ಕನ್ನಡ ಸುದ್ದಿ  /  Karnataka  /  Govt Committed To Provide Permanent Solution For Rehabilitation Of Sharavati Victims Says Cm Bommai

Rehabilitation for Sharavati victims: ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆ ಶಾಶ್ವತ ಪರಿಹಾರಕ್ಕೆ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ

ಬೆಂಗಳೂರಿನ ನಂತರ ರಾಜ್ಯದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಹಾಗೂ ಅಭಿವೃದ್ಧಿಯಾಗುತ್ತಿರುವ ಭವಿಷ್ಯದ ನಗರ ಶಿವಮೊಗ್ಗ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಸರ್ಕಾರಿ ಯೋಜನೆಯ ಫಲಾನುಭವಿಗಳಿಗೆ ಸಿಎಂ ಬೊಮ್ಮಾಯಿ ಪತ್ರ ವಿತರಿಸಿದರು.
ಸರ್ಕಾರಿ ಯೋಜನೆಯ ಫಲಾನುಭವಿಗಳಿಗೆ ಸಿಎಂ ಬೊಮ್ಮಾಯಿ ಪತ್ರ ವಿತರಿಸಿದರು.

ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಪುನರ್ವಸತಿಗೆ ಶಾಶ್ವತವಾಗಿ ಬಗೆಹರಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ನಗರದ ಎನ್‍ಇಎಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಸಿಎಂ, ಪರಿಹಾರ ಸಂಬಂಧ ಈಗಾಗಲೇ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಲಾಗಿದ್ದು, ಕೇಂದ್ರಕ್ಕೆ ವರದಿ ಸಲ್ಲಿಸಲಾಗುವುದು ಎಂದರು.

ಕೇಂದ್ರ ಸರ್ಕಾರದ ಅನುಮತಿ ಪಡೆದ ಬಳಿಕ ನಿರ್ವಸತಿಗರಿಗೆ ಶಾಶ್ವತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಯೋಜನೆಗೆ ಕೇಂದ್ರ ಸರ್ಕಾರ ರೂ.500 ಕೋಟಿ ಮಂಜೂರು ಮಾಡಿದೆ. ಅದರ ಶಂಕುಸ್ಥಾಪನೆ, ಮಿಲೆಟ್ ಉತ್ಸವವನ್ನು ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದಾರೆ. ಇದರಿಂದ ಜಿಲ್ಲೆಯ ಶೈಕ್ಷಣಿಕ, ಔದ್ಯೋಗಿಕ, ಪ್ರವಾಸೋದ್ಯ, ಕ್ಷೇತ್ರದಲ್ಲಿ ಅಮೂಲಾಗ್ರ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ತಿಳಿಯಿಸಿದ್ದಾರೆ.

ಬೆಂಗಳೂರಿನ ನಂತರ ರಾಜ್ಯದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಹಾಗೂ ಅಭಿವೃದ್ಧಿಯಾಗುತ್ತಿರುವ ಭವಿಷ್ಯದ ನಗರ ಶಿವಮೊಗ್ಗ ಎಂದಿದ್ದಾರೆ.

ವಿಮಾನ ನಿಲ್ದಾಣದಿಂದ ಜಿಲ್ಲೆಯ ಅಭಿವೃದ್ಧಿ

2006ರ ಹಿಂದಿನ ಶಿವಮೊಗ್ಗ ಹಾಗೂ ಇಂದಿನ ಶಿವಮೊಗ್ಗದಲ್ಲಿ ಅಜಗಜಾಂತರ ವ್ಯತ್ಯಾಸವಿದ್ದು, ಜಿಲ್ಲೆಯಲ್ಲಿ ಸರ್ವತೋಮುಖ ಅಭಿವೃದ್ದಿ ಕಾಣುತ್ತಿದ್ದೇವೆ. ಇಂದು ಸುಮಾರು 1,000 ಕೋಟಿಗೂ ಅಧಿಕ ವೆಚ್ಚದ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ. ವಸತಿ ಯೋಜನೆಗಳಡಿ ಮನೆಗಳನ್ನು ನೀಡುವುದು, ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ, ಶಿಕ್ಷಣ, ರಸ್ತೆ, ನೀರು, ನಗರಾಭಿವೃದ್ದಿ, ತಂತ್ರಜ್ಞಾನ ಹೀಗೆ ಹತ್ತು ಹಲವು ಪುಣ್ಯದ ಕೆಲಸಗಳು ಜನೋಪಯೋಗಿ ನಾಯಕರಿಂದ ಇಂದು ಸಾಧ್ಯವಾಗಿದೆ. ಕೇವಲ 18 ತಿಂಗಳ ಅವಧಿಯಲ್ಲಿ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದ್ದು, ವಿಮಾನ ನಿಲ್ದಾಣದಿಂದಾಗಿ ಈ ಭಾಗದಲ್ಲಿ ಶೈಕ್ಷಣಿಕ, ಔದ್ಯೋಗಿಕ, ಆರ್ಥಿಕ, ಪ್ರವಾಸೋದ್ಯಮ ಸೇರಿದಂತೆ ಎಲ್ಲ ವಲಯದಲ್ಲಿ ಜಿಲ್ಲೆಯು ಅಭಿವೃದ್ದಿ ಹೊಂದಲಿದೆ ಎಂದರು.

