ಕನ್ನಡ ಸುದ್ದಿ  /  ಕರ್ನಾಟಕ  /  Hubli News: ಅಂಜಲಿ ಹತ್ಯೆ, ಹುಬ್ಬಳ್ಳಿಯಲ್ಲಿ ಇಂದು ಪರಮೇಶ್ವರ್‌ ಸಭೆ, ಸಿಬಿಐ ತನಿಖೆಗೆ ಜೋಶಿ ಆಗ್ರಹ

Hubli News: ಅಂಜಲಿ ಹತ್ಯೆ, ಹುಬ್ಬಳ್ಳಿಯಲ್ಲಿ ಇಂದು ಪರಮೇಶ್ವರ್‌ ಸಭೆ, ಸಿಬಿಐ ತನಿಖೆಗೆ ಜೋಶಿ ಆಗ್ರಹ

ಹುಬ್ಬಳ್ಳಿಯಲ್ಲಿ ನಡೆದಿರುವ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಕುರಿತ ಹೇಳಿಕೆಗಳ ನಡುವೆ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹುಬ್ಬಳ್ಳಿಗೆ ಸೋಮವಾರ ಆಗಮಿಸುತ್ತಿದ್ದಾರೆ.

ಹುಬ್ಬಳ್ಳಿಯ ಅಂಜಲಿ ಅಂಬಿಗೇರ್‌ ಕೊಲೆ ಪ್ರಕರಣ
ಹುಬ್ಬಳ್ಳಿಯ ಅಂಜಲಿ ಅಂಬಿಗೇರ್‌ ಕೊಲೆ ಪ್ರಕರಣ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಳೆದ ವಾರ ನಡೆದಿದ್ದ ಯುವತಿ ಅಂಜಲಿ ಅಂಬಿಗೇರ್‌ ಪ್ರಕರಣದಲ್ಲಿ ಹುಬ್ಬಳ್ಳಿ ಧಾರವಾಡ ನಗರ ಉಪ ಪೊಲೀಸ್‌ ಆಯುಕ್ತರನ್ನು ಅಮಾನತುಗೊಳಿಸಿದ ನಂತರ ಗೃಹ ಸಚಿವ ಡಾ.ಪರಮೇಶ್ವರ್‌ ಅವರೂ ಆಗಮಿಸುತ್ತಿದ್ದಾರೆ. ಸೋಮವಾರ ಹುಬ್ಬಳ್ಳಿಯಲ್ಲಿ ಪೊಲೀಸರ ಕಾರ್ಯವೈಖರಿ ಕುರಿತಾಗಿ ಸಭೆ ನಡೆಸಲಿದ್ದು. ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ. ಇದರೊಟ್ಟಿಗೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರೂ ಕೊಲೆಯಾದ ಯುವತಿ ನಿವಾಸಕ್ಕೆ ಭೇಟಿ ನೀಡಿ ರಾಜ್ಯ ಸರ್ಕಾರದ ನಡೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದೂ ಅಲ್ಲದೇ ಹುಬ್ಬಳ್ಳಿಯ ಎರಡೂ ಕೊಲೆ ಪ್ರಕರಣ ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಪರಮೇಶ್ವರ್‌ ಇಂದು ಹುಬ್ಬಳ್ಳಿಗೆ

ಅಂಜಲಿ ಅಂಬಿಗೇರ್‌ ಹತ್ಯೆ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷವೂ ಇರುವ ಕುರಿತು ಆರೋಪಗಳು ಕೇಳಿ ಬಂದ ನಂತರ ಈಗಾಗಲೇ ಸರ್ಕಾರ ಮೂವರನ್ನು ಅಮಾನತುಪಡಿಸಿದೆ. ಐಪಿಎಸ್‌ ಅಧಿಕಾರಿಯನ್ನು ಸಸ್ಪೆಂಡ್‌ ಮಾಡಲಾಗಿದೆ. ಈಗ ಖುದ್ದು ಗೃಹ ಸಚಿವರೇ ಹುಬ್ಬಳ್ಳಿಗೆ ಆಗಮಿಸಿ ಕಾನೂನು ಮತ್ತು ಸುವ್ಯವಸ್ಥೆ ಪರಿಶೀಲಿಸಲಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಲಿದ್ದಾರೆ. ಅಲ್ಲದೇ ಅಂಜಲಿ ಅಂಬಿಗೇರ್‌ ನಿವಾಸಕ್ಕೂ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳುವರು.

