Saalumarada Thimmakka: ಸಾಲುಮರದ ತಿಮ್ಮಕ್ಕ ಆರೋಗ್ಯ ಗಂಭೀರ; ಐಸಿಯುನಲ್ಲಿ ಚಿಕಿತ್ಸೆ
ಕನ್ನಡ ಸುದ್ದಿ  /  ಕರ್ನಾಟಕ  /  Saalumarada Thimmakka: ಸಾಲುಮರದ ತಿಮ್ಮಕ್ಕ ಆರೋಗ್ಯ ಗಂಭೀರ; ಐಸಿಯುನಲ್ಲಿ ಚಿಕಿತ್ಸೆ

Saalumarada Thimmakka: ಸಾಲುಮರದ ತಿಮ್ಮಕ್ಕ ಆರೋಗ್ಯ ಗಂಭೀರ; ಐಸಿಯುನಲ್ಲಿ ಚಿಕಿತ್ಸೆ

Saalumarada Thimmakka Health Update: ಖ್ಯಾತ ಪರಿಸರವಾದಿ ಸಾಲುಮರದ ತಿಮ್ಮಕ್ಕ ಅವರು ಉಸಿರಾಟದ ತೊಂದರೆಯಿಂದ ಮಂಗಳವಾರ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಆರೋಗ್ಯ ಗಂಭೀರ; ಐಸಿಯುನಲ್ಲಿ ಚಿಕಿತ್ಸೆ
ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಆರೋಗ್ಯ ಗಂಭೀರ; ಐಸಿಯುನಲ್ಲಿ ಚಿಕಿತ್ಸೆ (Just Kannada Twitter)

ಬೆಂಗಳೂರು: ಲಕ್ಷಾಂತರ ಮರಗಳನ್ನು ನೆಟ್ಟು ವೃಕ್ಷ ಮಾತೆ ಎಂದೇ ಕರೆಸಿಕೊಳ್ಳುವ 113 ವರ್ಷದ ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಉಸಿರಾದ ಸಮಸ್ಯೆಯಿಂದ ಬಳಲುತ್ತಿರುವ ತಿಮ್ಮಕ್ಕ ಅವರನ್ನು ಬೆಂಗಳೂರಿನ ಜಯನಗರದ ಅಪೋಲೊ ಆಸ್ಪ್ರತೆಗೆ ದಾಖಲಿಸಲಾಗಿದ್ದು, ಐಸಿಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಇತ್ತೀಚೆಗೆ ಅಕ್ಟೋಬರ್ 5ರಂದು ಸಹ ಇದೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಅದಕ್ಕೂ ಮುನ್ನ ಹಾಸನ ಜಿಲ್ಲೆಯ ಬಳ್ಳೂರಿನಲ್ಲಿ ವಾಸವಿದ್ದ ಆಕೆ ಬೇಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸೆಪ್ಟೆಂಬರ್ 27 ರಂದು ಬೆಂಗಳೂರಿಗೆ ಮರಳಿದ್ದರು. ಬೆಟ್ಟದ ಬೇಲೂರು ಪ್ರದೇಶದ ತಂಪಾದ ವಾತಾವರಣದಿಂದ ಆಕೆ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಡಾ.ರವೀಂದ್ರ ಮೆಹ್ತಾ ಅವರ ತಂಡ ಚಿಕಿತ್ಸೆ ಒದಗಿಸಿದ ಬಳಿಕ ಗುಣಮುಖರಾಗಿದ್ದರು.

ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ ಸಾಲುಮರದ ತಿಮ್ಮಕ್ಕ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದರು. ಅಮೆರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್‌ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.

ತಿಮ್ಮಕ್ಕ ಜೀವನ…

ತಿಮ್ಮಕ್ಕ ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಜನಿಸಿದರು. ತಂದೆ ಚಿಕ್ಕರಂಗಯ್ಯ, ತಾಯಿ ವಿಜಯಮ್ಮ. ಇವರಿಗೆ ಯಾವುದೇ ಔಪಚಾರಿಕ ಶಿಕ್ಷಣ ಲಭ್ಯವಾಗದೆ ಹತ್ತಿರದ ಒಂದು ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡಿದರು. ಇವರು ಚಿಕ್ಕಯ್ಯ ಎಂಬ ಒಬ್ಬ ದನಕಾಯುವವರನ್ನು ಮದುವೆಯಾಗಿದ್ದರು. ಅವರು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದವರು. ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ತಿಮ್ಮಕ್ಕ ಅವರು ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರು ಎಂದು ಹೇಳಲಾಗಿದೆ.

