ಕರಾವಳಿಯಲ್ಲಿ ನಿಲ್ಲದ ಮಳೆ; ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಂಗಳವಾರವೂ ಶಾಲಾ-ಕಾಲೇಜುಗಳಿಗೆ ರಜೆ
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಹೀಗಾಗಿ ಮಂಗಳವಾರವೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮಂಗಳೂರು: ಕರಾವಳಿಯಾದ್ಯಂತ ಸೋಮವಾರವೂ ಮಳೆ ಮುಂದುವರೆದಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದು, ಸೋಮವಾರವೂ ಜನಜೀವನ ಅಸ್ತವ್ಯಸ್ತವಾಗಿತ್ತು. ಜುಲೈ 16ರ ಮಂಗಳವಾರ ಕೂಡಾ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಮೂರು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಪದವಿ ಪೂರ್ವ ಕಾಲೇಜು (ಪಿಯುಸಿ) ವರೆಗಿನ ಎಲ್ಲಾ ತರಗತಿಗಳಿಗೆ ನಾಳೆಯೂ ರಜೆ ಇರಲಿದೆ. ಪದವಿ ವಿದ್ಯಾರ್ಥಿಗಳಿಗೆ ತರಗತಿ ಇದ್ದರೂ, ಹಾಜರಾತಿ ಕಡ್ಡಾಯವಲ್ಲ ಎಂದು ಡಿಸಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸೋಮವಾರವೂ ಮಳೆ ಮುಂದುವರೆದಿದೆ. ಹೀಗಾಗಿ ನಾಳೆ ಜುಲೈ 16ರ ಮಂಗಳವಾರ ಕೂಡಾ ಪಿಯುಸಿವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.
ಪದವಿಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯ ಮಾಡುವಂತಿಲ್ಲ. ದುರ್ಬಲ/ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂಥ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿ ಕುರಿತು ಗಮನಹರಿಸಬೇಕು ಎಂದು ಅವರು ಸೂಚನೆಯಲ್ಲಿ ತಿಳಿಸಿದ್ದಾರೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು ಮತ್ತು ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವ ಕಾರಣ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ ಸೂಚನೆ ಪಾಲಿಸಬೇಕು ಎಂದು ಸೂಚಿಸಿದ್ದಾರೆ.
ಕರ್ನಾಟಕದ ಇತರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