ದೀಪಾವಳಿ ಹಬ್ಬಕ್ಕೆ ಇಡೀ ದಿನ ಪಟಾಕಿ ಸಿಡಿಸೋ ಹಾಗಿಲ್ಲ; ಮಾರಾಟ, ಬಳಕೆ ಕುರಿತು ಸುಪ್ರೀಂ ಕೋರ್ಟ್ ಆದೇಶ ಹೀಗಿದೆ
ದೀಪಾವಳಿಗೆ ಪಟಾಕಿಗಳನ್ನು ಸಿಡಿಸುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದನ್ವಯ, ದೀಪಾವಳಿಯ ಮೂರು ದಿನ ರಾತ್ರಿ ಎರಡು ಗಂಟೆಗಳ ಕಾಲ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಲಾಗಿದೆ.

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಗೆ ದೀಪಗಳ ಜೊತೆಗೆ ಪಟಾಕಿ ಸಿಡಿಸುವುದು ಸಾಮಾನ್ಯ. ಹಾಗಂತಾ ದಿನವಿಡೀ ಪಟಾಕಿ ಸಿಡಿಸಲು ಅವಕಾಶವಿಲ್ಲ. ಹಬ್ಬದ ಸಂಭ್ರಮದ ನಡುವೆ ಪರಿಸರ ಮಾಲಿನ್ಯ ಹೆಚ್ಚಾಗುವುದನ್ನು ತಡೆಯಲು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಸರ್ವೋಚ್ಛ ನ್ಯಾಯಾಲಯವು ಪಟಾಕಿ ಬಳಕೆ ಕುರಿತಂತೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದು ಮತ್ತು ಅವುಗಳನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಪಟಾಕಿಗಳನ್ನು ಸಿಡಿಸುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಹಲವಾರು ನಿರ್ದೇಶನಗಳನ್ನು ನೀಡಿರುತ್ತದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದನ್ವಯ ಸರ್ವೋಚ್ಚ ನ್ಯಾಯಾಲಯದ ಸೂಚನೆಯಂತೆ ದೀಪಾವಳಿಯ ಸಮಯದಲ್ಲಿ ರಾತ್ರಿ 8.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಲಾಗಿದೆ.
ದೀಪಾವಳಿ ಹಬ್ಬದ ಮೂರು ದಿನಗಳಲ್ಲಿ ಈ ನಿರ್ದೇಶನ ಅನ್ವಯಿಸಲಿದೆ. ಅಕ್ಟೋಬರ್ 31ರಿಂದ ನವೆಂಬರ್ 02ರವರೆಗೆ ಮೂರು ದಿನಗಳ ಕಾಲ ಪಟಾಕಿ ಸ್ಫೋಟಿಸಲು ಅವಕಾಶ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಉಳಿದ ಸಮಯದಲ್ಲಿ ಪಟಾಕಿಗಳ ಸ್ಪೋಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಹಸಿರು ಪಟಾಕಿ
ಇದಲ್ಲದೆ ಸರ್ವೋಚ್ಚ ನ್ಯಾಯಾಲಯವು ಪಟಾಕಿ ಸಿಡಿಸುವ ವಿಚಾರವಾಗಿ ನೀಡಿದ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಹೊರತುಪಡಿಸಿ, ಉಳಿದ ಯಾವುದೇ ರೀತಿಯ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಧಿಸಲಾಗಿದೆ. ಅಲ್ಲದೆ, 'ಹಸಿರು ಪಟಾಕಿ' ಕುರಿತು ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿಯ ವೆಬ್‌ಸೈಟ್‌ನಲ್ಲಿ ಮಾಹಿತಿ ಲಭ್ಯವಿರುತ್ತದೆ.
2024ರ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ ಸಾರ್ವಜನಿಕರು ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಹಸಿರು ಪಟಾಕಿಗಳನ್ನಲ್ಲದೆ, ಬೇರೆ ನಿಷೇಧಿತ ಪಟಾಕಿಗಳ ಮಾರಾಟ, ದಾಸ್ತಾನು ಮಾಡುವವರ ವಿರುದ್ಧ ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಂಡು ಸಂಬಂಧಿತ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಲು ಕ್ರಮ ವಹಿಸಬೇಕೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಎಲ್ಲಾ ವಲಯ ಆಯುಕ್ತರಿಗೆ ಸೂಚಿಸಿದ್ದಾರೆ.