Explainer: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು, ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕದಲ್ಲಿ ಹೊಸದೇನಿದೆ
ಕರ್ನಾಟಕದಲ್ಲಿ ಹಿಂದೂ ದೇವಾಲಯಗಳ ಆದಾಯ ನಿರ್ವಹಣೆ ಸೇರಿದಂತೆ ನಾನಾ ಕಾರಣಗಳಿಂದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು, ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕದಲ್ಲಿ ತಿದ್ದುಪಡಿಯನ್ನು ಮಾಡಲಾಗಿದೆ.
ಬೆಂಗಳೂರು: ಕರ್ನಾಟಕದಲ್ಲಿ 12 ವರ್ಷಗಳ ನಂತರ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು, ಧರ್ಮಾದಾಯ ದತ್ತಿಗಳ ವಿಧೇಯಕದಲ್ಲಿ ತಿದ್ದುಪಡಿ ಮಾಡಲಾಗಿದೆ. ವಿಧಾನಸಭೆಯಲ್ಲಿ ಅಂಗೀಕರಿಸಲಾದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕದ ವಿಚಾರದಲ್ಲಿ ವಿವಾದ ಏರ್ಪಟ್ಟಿದೆ.
ಅನುದಾನ ಬಳಕೆ, ದೇಗುಲಗಳ ಆದಾಯದ ಬಳಕೆ ವಿಚಾರದಲ್ಲಿ ಸಾಕಷ್ಟು ಚರ್ಚೆಗಳು ರಾಜಕೀಯವಾಗಿ ನಡೆದಿವೆ. ಹಿಂದೂ ದೇಗುಲಗಳ ಆದಾಯವನ್ನು ಇತರೆ ಧರ್ಮಗಳಿಗೆ ಬಳಸುವ ಹುನ್ನಾರ ಅಡಗಿದೆ ಎನ್ನುವುದು ಪ್ರತಿಪಕ್ಷಗಳ ಟೀಕೆಯಾದರೆ, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹಾಗೂ ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರೂ ಸಮರ್ಥಿಸಿಕೊಂಡಿದ್ದಾರೆ.
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕವನ್ನು ಮೊದಲು ಕಾಯಿದೆ ರೂಪ ನೀಡಿದ್ದು 1997ರಲ್ಲಿ. ಆನಂತರ 2003ರಲ್ಲಿ ತಿದ್ದುಪಡಿಯೊಂದಿಗೆ ಬಳಸಲಾಯಿತು. ಇದಾದ ನಂತರ 2012ರಲ್ಲಿ ಮತ್ತೊಮ್ಮೆ ತಿದ್ದುಪಡಿ ಮಾಡಲಾಗಿತ್ತು. ಇದಾದ ಬಳಿಕ ಕಾಯಿದೆಗೆ ನಾಲ್ಕನೇ ಬಾರಿಗೆ ತಿದ್ದುಪಡಿಯಾಗಿದೆ.
ತಿದ್ದುಪಡಿಯಲ್ಲಿ ಏನಿದೆ
1997ರಲ್ಲಿ ಕಾಯಿದೆಯನ್ನು ಜಾರಿಗೊಳಿಸಿದಾಗಿನಿಂದಲೂ ಸಾಮಾನ್ಯ ಸಂಗ್ರಹಣಾ ನಿಧಿಯನ್ನು ಸೃಜಿಸಬೇಕು ಎನ್ನುವ ನಿಬಂಧನೆ ಕಾಯಿದೆಯಲ್ಲಿಯೇ ಅಡಕವಾಗಿದೆ. ಆದರೆ ಅದು ಜಾರಿಯಾಗರಲಿಲ್ಲ. ಆನಂತರ 2003ರಲ್ಲಿ ಕಾಯಿದೆಯು ಜಾರಿಗೆ ಬಂದಾಗಿನಿಂದ ಧಾರ್ಮಿಕ ಕಾರ್ಯಗಳಿಗೆ ಮಾತ್ರವೇ ಬಳಕೆಯಾಗುತ್ತಿದೆ. ಅಲ್ಲಿಂದ ಈವರೆಗೂ ಎ ದರ್ಜೆ ದೇವಸ್ಥಾನಗಳ ಆದಾಯದಲ್ಲಿ ಸಾಮಾನ್ಯ ಸಂಗ್ರಹಣಾ ನಿಧಿಯಾಗಿ ಶೇ. 5ರಷ್ಟನ್ನು ಬಳಕೆ ಮಾಡಲಾಗುತ್ತಿತ್ತು. ಹೊಸ ತಿದ್ದುಪಡಿ ಪ್ರಕಾರ ಈ ಪ್ರಮಾಣ ಶೇ.10 ಕ್ಕೆ ಏರಿಕೆಯಾಗಲಿದೆ. ಉದಾಹರಣೆಗೆ ಒಂದು ಕೋಟಿ ರೂ. ವಾರ್ಷಿಕ ಆದಾಯ ಬಂದರೆ ಅದರಲ್ಲಿ 10 ಲಕ್ಷ ರೂ. ಸಾಮಾನ್ಯ ಸಂಗ್ರಹಣಾ ನಿಧಿಗೆ ಹೋಗಲಿದೆ. ನೂತನ ತಿದ್ದುಪಡಿಯನ್ನು ಸಾಮಾನ್ಯ ಸಂಗ್ರಹಣಾ ನಿಧಿಯನ್ನು ಹೆಚ್ಚಿಸುವ ಏಕೈಕ ಉದ್ದೇಶದಿಂದ ಮಾಡಲಾಗಿದೆ ಎಂದು ಅಧಿಕೃತ ಕರ್ನಾಟಕ ರಾಜ್ಯ ಪತ್ರದಲ್ಲಿ ತಿಳಿಸಲಾಗಿದೆ.
ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ ಮಾತ್ರವೇ ಬಳಸಲಾಗುತ್ತದೆ. ಬೇರೆ ಯಾವುದೇ ಧರ್ಮದ ಜನರ ಅನುಕೂಲಕ್ಕಾಗಿ ಈ ಹಣವನ್ನು ಬಳಸಲಾಗುವುದಿಲ್ಲ. ದೇವಸ್ಥಾನಗಳ ಹಣವನ್ನು ಕೇವಲ ಹಿಂದೂ ಸಮುದಾಯದ ಏಳಿಗೆ ಮತ್ತು ಕಲ್ಯಾಣಕ್ಕೆ ಮಾತ್ರವೇ ಬಳಸಬೇಕೆನ್ನುವ ಬಾಧ್ಯತೆಯನ್ನು ಈ ನಿಧಿಯ ನಿಬಂಧನೆಗಳಲ್ಲಿ ಒತ್ತಿ ಹೇಳಲಾಗಿದೆ ಎನ್ನುವುದು ಧಾರ್ಮಿಕ ದತ್ತಿ ಮತ್ತು ಮುಜರಾಯಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ನೀಡುವ ವಿವರಣೆ.
ಸಮಿತಿಗಳ ರಚನೆ
ಇನ್ನು ದೇಗುಲಗಳ ವ್ಯವಸ್ಥಾಪಕ ಸಮಿತಿಗಳಲ್ಲಿ ಹಿಂದೂಗಳನ್ನೇ ಸದಸ್ಯರಾಗಿ ನೇಮಿಸುವ ಹಿಂದಿನಂತೆಯೇ ಇರಲಿದೆ. ಆದರೆ ಸಂಯೋಜಿತ ದೇಗುಲಗಳಾದರೆ ಅಲ್ಲಿನ ಇತರೆ ಧರ್ಮದವರಿಗೂ ಮಾನ್ಯತೆ ಸಿಗಲಿದೆ. ಉದಾಹರಣೆಗೆ ಚಿಕ್ಕಮಗಳೂರು ಜಿಲ್ಲೆಯ ದತ್ತಾತ್ರೇಯ ಬಾಬಾ ಬುಡನ್‌ಗಿರಿ ಹಾಗೂ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಹಣಗೆರೆ ಕಟ್ಟೆಯಂತಹ ಸಂಯೋಜಿತ ದೇಗುಲಗಳಲ್ಲಿ ಹಿಂದೂ ಹಾಗೂ ಮುಸ್ಲೀಂ ಪ್ರತಿನಿಧಿಗಳು ವ್ಯವಸ್ಥಾಪನಾ ಸಮಿತಿಯಲ್ಲಿ ಇರಲಿದ್ಧಾರೆ.
ಇನ್ನು ರಾಜ್ಯ ಹಾಗೂ ಜಿಲ್ಲಾ ಮಟ್ಟದ ಸಮಿತಿಗಳು ಮೊದಲಿನಂತೆಯೇ ಇರಲಿದ್ದು. ಇದಕ್ಕೆ ರಾಜ್ಯ ಮಟ್ಟದಲ್ಲಿ ಮುಜರಾಯಿ ಸಚಿವರು, ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ಇರಲಿದೆ. ವಾಸ್ತು ಶಿಲ್ಪ ಸಮಿತಿಯೂ ದೇವಸ್ಥಾನ ಗಳಲ್ಲಿ ರಚನೆಯಾಗಿ, ದೇಗುಲಗಳ ವಾಸ್ತು ಶಿಲ್ಪದ ಪುನರುತ್ಥಾನದ ಕುರಿತು ಸಲಹೆ, ಮಾರ್ಗದರ್ಶನ ನೀಡಲಿದೆ.
