Gruha Lakshmi Scheme: ಗೃಹಲಕ್ಷ್ಮಿ ಯೋಜನೆಗೆ ಈ ತಿಂಗಳಲ್ಲಿಯೇ ಚಾಲನೆ, ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗಿ
ಕನ್ನಡ ಸುದ್ದಿ  /  ಕರ್ನಾಟಕ  /  Gruha Lakshmi Scheme: ಗೃಹಲಕ್ಷ್ಮಿ ಯೋಜನೆಗೆ ಈ ತಿಂಗಳಲ್ಲಿಯೇ ಚಾಲನೆ, ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗಿ

Gruha Lakshmi Scheme: ಗೃಹಲಕ್ಷ್ಮಿ ಯೋಜನೆಗೆ ಈ ತಿಂಗಳಲ್ಲಿಯೇ ಚಾಲನೆ, ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗಿ

Gruha Lakshmi scheme: ಕರ್ನಾಟಕದಲ್ಲಿ ಈ ತಿಂಗಳಾಂತ್ಯದೊಳಗೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ದೊರಕಲಿದೆ. ಈ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಭಾಗಿಯಾಗಲಿದ್ದಾರೆ. ಸದ್ಯದಲ್ಲಿಯೇ ಮೈಸೂರಿನಲ್ಲಿ ಅನ್ನಭಾಗ್ಯ ಯೋಜನೆಯೂ ಆರಂಭವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ
ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ

ಬೆಂಗಳೂರು: ಈ ತಿಂಗಳಾಂತ್ಯದಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭಾಗಿಯಾಗಲಿದ್ದಾರೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹಲಕ್ಷ್ಮಿ ಯೋಜನೆಯು ಆಗಸದ್ಟ್‌ 29 ಅಥವಾ ಆಗಸ್ಟ್‌ 30ರಂದು ಉದ್ಘಾಟನೆಗೊಳ್ಳುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್‌ ಪಕ್ಷವು ಮಾಹಿತಿ ನೀಡಿದೆ.

"ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಈ ಯೋಜನೆಗೆ ಈಗಾಗಲೇ 1.2 ಕೋಟಿ ಜನರು ನೋಂದಣಿಯಾಗಿದ್ದಾರೆ. ಈ ತಿಂಗಳ ಅಂತ್ಯದಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಕಾರ್ಯಕ್ರಮದಲ್ಲಿ ನಮ್ಮ ನಾಯಕ ರಾಹುಲ್‌ ಗಾಂಧಿ ಪಾಲ್ಗೊಳ್ಳಲಿದ್ದಾರೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಶೀಘ್ರದಲ್ಲಿ ಅನ್ನಭಾಗ್ಯ ಯೋಜನೆಯೂ ಜಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಸರಕಾರವು ಚುನಾವಣಾ ಪೂರ್ವ ಘೋಷಿಸಿದ ಗ್ಯಾರಂಟಿ ಯೋಜನೆಗಳಲ್ಲಿ ಗೃಹ ಲಕ್ಷ್ಮಿ ಯೋಜನೆಯೂ ಒಂದಾಗಿದೆ. ಈ ಯೋಜನೆಯ ಉದ್ಘಾಟನಾ ಕಾರ್ಯಕ್ರಮದ ಉಸ್ತುವಾರಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ನೀಡಲಾಗಿದೆ. ಬೆಳಗಾವಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಏಳು ಜಿಲ್ಲೆಗಳಿಂದ ಸುಮಾರು 1 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ರಾಹುಲ್‌ ಗಾಂಧಿ ಮಾತ್ರವಲ್ಲದೆ ಸೋನಿಯಾ ಗಾಂಧಿ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆಯಿದೆ. ಇತ್ತೀಚೆಗೆ ಬೆಳಗಾವಿ ಜಿಲ್ಲಾ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.

"ಗೃಹಲಕ್ಷ್ಮಿ ಯೋಜನೆ ಉದ್ಘಾಟನಾ ಕಾರ್ಯಕ್ರಮವು ಸರಕಾರವು ಆಯೋಜಿಸುವ ಅತಿದೊಡ್ಡ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಈ ಯೋಜನೆಗೆ ಮಹಿಳೆಯರಿಂದ ಅಪಾರ ಸ್ಪಂದನೆ ದೊರಕಿದೆ. ಮನೆಯೊಡತಿಗೆ 2 ಸಾವಿರ ರೂಪಾಯಿ ನಗದು ನೀಡುವ ಈ ಕಾರ್ಯಕ್ರಮವು ಬಡ ಮಹಿಳೆಯರ ಜೀವನ ಸುಧಾರಣೆಗೆ ಸಹಾಯ ಮಾಡಲಿದೆ" ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಗೃಹಲಕ್ಷ್ಮಿ ಯೋಜನೆಗೆ ಶುಲ್ಕ

" ಗೃಹ ಲಕ್ಷ್ಮಿ ಯೋಜನೆಯ ನೋಂದಣಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ ಹಾಗೂ ಅರ್ಜಿ ಸಲ್ಲಿಸಲು ಡೆಡ್‌ಲೈನ್‌ ಕೂಡ ನಿಗದಿ ಪಡಿಸಿಲ್ಲʼ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಲಕ್ಷ್ಮೀ ಹೆಬ್ಬಾಳ್ಕರ್ ಜುಲೈ 15 ರಂದು ತಿಳಿಸಿದ್ದರು.

ಮನೆಯೊಡತಿಗೆ 2 ಸಾವಿರ ರೂಪಾಯಿ

"ಪಡಿತರ ಚೀಟಿಯಲ್ಲಿ ನಮೂದಿಸಿರುವ ಮನೆಯ ಹಿರಿಯ ಮಹಿಳೆಯು ಈ ಯೋಜನೆಯ ಫಲಾನುಭವಿಯಾಗಲಿದ್ದಾರೆ. ಎಪಿಎಲ್‌, ಬಿಪಿಎಲ್‌ ಹಾಗೂ ಅಂತ್ಯೋದಯ ಕಾರ್ಡ್‌ನವರು ಇದಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಆದರೆ ಫಲಾನುಭವಿ ಅಥವಾ ಅವಳ ಪತಿ ತೆರಿಗೆ ಅಥವಾ ಜಿಎಸ್‌ಟಿ ಪಾವತಿದಾರರು ಆಗಿರಬಾರದು. ಸುಮಾರು 1.28 ಕೋಟಿ ಕುಟುಂಬಗಳು ಈ ಯೋಜನೆ ಪ್ರಯೋಜನ ಪಡೆಯಲಿದ್ದಾರೆʼ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ

ಗೃಹಲಕ್ಷ್ಮಿ ಯೋಜನೆಗೆ ನೀವೇ ಸ್ವತಃ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ. ಸರ್ಕಾರ ನಿಗದಿ ಪಡಿಸಿದ ಗ್ರಾಮ ಒನ್, ಕರ್ನಾಟಕ ಒನ್ ಬೆಂಗಳೂರು ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ನಿಮ್ಮ ಹತ್ತಿರದಲ್ಲಿರುವ ಈ ಯಾವುದಾದರೂ ಒಂದು ಕೇಂದ್ರಕ್ಕೆ ತೆರಳಿ ನೀವು ಅರ್ಜಿ ಸಲ್ಲಿಸಬಹುದು. ಈ ಕುರಿತು ಹೆಚ್ಚಿನ ವಿವರ ಇಲ್ಲಿದೆ.

Whats_app_banner