ಸೋಮವಾರ ಹುಬ್ಬಳ್ಳಿಗೆ ಸಚಿವ ಪರಮೇಶ್ವರ ಗೃಹ ಸಚಿವ ಜಿ.ಪರಮೇಶ್ವರ್ ಅವರು ಆಗಮಿಸುವರು. ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನಿಂದ ವಿಮಾನದ ಮೂಲಕ ಹೊರಟು ಮಧ್ಯಾಹ್ನ 3.30ಕ್ಕೆ ಹುಬ್ಬಳ್ಳಿಗೆ ತಲುಪುವರು. ಸಂಜೆ 7ರವರೆಗೂ ವಿವಿಧ ಸಭೆಗಳಲ್ಲಿ ಪಾಲ್ಗೊಂಡು ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡುವರು ಎಂದು ಪ್ರವಾಸದ ವಿವರ ಬಿಡುಗಡೆ ಮಾಡಲಾಗಿದೆ.

ಪ್ರಲ್ಹಾದ ಜೋಶಿ ಆಕ್ರೋಶ

ಭಾನುವಾರ ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕರ್ನಾಟಕಲ್ಲಿ ನಾಲ್ಕು ತಿಂಗಳ ಅವಧಿಯಲ್ಲಿಯೇ 430 ಕೊಲೆಗಳು ನಡೆದಿವೆ. ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚಾಗಿವೆ.ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದರೆ ಅಂಜಲಿ ಪ್ರಕರಣ ಆಗುತ್ತಿರಲಿಲ್ಲ. ಎರಡೂ ಪ್ರಕರಣದಿಂದ ಹುಬ್ಬಳ್ಳಿ ಜನ ಭಯಭೀತರಾಗಿದ್ದು. ಎರಡೂ ಪ್ರಕರಣ ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ಅಂಜಲಿ ಅಂಬಿಗೇರ ಪ್ರಕರಣದಲ್ಲಿ ಪೊಲೀಸ್‌ ಇಲಾಖೆ ವೈಫಲ್ಯ ಎದ್ದು ಕಾಣುತ್ತಿದೆ. ಅಂಜಲಿ ಕುಟುಂಬದವರು ದೂರು ನೀಡಲು ಹೋದರೆ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಸಮಗ್ರ ತನಿಖೆಯಾಗಲೇಬೇಕು. ಇಲ್ಲದೇ ಹುಬ್ಬಳ್ಳಿ ಧಾರವಾಡಕ್ಕೆ ದಕ್ಷ ಅಧಿಕಾರಿಗಳನ್ನು ನೇಮಿಸಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಸುದ್ದಿಗಾರರ ಜತೆಗೆ ಮಾತನಾಡಿದ ವಿಧಾನಸಭೆ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ, ಹುಬ್ಬಳ್ಳಿ ಧಾರವಾಡ ಪೊಲೀಸ್‌ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಇದರಿಂದ ಅಪರಾಧ ಚಟುವಟಿಕೆಗಳು ಹೆಚ್ಚಿವೆ. ಇದರೊಟ್ಟಿಗೆ ಜಿಲ್ಲೆಯಲ್ಲಿ ಅಕ್ರಮ ಗಾಂಜಾ, ಮದ್ಯ ಮಾರಾಟ ಪ್ರಕರಣಗಳೂ ಎಗ್ಗಿಲ್ಲದೇ ನಡೆದಿವೆ. ಇದನ್ನು ತಡೆಯಲು ದಕ್ಷ ಅಧಿಕಾರಿಗಳನ್ನು ನಿಯೋಜಿಸುವ ಕಾರ್ಯವನ್ನು ಸರ್ಕಾರ ಕೂಡಲೇ ಮಾಡಬೇಕು ಎಂದು ಆಗ್ರಹಿಸಿದರು.

ಆಸ್ಪತ್ರೆಯಿಂದ ಬಿಡುಗಡೆ

ಈ ನಡುವೆ ಸಹೋದರಿ ಹತ್ಯೆ ಕಣ್ಣಾರೆ ಕಂಡು ಆತಂಕದ ಜತೆಗೆ ಬೇಸರದಿಂದ ಆತ್ಮಹತ್ಯೆಗೆ ಯತ್ನಿಸಿದ್ದ ಯಶೋಧಾ ಅಂಬಿಗೇರ್‌ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾಳೆ. ಭಾನುವಾರ ಬೆಳಿಗ್ಗೆಯೇ ಕಿಮ್ಸ್‌ ಆಸ್ಪತ್ರೆಯಿಂದ ಯುವತಿಯನ್ನು ಬಿಡುಗಡೆ ಮಾಡಲಾಗಿದ್ದು, ಆಕೆಯನ್ನು ಮನೆಗೆ ಕರೆದೊಯ್ಯಲಾಗಿದೆ.

ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.

ಟಿ20 ವರ್ಲ್ಡ್‌ಕಪ್ 2024