ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಎಸ್ ಜೈಶಂಕರ್; ಕರ್ನಾಟಕದಿಂದ ಕಣಕ್ಕಿಳೀತಾರಾ
ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿರುವ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಎಸ್ ಜೈಶಂಕರ್ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ನಿರೀಕ್ಷೆಯಿದೆ. ಆದಾಗ್ಯೂ, ಅವರು ಕರ್ನಾಟಕದಿಂದ ಕಣಕ್ಕೆ ಇಳೀತಾರಾ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿರುವುದೇನು?
ನವದೆಹಲಿ: ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳ ಚುನಾವಣೆ ಮುಕ್ತಾಯವಾಗಿ ಫಲಿತಾಂಶವೂ ಬಂತು. ಲೋಕಸಭಾ ಚುನಾವಣೆ ಸಮೀಪದಲ್ಲಿರುವ ಕಾರಣ, ಕೆಲವು ರಾಜ್ಯಸಭಾ ಸದಸ್ಯರು ಲೋಕಸಭೆ ಚುನಾವಣಾ ಕಣಕ್ಕೆ ಇಳಿಯುವ ನಿರೀಕ್ಷೆ ಇದೆ. ಈ ಪೈಕಿ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೆಸರು ಮುಂಚೂಣಿಗೆ ಬಂದಿದೆ.
ಇದಕ್ಕೆ ಪುಷ್ಟಿ ನೀಡುವಂತೆ, “ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಎಸ್ ಜೈಶಂಕರ್ ಅವರು ಮುಂಬರುವ 2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ” ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಆದಾಗ್ಯೂ, ಈ ಇಬ್ಬರು ಸಚಿವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ನಿರ್ಧರಿಸಲಾಗಿಲ್ಲ ಎಂಬುದನ್ನೂ ಅವರು ಹೇಳಿದರು.
ಪ್ರಸ್ತುತ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿದ್ದಾರೆ. ಅದೇ ರೀತಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಗುಜರಾತ್‌ನಿಂದ ರಾಜ್ಯಸಭಾ ಸದಸ್ಯರಾಗಿದ್ದಾರೆ.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿರುವುದೇನು
"ಅವರು (ನಿರ್ಮಲಾ ಸೀತಾರಾಮನ್ ಮತ್ತು ಜೈಶಂಕರ್) ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಹೆಚ್ಚು ಕಡಿಮೆ ಅಂತಿಮವಾಗಿದೆ. ಅವರು ಎಲ್ಲಿಂದ ಸ್ಪರ್ಧಿಸುತ್ತಾರೆ, ಅದು ಕರ್ನಾಟಕದಲ್ಲೋ ಅಥವಾ ಬೇರೆ ರಾಜ್ಯದಲ್ಲೋ ಎಂಬುದು ಇನ್ನೂ ನಿರ್ಧರಿಸಲಾಗಿಲ್ಲ" ಎಂದು ಜೋಶಿ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.
ಕೇಂದ್ರ ಸಚಿವರು ಬೆಂಗಳೂರಿನಿಂದ ಸ್ಪರ್ಧಿಸುತ್ತಾರೆಯೇ ಎಂದು ಕೇಳಿದಾಗ, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಲ್ಹಾದ್ ಜೋಶಿ, ಇನ್ನೂ ಯಾವುದನ್ನೂ ಅಂತಿಮಗೊಳಿಸದ ಕಾರಣ, ಈ ಪ್ರಶ್ನೆಗೆ ಉತ್ತರಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ
ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟಿನಿಂದ ಚುನಾವಣೆ ಎದುರಿಸಲಿವೆ. ಎಲ್ಲಾ ಲೋಕಸಭಾ ಸ್ಥಾನಗಳನ್ನು ಗೆಲ್ಲಲು ನಾವು ಶೇಕಡಾ 100 ರಷ್ಟು ಪ್ರಯತ್ನ ಮಾಡುತ್ತೇವೆ ಎಂದು ನಮ್ಮ ಎಲ್ಲಾ ನಾಯಕರು ನಮ್ಮ ಗೃಹ ಸಚಿವರಿಗೆ (ಅಮಿತ್ ಶಾ) ಭರವಸೆ ನೀಡಿದ್ದಾರೆ. ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ನವದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಶನಿವಾರ ಬಿಜೆಪಿ ಐದು ರಾಜ್ಯಗಳ ಕೋರ್ ಗ್ರೂಪ್ ಸಭೆ ನಡೆಸಿತು. ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಉಪಸ್ಥಿತರಿದ್ದರು.
ಉತ್ತರ ಪ್ರದೇಶ, ತೆಲಂಗಾಣ, ಪಶ್ಚಿಮ ಬಂಗಾಳ, ಛತ್ತೀಸ್‌ಗಢ ಮತ್ತು ರಾಜಸ್ಥಾನದ ಲೋಕಸಭಾ ಸ್ಥಾನಗಳ ಸಿದ್ಧತೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಫೆಬ್ರವರಿ 29 ಅಥವಾ ಮಾರ್ಚ್ ಮೊದಲ ವಾರದಲ್ಲಿ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, 100 ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ. ಈ ವರ್ಷದ ಏಪ್ರಿಲ್ ಮತ್ತು ಮೇ ನಡುವೆ ದೇಶಾದ್ಯಂತ ಲೋಕಸಭಾ ಚುನಾವಣೆಗಳು ನಡೆಯುವ ನಿರೀಕ್ಷೆಯಿದೆ.
(This copy first appeared in Hindustan Times Kannada website. To read more like this please logon to kannada.hindustantimes.com)