀಸರಿಗೆ ದೂರು ನೀಡಲಾಗಿದ್ದು, ತನಿಖೆ ಮುಂದುವರೆದಿದೆ.

ಕೆಲವು ದಿನಗಳ ಹಿಂದೆ ನಕಲಿ ಮೈಸೂರ್ ಸ್ಯಾಂಡಲ್ ಸಾಬೂನು ಹೈದರಾಬಾದ್ ಮಾರುಕಟ್ಟೆಗೆ ಪೂರೈಕೆಯಾಗುತ್ತಿರುವ ಬಗ್ಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್​​ಡಿಎಲ್) ಅಧ್ಯಕ್ಷರೂ ಆದ ಸಚಿವ ಎಂ.ಬಿ ಪಾಟೀಲ ಅವರಿಗೆ‌ ಅನಾಮಧೇಯ ಕರೆಯೊಂದು ಬಂದಿದ್ದು, ನಕಲಿ ಸೋಪು ಕುರಿತು ಮಾಹಿತಿ ನೀಡಿದ್ದರು. ನಂತರ ಸಚಿವರು ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್ ಅವರಿಗೆ ಕ್ರಮ ಜರುಗಿಸಲು ಸೂಚಿಸಿದ್ದರು. ಅದರಂತೆ, ಸಿಕಂದರಾಬಾದ್​​ನಲ್ಲಿರುವ ಸಂಸ್ಥೆಯ ಅಧಿಕೃತ ಮಾರಾಟ ಕಚೇರಿಯ ಸಿಬ್ಬಂದಿ ತಮಗೆ ಸಿಕ್ಕ ಸುಳಿವಿನ ಜಾಡು ಹಿಡಿದು ತನಿಖೆಗೆ ಮುಂದಾಗಿದ್ದರು.

ತನಿಖೆಯ ವೇಳೆ ಹೈದರಾಬಾದಿನ ಕೆಲವು ಪ್ರದೇಶಗಳಲ್ಲಿ ನಕಲಿ ಸಾಬೂನು ಮಾರಾಟವಾಗುತ್ತಿರುವುದು ಕಂಡುಬಂದಿತ್ತು. ಆದರೆ, ಅದನ್ನು ಯಾರು ಪೂರೈಸುತ್ತಿದ್ದಾರೆ ಎಂಬ ಬಗ್ಗೆ ಸರಿಯಾದ ಮಾಹಿತಿ ಸಿಕ್ಕಿರಲಿಲ್ಲ. ಆಗ ಕೆಎಸ್​​ಡಿಎಲ್ ಸಿಬ್ಬಂದಿ ಸ್ವತಃ ಒಂದು ಲಕ್ಷ ರೂಪಾಯಿ ಬೆಲೆಯ ಉತ್ಪನ್ನ ಖರೀದಿಸಿ, ಅದರ ಮೂಲ ಪತ್ತೆಗೆ ಕಾರ್ಯಪ್ರವೃತ್ತರಾದರು. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಬೇಡಿಕೆ ಇದೆ ಎಂಬ ಕಾರಣ ಕೊಟ್ಟು 25 ಲಕ್ಷ ರೂಪಾಯಿ ಬೆಲೆಯ ಸೋಪು ಖರೀದಿಗೆ ಆರ್ಡರ್ ಕೊಟ್ಟಿದ್ದರು. ಅದನ್ನು ಸ್ವತಃ ತಾವೇ ವಾಹನದಲ್ಲಿ ಸಾಗಿಸುವ ನೆಪದಲ್ಲಿ ಉತ್ಪಾದನೆ ಮಾಡುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ್ದರು. ಹೀಗೆ ಕಾರ್ಯಾಚರಣೆ ನಡೆಸಿದಾಗ ನಕಲಿ ಉತ್ಪಾದನಾ ಘಟಕ ಪತ್ತೆಯಾಯಿತು ಎಂದು ಕೆಎಸ್​​ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ವಿವರಿಸಿದ್ದಾರೆ.

ತಲಾ 150 ಗ್ರಾಂ ತೂಕದ 3 ಸಾಬೂನುಗಳಿರುವ 20 ಕಾರ್ಟನ್ ಬಾಕ್ಸ್ ಗಳು (ಪ್ರತಿಯೊಂದು ಬಾಕ್ಸ್ ನಲ್ಲಿ 90ರಂತೆ ಒಟ್ಟು 1800 ಪೀಸ್​​​ಗಳು), ತಲಾ 75 ಗ್ರಾಂ ನ 47 ಕಾರ್ಟನ್ ಬಾಕ್ಸ್ ಗಳು (9400 ಪೀಸ್ ಗಳು), 150 ಗ್ರಾಂ ಸಾಬೂನು ಪ್ಯಾಕ್ ಮಾಡುವ 400 ಖಾಲಿ ಕಾರ್ಟನ್ ಬಾಕ್ಸ್ ಗಳು ಮತ್ತು 75 ಗ್ರಾಂ ಸಾಬೂನು ಪ್ಯಾಕ್ ಮಾಡುವ 400 ಕಾರ್ಟನ್ ಬಾಕ್ಸ್ ಗಳು ನಕಲಿ ಘಟಕದಲ್ಲಿ ಪತ್ತೆಯಾಗಿವೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

ಕೆಎಸ್​​ಡಿಎಲ್ ಉತ್ಪನ್ನಗಳ ಮಾರುಕಟ್ಟೆಯನ್ನು ದೇಶ ಹಾಗೂ ವಿದೇಶಗಳಿಗೆ ವಿಸ್ತರಿಸಲು ಸ್ವತಃ ಆಸಕ್ತಿ ವಹಿಸಿ ಕ್ರಮ ತೆಗೆದುಕೊಂಡಿರುವ ಸಚಿವ ಪಾಟೀಲ ಅವರು, ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದ್ದಾರೆ.

ವರದಿ: ಎಚ್​ ಮಾರುತಿ

Whats_app_banner