ವಿಮಾನ ನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪ ಹೆಸರು

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಈಗಾಗಲೇ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನಿಡಲು ಸಚಿವ ಸಂಪುಟ ನಿರ್ಧರಿಸಿದ್ದು, ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗುವುದು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 27 ರಂದು ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ವಿಐಎಸ್‍ಎಲ್ ಸಮಸ್ಯೆಗೆ ಪರಿಹಾರ

ವಿಐಎಸ್‍ಎಲ್ ಸಮಸ್ಯೆ ಬಗೆಹರಿಸುವ ಕುರಿತು ಮುಂದಿನ ವಾರ ಬೆಂಗಳೂರಿನಲ್ಲಿ ಎಲ್ಲಾ ಪ್ರತಿನಿಧಿಗಳ ಸಭೆ ನಡೆಸಿ, ಈ ಕಾರ್ಖಾನೆಯನ್ನು ಮುಂದುವರೆಸುವ ಕುರಿತು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಉತ್ತಮ ಕಂಪನಿ ಇದನ್ನು ಕೈಗೊಂಡು ನೌಕರರಿಗೆ ಭದ್ರತೆ ಒದಗಿಸಲು ಪ್ರಯತ್ನ ಮಾಡಲಾಗುವುದು ಎಂದರು.

ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

ರೂ.21.60 ಕೋಟಿ ವೆಚ್ಚದ ಅಂಗನವಾಡಿ, ಶಾಲೆ ಅಭಿವೃದ್ದಿ, ರಸ್ತೆ, ಬಾಕ್ಸ್ ಚರಂಡಿ, ಉದ್ಯಾನವನ ಅಭಿವೃದ್ದಿ, ರೂ.6.45 ಕೋಟಿ ವೆಚ್ಚದಲ್ಲಿ ವಿವಿಧ ವಾರ್ಡ್‍ಗಳಲ್ಲಿ ಅಭಿವೃದ್ದಿ, ರೂ.15.15 ಕೋಟಿ ವೆಚ್ಚದಲ್ಲಿ ತುಂಗಾ ನದಿಗೆ ಸೇರುತ್ತಿರುವ ಮಲಿನ ನೀರನ್ನು ಪ್ರತಿಬಂಧಿಸುವುದು ಮತ್ತು ತಿರುಗಿಸುವ ಕಾಮಗಾರಿ. ರೂ.10.62 ಕೋಟಿ ವೆಚ್ಚದಲ್ಲಿ ವಿವಿಧ ವಾರ್ಡ್‍ಗಳಲ್ಲಿ ರಸ್ತೆ, ಬಾಕ್ಸ್ ಚರಂಡಿ, ಸಮುದಾಯ ಭವನ ಹಾಗೂ ಇತರೆ ಅಭಿವೃದ್ದಿ ಕಾಮಗಾರಿಗಳಿಗೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಿದರು.

ಕೆ.ಎಸ್.ಈಶ್ವರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ, ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ, ಗೃಹ ಸಚಿವ ಆರಗ ಜ್ಞಾನೇಂದ್ರ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಮಾಜಿ ಸಿಎಂ ಯಡಿಯೂರಪ್ಪ, ಶಾಸಕರಾದ ಕೆ.ಬಿ.ಅಶೋಕ ನಾಯ್ಕ್, ಆಯನೂರು ಮಂಜುನಾಥ, ಭಾರತಿ ಶೆಟ್ಟಿ, ಡಿ.ಎಸ್.ಅರುಣ್, ಮಹಾನಗರಪಾಲಿಕೆ ಮಹಾಪೌರರಾದ ಶಿವಕುಮಾರ್, ಜಿಲ್ಲಾಧಿಕಾರಿ ಎಸ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

IPL_Entry_Point