ಅಶೋಕ್ ಏಟು ಸಿಎಂ ಎದಿರೇಟು
ಹಿಂದೂ ದೇವಾಲಯ, ಧಾರ್ಮಿಕ ಸಂಸ್ಥೆಗಳಿಗೆ ಕಾಂಗ್ರೆಸ್ ಸರ್ಕಾರ ಬಹಳ ಅನ್ಯಾಯ ಮಾಡಿದೆ. ಹಾಗೆಯೇ ಪ್ರತಿ ಇಲಾಖೆಗಳಲ್ಲಿ ಅಭಿವೃದ್ಧಿಗಾಗಿ ಹಣ ಖರ್ಚಾಗದೆ ಬಾಕಿ ಉಳಿದಿದೆ. ಬಿಜೆಪಿ ಸರ್ಕಾರವಿದ್ದಾಗ ದೇವಾಲಯ ಮತ್ತು ಧಾರ್ಮಿಕ ಸಂಸ್ಥೆಗಳಿಗೆ 274 ಕೋಟಿ ರೂ. ಖರ್ಚು ಮಾಡಲಾಗಿತ್ತು. ಜೊತೆಗೆ ಸಿಎಂ ವಿಶೇಷ ಅನುದಾನದಡಿ, ಮಠ ಹಾಗೂ ದೇವಾಲಯಗಳಿಗೆ 2022-23 ರಲ್ಲಿ 154.80 ಕೋಟಿ ರೂ. ಖರ್ಚು ಮಾಡಲಾಗಿತ್ತು. ಈಗ ಕಾಂಗ್ರೆಸ್ ಸರ್ಕಾರ ಕೇವಲ 17 ಕೋಟಿ ರೂ. ಮೀಸಲಿಟ್ಟಿದ್ದು, ಶೇ.90 ಅನುದಾನ ಕಡಿತವಾಗಿದೆ ಎನ್ನುವುದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಆಶೋಕ್ ನೀಡಿದ ಮಾತಿನೇಟು.
ವಿಧಾನಸಭೆಯಲ್ಲಿ ಅಂಗೀಕರಿಸಲಾದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕವನ್ನು ರಾಜಕೀಯ ಕಾರಣಗಳಿಗಾಗಿ ತಪ್ಪಾಗಿ ಜನತೆಯ ಮುಂದಿರಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. . ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ ನಾಯಕರ ಆರೋಪ ಸಂಪೂರ್ಣ ಕಪೋಲಕಲ್ಪಿತ. ಹಿಂದೂಗಳನ್ನು ಸರ್ಕಾರದ ವಿರುದ್ದ ಎತ್ತಿಕಟ್ಟುವ ದುರುದ್ದೇಶದಿಂದ ಬಿಜೆಪಿ ನಾಯಕರು ಇಂತಹ ಕ್ಷುಲಕ ಪ್ರಯತ್ನ ಮಾಡುತ್ತಿದ್ದಾರೆ ಎನ್ನುವುದು ಸಿಎಂ ಸಿದ್ದರಾಮಯ್ಯ ಅವರು ನೀಡಿದ ಎದಿರೇಟು.
ತಿದ್ದುಪಡಿಗೂ ಮುನ್ನ
1. ನಿವ್ವಳ ಆದಾಯ ಹತ್ತು ಲಕ್ಷ ರೂ. ಮೀರುವ ದೇವಸ್ಥಾನಗಳ ಒಟ್ಟು ವಾರ್ಷಿಕ ಆದಾಯದಿಂದ ಶೇ.10.
2. ನಿವ್ವಳ ವಾರ್ಷಿಕ ಆದಾಯ ಐದು ಲಕ್ಷ ರೂ. ಗಿಂತ ಹೆಚ್ಚಿದ್ದು ಹತ್ತು ಲಕ್ಷ ರೂ. ಮೀರದ ದೇವಸ್ಥಾನಗಳ ವಾರ್ಷಿಕ ಆದಾಯದಿಂದ ಶೇ.5.
3. ರಾಜ್ಯ ಸರ್ಕಾರದಿಂದ ದೊರೆಯುತ್ತಿದ್ದ ವಾರ್ಷಿಕ ಅನುದಾನ.
ತಿದ್ದುಪಡಿಯ ನಂತರ
1. ಒಂದು ಕೋಟಿ ರೂ. ನಿವ್ವಳ ಆದಾಯ ಮೀರುವ ದೇವಸ್ಥಾನಗಳ ಒಟ್ಟು ವಾರ್ಷಿಕ ಆದಾಯದಿಂದ ಶೇ. 10.
2. ಹತ್ತು ಲಕ್ಷ ರೂ ನಿವ್ವಳ ಆದಾಯಕ್ಕಿಂತ ಹೆಚ್ಚಿದ್ದು ರೂ. 1 ಕೋಟಿ ಮೀರದ ಸಂಸ್ಥೆಗಳಿಂದ ಶೇ.5
3. ರಾಜ್ಯ ಸರ್ಕಾರದಿಂದ ದೊರೆಯುವ ಅನುದಾನ.