ಕುದೂರಿನಿಂದ ಹುಲಿಕಲ್ ತನಕವಿರುವ ರಾಜ್ಯ ಹೆದ್ದಾರಿ 94ರಲ್ಲಿ ಬೆಳಸಿದ ಆಲದ ಮರಗಳು ತಿಮ್ಮಕ್ಕ ಅವರೇ ಬೆಳೆಸಿದ್ದು. ತಿಮ್ಮಕ್ಕ ಅವರ ಹಳ್ಳಿಯ ಬಳಿ ಆಲದ ಮರಗಳು ಹೇರಳವಾಗಿವೆ. ತಿಮ್ಮಕ್ಕ ಮೊದಲ ವರ್ಷದಲ್ಲಿ ಹತ್ತು ಸಸಿಗಳನ್ನು ನೆರೆಯ ಕುದೂರು ಹಳ್ಳಿಯ ಬಳಿ 4 ಕಿಮೀ ಉದ್ದ ನೆಟ್ಟಿದ್ದರು. ಹೀಗೆಯೇ ಎರಡನೇ ವರ್ಷ ಹದಿನೈದು ಮತ್ತು ಮೂರನೇ ವರ್ಷ 20 ಸಸಿಗಳನ್ನು ನೆಟ್ಟಿದ್ದರು. ಹೀಗೆ ಲಕ್ಷಾಂತರ ಗಿಡಗಳನ್ನು ನೆಟ್ಟಿದ್ದಾರೆ. ಇವರು ಈ ಸಸಿಗಳನ್ನು ನೆಡಲು ತಮ್ಮ ಅತ್ಯಲ್ಪ ಆದಾಯವನ್ನೇ ಬಳಸಿದರು. ಗಂಡ-ಹೆಂಡಿರು ಸಸಿಗಳಿಗೆ ನೀರುಣಿಸಲು ಬಿಂದಿಗೆ ಕೊಳಗಗಳಲ್ಲಿ ನೀರನ್ನು ನಾಲ್ಕು ಕಿಮೀ ದೂರ ಸಾಗಿಸುತ್ತಿದ್ದರು. ಹಾಗೂ ಸಸಿಗಳನ್ನು ಮೇವಿನ ಜಾನುವಾರುಗಳ ಕಾಟದಿಂದ ತಪ್ಪಿಸಲು ಅವುಗಳ ಸುತ್ತ ಮುಳ್ಳು ಪೊದೆಗಳನ್ನು ಹೊದಿಸಿ ಕಾಪಾಡಿದರು. ಸಸಿಗಳು ಬೆಳೆಯಲು ನೀರಿನ ಅವಶ್ಯಕತೆಯಿರುವುದರಿಂದ ಅವುಗಳನ್ನು ಹೆಚ್ಚಾಗಿ ಮುಂಗಾರು ಮಳೆಯ ಕಾಲದಲ್ಲಿ ನೆಡಲಾಯಿತು.

ತಿಮ್ಮಕ್ಕ ಅವರಿಗೆ ಸಿಕ್ಕ ಪ್ರಶಸ್ತಿ, ಗೌರವಗಳು

ರಾಷ್ಟ್ರೀಯ ಪೌರ ಪ್ರಶಸ್ತಿ - 1995

ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ - 1997

ವೀರಚಕ್ರ ಪ್ರಶಸ್ತಿ - 1997

ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ - ಇವರಿಂದ ಮಾನ್ಯತೆಯ ಪ್ರಮಾಣ ಪತ್ರ

ಭಾರತೀಯ ವೃಕ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ, ಬೆಂಗಳೂರು - ಇವರಿಂದ ಶ್ಲಾಘನೆಯ ಪ್ರಮಾಣ ಪತ್ರ

ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ - 2000

ಗಾಡ್‌ಫ್ರಿ ಫಿಲಿಪ್ಸ್ ಧೀರತೆ ಪ್ರಶಸ್ತಿ - 2006

ಪಂಪಾಪತಿ ಪರಿಸರ ಪ್ರಶಸ್ತಿ

ಬಾಬಾಸಾಹೇಬ್ ಅಂಬೇಡ್ಕರ್ ಪ್ರಶಸ್ತಿ

ವನಮಾತೆ ಪ್ರಶಸ್ತಿ

ಮಾಗಡಿ ವ್ಯಕ್ತಿ ಪ್ರಶಸ್ತಿ

ಶ್ರೀಮಾತಾ ಪ್ರಶಸ್ತಿ

ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ

ಕರ್ನಾಟಕ ಪರಿಸರ ಪ್ರಶಸ್ತಿ

ಮಹಿಳಾರತ್ನ ಪ್ರಶಸ್ತಿ

ನ್ಯಾಷನಲ್ ಸಿಟಿಜನ್ ಪ್ರಶಸ್ತಿ

ರಾಜ್ಯೋತ್ಸವ ಪ್ರಶಸ್ತಿ

ವಿಶ್ವಾತ್ಮ ಪುರಸ್ಕಾರ 2015

ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ

2010ರ ಸಾಲಿನ ಪ್ರತಿಷ್ಠಿತ 'ನಾಡೋಜ' ಪ್ರಶಸ್ತಿ.

2019ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿ

2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

Whats_app_banner