ಬಿಎಸ್​ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್; ವಿಶೇಷ ಸರ್ಕಾರಿ ಅಭಿಯೋಜಕರಾಗಿ ರವಿವರ್ಮ ಕುಮಾರ್‌ ನೇಮಕ-high court adjourned the pocso case against bs yediyurappa ravi varma kumar appointed as special public prosecutor mrt ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  ಬಿಎಸ್​ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್; ವಿಶೇಷ ಸರ್ಕಾರಿ ಅಭಿಯೋಜಕರಾಗಿ ರವಿವರ್ಮ ಕುಮಾರ್‌ ನೇಮಕ

ಬಿಎಸ್​ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್; ವಿಶೇಷ ಸರ್ಕಾರಿ ಅಭಿಯೋಜಕರಾಗಿ ರವಿವರ್ಮ ಕುಮಾರ್‌ ನೇಮಕ

BS Yediyurappa: ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಅಲ್ಲದೆ, ವಿಶೇಷ ಸರ್ಕಾರಿ ಅಭಿಯೋಜಕರಾಗಿ ಪ್ರೊ. ರವಿವರ್ಮ ಕುಮಾರ್‌ ಅವರನ್ನು ನೇಮಿಸಲಾಗಿದೆ. (ವರದಿ - ಎಚ್. ಮಾರುತಿ)

ಬಿಎಸ್​ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್
ಬಿಎಸ್​ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್‌ 19ಕ್ಕೆ ಹೈಕೋರ್ಟ್ ಮುಂದೂಡಿದೆ. ಇದೇ ಸಂದರ್ಭದಲ್ಲಿ ಯಡಿಯೂರಪ್ಪ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನನ್ನು ನ್ಯಾಯಾಲಯ ವಿಸ್ತರಿಸಿತು.

ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಹಾಗೂ ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಬಿಜೆಪಿ ಮಾರ್ಗದರ್ಶಕ ಮಂಡಳಿ ಸದಸ್ಯ ಬಿಎಸ್‌ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ಸೆ.9 ಸೋಮವಾರ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು.

ಪ್ರೊ. ರವಿವರ್ಮ ಕುಮಾರ್‌ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ಸೆಪ್ಟೆಂಬರ್‌ 3ರಂದು ನೇಮಕ ಮಾಡಲಾಗಿದೆ. ಹತ್ತು ದಿನಗಳ ಕಾಲಾವಕಾಶ ನೀಡಿದರೆ ಹೊಸ ಸರ್ಕಾರಿ ಅಭಿಯೋಜಕರಿಗೆ ಪ್ರಕರಣದ ವಿವರಗಳನ್ನು ಒದಗಿಸಲು ಸಹಾಯಕವಾಗುತ್ತದೆ ಎಂದು ವಕೀಲ ಅಶೋಕ್‌ ನಾಯ್ಕ್‌ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡರು. ಇದನ್ನು ಒಪ್ಪಿಕೊಂಡ ನ್ಯಾಯಾಲಯ ಅರ್ಜಿಗಳ ವಿಚಾರಣೆಯನ್ನು ಸೆಪ್ಟೆಂಬರ್‌ 19ಕ್ಕೆ ಮುಂದೂಡಿತು.

ಏನಿದು ಪ್ರಕರಣ?

ತಮ್ಮ 17 ವರ್ಷದ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ಯಡಿಯೂರಪ್ಪ ವಿರುದ್ಧ ಮಾರ್ಚ್ 14ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಮ್ಮ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು ನ್ಯಾಯಕ್ಕಾಗಿ ಸಹಾಯ ಮಾಡುವಂತೆ ಕೋರಿ ಯಡಿಯೂರಪ್ಪ ಅವರ ಬಳಿ ಹೋಗಿದ್ದಾಗಿ ಆ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. 

ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿಯ ಮನೆಗೆ ತೆರಳಿ ಸಹಾಯ ಕೇಳಿದಾಗ ಅವರು ನನ್ನ ಪುತ್ರಿಯನ್ನು ಪ್ರತ್ಯೇಕ ಕೊಠಡಿಯೊಳಕ್ಕೆ ಕರೆದೊಯ್ದು ನನ್ನ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ವಿಷಯವನ್ನು ಯಾರಿಗೂ ಹೇಳದಂತೆ ಒಂದಿಷ್ಟು ಹಣ ನೀಡಿದ್ದರು ಎಂದು ಸಂತ್ರಸ್ತ ಬಾಲಕಿಯ ತಾಯಿ ಆರೋಪಿಸಿದ್ದರು.

ನಂತರ ಸದಾಶಿವ ನಗರ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಅಡಿಯಲ್ಲಿ ಎಫ್​ಐಆರ್ ದಾಖಲಿಸಿದ್ದರು. ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ನೋಟಿಸ್ ನೀಡಿದ್ದರೂ ಯಡಿಯೂರಪ್ಪ ಗೈರು ಹಾಜರಾಗಿದ್ದರು. ಅಂತಿಮವಾಗಿ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ವಿರುದ್ಧ ಬಂಧನ ವಾರಂಟ್ ಹೊರಡಿಸುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ ಅವರ ಬಂಧನಕ್ಕೆ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ತಮ್ಮ ವಿರುದ್ಧ ದಾಖಲಾಗಿರುವ ದೂರು ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ನಿರ್ದೇಶನದಂತೆ ಯಡಿಯೂರಪ್ಪ ಅವರು ಸಿಐಡಿ ಎದುರು ವಿಚಾರಣೆಗೆ ಹಾಜರಾಗಿದ್ದರು.

ಈ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿರುವ ಅವರು ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯುತ್ತಿದೆ.

ಎಸ್‌ಐಟಿ ರಚನೆ ಪ್ರಶ್ನಿಸಿ ರಮೇಶ್‌ ಜಾರಕಿಹೊಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ: ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿರುವುದನ್ನು ಪ್ರಶ್ನಿಸಿ ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ. ಸಂತ್ರಸ್ತೆ, ಎಸ್‌ ಶ್ರವಣ್‌ ಕುಮಾರ್‌ ಮತ್ತು ಬಿಎಂ ನರೇಶ್‌ ಅವರು ತಮ್ಮ ವಿರುದ್ಧ ರಮೇಶ್‌ ಜಾರಕಿಹೊಳಿ ದಾಖಲಿಸಿರುವ ಎಫ್​ಐಆರ್‌ ರದ್ದುಪಡಿಸುವಂತೆ ಕೋರಿರುವ ಅರ್ಜಿಗಳ ವಿಚಾರಣೆಯನ್ನೂ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಸೆಪ್ಟೆಂಬರ್ 16ಕ್ಕೆ ಮುಂದೂಡಿದೆ.

mysore-dasara_Entry_Point