ಕನ್ನಡ ಸುದ್ದಿ  /  Karnataka  /  Hd Kumaraswamy Tweet On Electricity Price Rise

HD Kumaraswamy: ವಿದ್ಯುತ್‌ ದರ ಏರಿಕೆ; 'ನವರಾತ್ರಿಗೆ ಕರೆಂಟ್ ಶಾಕ್' ಎಂದು ಸರ್ಕಾರದ ಕಿವಿ ಹಿಂಡಿದ ಹೆಚ್‌ಡಿಕೆ

ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಬಿಜೆಪಿ ಸರ್ಕಾರ ವಿದ್ಯುತ್‌ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್‌ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ ಎಂದು ಹೆಚ್‌ಡಿಕೆ ಹೇಳಿದ್ದಾರೆ.

ಹೆಚ್‌ ಡಿ ಕುಮಾರಸ್ವಾಮಿ
ಹೆಚ್‌ ಡಿ ಕುಮಾರಸ್ವಾಮಿ (Twitter)

ಬೆಂಗಳೂರು: ವಿದ್ಯುತ್‌ ದರ ಏರಿಕೆ ಪ್ರಸ್ತಾಪ ಹೊರಬಿದ್ದ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರ್ಕಾರ, ಕರೆಂಟ್‌ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ ಎಂದು ಬೇಸರ ವ್ಯಕ್ತಪಡಸಿದ್ದಾರೆ.

ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಬಿಜೆಪಿ ಸರ್ಕಾರ ವಿದ್ಯುತ್‌ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್‌ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ ಎಂದು ಹೆಚ್‌ಡಿಕೆ ಹೇಳಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ ಸರಣಿ ಟ್ವೀಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಮಂಡಲ ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್‌ ದರ ಏರಿಕೆ ಆಗಿದೆ. ಏನೀ ಹುನ್ನಾರ? ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರ್ಕಾರ, ಕರೆಂಟ್‌ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ.‌ ಪ್ರತಿ ಯೂನಿಟ್‌ಗೆ 24ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ ಮತ್ತು ಖಂಡನೀಯ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿವೆ. ವಿದ್ಯುತ್‌ ಉತ್ಪಾದನೆ ಉತ್ತಮವಾಗಿದೆ. ಆದರೂ ಖರೀದಿ ವೆಚ್ಚದಲ್ಲಿ 1,244 ಕೋಟಿ ರೂ. ಹೆಚ್ಚಳ ಆಗಿದೆ ಎನ್ನುವ ಲೆಕ್ಕವನ್ನು ನಂಬುವ ರೀತಿಯಲ್ಲಿ ಇಲ್ಲ. ಇಂಧನ ವಲಯದ ಕೆಲ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಎಸ್ಕಾಂಗಳ ಭುಜದ ಮೇಲೆ ಗುಂಡಿಟ್ಟು, ಜನರಿಗೆ ಹೊಡೆಯುವ ಕೆಲಸ ಆಗುತ್ತಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಜನರ ಪರ ಇಲ್ಲ ಎನ್ನುವುದು ಸತ್ಯ. ಜಾಗತಿಕ ಪೇಟೆಯಲ್ಲಿ ಕಚ್ಛಾತೈಲದ ಬೆಲೆ ನಿರಂತರ ಇಳಿದರೂ ದೇಶದಲ್ಲಿ ತೈಲಬೆಲೆ ಇಳಿಸದ ಕೇಂದ್ರ ಬಿಜೆಪಿ ಸರ್ಕಾರದ ಹಾದಿಯಲ್ಲೇ ರಾಜ್ಯ ಬಿಜೆಪಿ ಸರ್ಕಾರವೂ ಸಾಗಿದೆ. ವಿದ್ಯುತ್‌ ದರದ ನಿರಂತರ ಏರಿಕೆ ಬಗ್ಗೆ ಗಂಭೀರ ಅನುಮಾನಗಳಿವೆ ಎಂದು ನವರಾತ್ರಿಗೆ ಕರೆಂಟ್ ಶಾಕ್ ಹ್ಯಾಶ್‌ಟ್ಯಾಗ್‌ ಮೂಲಕ ಟ್ವೀಟ್‌ ಮಾಡಿದ್ದಾರೆ.

ವಿದ್ಯುತ್‌ ಸೋರಿಕೆಯನ್ನು ನಿಯಂತ್ರಿಸಲಾಗದ, ಕಳವು ತಡೆಯಲಾಗದ ಮತ್ತು ನವೀನ ತಂತ್ರಜ್ಞಾನ ಅಳವಡಿಸಿಕೊಳ್ಳದ ಕರ್ನಾಟಕ ಬಿಜೆಪಿ ಸರ್ಕಾರ ಅದಕ್ಷತೆಯ ಆಡಂಬೋಲ. ʼಬಡವರನ್ನು ಸುಲಿದು ಬಿಸ್ನೆಸ್‌ ಕ್ಲಾಸಿನ ಜನರ ಜೇಬು ತುಂಬುʼ ಎನ್ನುವುದು ಬಿಜೆಪಿ ತತ್ತ್ವ. ಅದನ್ನೇ ಕರ್ನಾಟಕದಲ್ಲೂ ಎಗ್ಗಿಲ್ಲದೆ ಮಾಡುತ್ತಿದೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲ್ಲಿದ್ದಲು ಖರೀದಿ ದರ ಹೆಚ್ಚಳವಾದ ಹಿನ್ನೆಲೆಯಲ್ಲಿ ಇಂಧನ ಹೊಂದಾಣಿಕೆ ಶುಲ್ಕವನ್ನು ಅಕ್ಟೋಬರ್‌ 1ರಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಅವಧಿಗೆ ಪರಿಷ್ಕರಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಆದೇಶ ಹೊರಡಿಸಿದೆ. ಅ.1 ರಿಂದ ಅನ್ವಯವಾಗುವಂತೆ ಪ್ರತಿ ಯೂನಿಟ್‌ಗೆ 24 ಪೈಸೆಯಿಂದ 43 ಪೈಸೆವರೆಗೆ ವಿದ್ಯುತ್‌ ದರ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಆದೇಶ ಹೊರಡಿಸಿದೆ.

IPL_Entry_Point