ಕನ್ನಡ ಸುದ್ದಿ  /  Karnataka  /  First Cabinet Meeting Led By The New Chief Minister Siddaramaiah Began At Vidhana Soudha In Bangalore Rmy

Siddaramaiah Cabinet Meeting: ವಿಧಾನಸೌಧದಲ್ಲಿ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಮೊದಲ ಸಚಿವ ಸಂಪುಟ ಸಭೆ ಆರಂಭ

ವಿಧಾನಸೌಧದಲ್ಲಿ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮೊದಲ ಸಚಿವ ಸಂಪುಟ ಆರಂಭವಾಗಿದೆ.

ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ (PTI)
ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ (PTI)

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Chief Minister Siddaramaiah), ಡಿಸಿಎಂ ಆಗಿ ಡಿಕೆ ಶಿವಕುಮಾರ್ (DCM DK Shivakumar) ಇಂದು ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ವಿಧಾನಸೌಧಕ್ಕೆ ಆಗಮಿಸುತ್ತಿದ್ದಂತೆ ಮೊದಲ ಸಚಿವ ಸಂಪುಟ ಸಭೆ (Cabinet Meeting) ನಡೆಸುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲಿ ನೂತನ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಡಾ ಜಿ ಪರಮೇಶ್ವರ್‌, ಕೆಜೆ ಜಾರ್ಜ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ಜಮೀರ್ ಅಹಮ್ಮದ್, ಎಂಬಿ ಪಾಟೀಲ್, ಕೆಎಚ್‌ ಮುನಿಯಪ್ಪ ಹಾಗೂ ಪ್ರಿಯಾಂಕ್‌ ಖರ್ಗೆ ಭಾಗವಹಿಸಿದ್ದಾರೆ.

ಮೊದಲ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್‌ ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ಸಲುವಾಗಿ ಸಚಿವ ಸಂಪುಟ ಸಭೆ ಕರೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಅಧಿಕಾರಕ್ಕೆ ಬಂದ ಒಂದು ಗಂಟೆಯೊಳಗೆ ನಾವು ಘೋಷಿಸಿದ ನಾಲ್ಕು ಗ್ಯಾರಂಟಿಗಳ ಜಾರಿ ಗ್ಯಾರಂಟಿ ಎಂದು ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ ಗಾಂಧಿ ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರದ ವೇಳೆ ಹೇಳಿದ್ದರು.

ಕಾಂಗ್ರೆಸ್​ನ 5 ಗ್ಯಾರಂಟಿಗಳು ಹೀಗಿವೆ

ಗೃಹಜ್ಯೋತಿ - 200 ಯೂನಿಟ್​ ವಿದ್ಯುತ್​ ಉಚಿತ

ಗೃಹಲಕ್ಷ್ಮಿ - ಪ್ರತಿ ಮನೆ ಯಜಮಾನಿಗೆ ಮಾಸಿಕ 2000 ರೂ.

ಅನ್ನಭಾಗ್ಯ- ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ

ಯುವ ನಿಧಿ - ಪದವೀಧರರಿಗೆ 3000 ರೂ ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂ ನಿರುದ್ಯೋಗ ಭತ್ಯೆ

ಉಚಿತ ಬಸ್ ಪ್ರಯಾಣ - ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ

ಇಂದು ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು. ಇವರ ಜೊತೆಗೆ 8 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆಸಿ ವೇಣುಗೋಪಾಲ್, ಬಿಹಾರ ಸಿಎಂ ನಿತೀಶ್ ಕುಮಾರ್, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ, ಮೆಹಬೂಬ ಮುಫ್ತಿ, ಸಿಪಿಐ, ಸಿಪಿಎಂ ನಾಯಕರು, ನಟರಾದ ಕಮಲ್ ಹಾಸನ್, ಶಿವರಾಜ್ ಕುಮಾರ್, ದುನಿಯಾ ವಿಜಿ ಸೇರಿದಂತೆ ಹಲವು ಗಣ್ಯರು ಸಮಾರಂಭಕ್ಕೆ ಸಾಕ್ಷಿಯಾದರು.

IPL_Entry_Point