ವನ್ಯಜೀವಿ ಮಂಡಳಿಯ ಮಾಜಿ ಉಪಾಧ್ಯಕ್ಷ, ಕ್ರಿಕೆಟಿಗ ಅನಿಲ್ ಕುಂಬ್ಳೆ ಕರ್ನಾಟಕ ಅರಣ್ಯ ಇಲಾಖೆ ರಾಯಭಾರಿ
ಕನ್ನಡ ಸುದ್ದಿ  /  ಕರ್ನಾಟಕ  /  ವನ್ಯಜೀವಿ ಮಂಡಳಿಯ ಮಾಜಿ ಉಪಾಧ್ಯಕ್ಷ, ಕ್ರಿಕೆಟಿಗ ಅನಿಲ್ ಕುಂಬ್ಳೆ ಕರ್ನಾಟಕ ಅರಣ್ಯ ಇಲಾಖೆ ರಾಯಭಾರಿ

ವನ್ಯಜೀವಿ ಮಂಡಳಿಯ ಮಾಜಿ ಉಪಾಧ್ಯಕ್ಷ, ಕ್ರಿಕೆಟಿಗ ಅನಿಲ್ ಕುಂಬ್ಳೆ ಕರ್ನಾಟಕ ಅರಣ್ಯ ಇಲಾಖೆ ರಾಯಭಾರಿ

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕರ್ನಾಟಕ ವನ್ಯಜೀವಿ ಮಂಡಳಿ ಉಪಾಧ್ಯಕ್ಷರಾಗಿ ಕೆಲಸ ಮಾಡಿದ್ದ ಅಂತರಾಷ್ಟ್ರೀಯ ಕ್ರಿಕೆಟಿಗ ಹಾಗೂ ವನ್ಯಜೀವಿ ಛಾಯಾಗ್ರಾಹಕ ಅನಿಲ್‌ ಕುಂಬ್ಳೆ ಅವರನ್ನು ಕರ್ನಾಟಕ ಅರಣ್ಯ ಇಲಾಖೆ ರಾಯಭಾರಿಯಾಗಿ ನೇಮಿಸಲಾಗಿದೆ.

ಕರ್ನಾಟಕ ಅರಣ್ಯ ಇಲಾಖೆ ರಾಯಭಾರಿಯಾಗಿ ಅನಿಲ್‌ ಕುಂಬ್ಳೆ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಅರಣ್ಯ ಇಲಾಖೆ ರಾಯಭಾರಿಯಾಗಿ ಅನಿಲ್‌ ಕುಂಬ್ಳೆ ಅವರನ್ನು ನೇಮಕ ಮಾಡಲಾಗಿದೆ.

ಬೆಂಗಳೂರು: ಕರ್ನಾಟಕದ ಶತಮಾನದ ಇತಿಹಾಸವುಳ್ಳ ಮೈಸೂರು ಸ್ಯಾಂಡಲ್‌ ಸೋಪು ಬ್ರಾಂಡ್‌ ರಾಯಭಾರಿಯಾಗಿ ಹೊರ ರಾಜ್ಯದವರನ್ನು ನೇಮಿಸಿದ ವಿಚಾರದಲ್ಲಿ ವಿವಾದ ಇರುವ ನಡುವೆಯೇ ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲು ನಿರ್ಧರಿಸಲಾಗಿದೆ.ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿ ಇದೆ. ಅರಣ್ಯದ ಬಗ್ಗೆ ಪ್ರೀತಿ ಇದೆ. ಹೀಗಾಗಿ ಅವರು ಯಾವುದೇ ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ವಿಶ್ವದ್ಯಂತ ಖ್ಯಾತಿ ಹೊಂದಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ತಾವು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ 2 ವರ್ಷ ತುಂಬಿದ ಸಂದರ್ಭದಲ್ಲಿಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರ ಖಂಡ್ರೆ ಅವರು, ಅನಿಲ್‌ ಕುಂಬ್ಳೆ ಅವರನ್ನು ಅರಣ್ಯ ಇಲಾಖೆ ರಾಯಭಾರಿಯಾಗಿ ನೇಮಿಸಲು ಖುಷಿಯಾಗಿದೆ.ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿ, ಅರಣ್ಯ ಕುರಿತು ಅಭಿಮಾನವನ್ನು ಹೊಂದಿರುವ ಅವರು ರಾಯಭಾರಿಯಾಗಲು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು.

ಅನಿಲ್‌ ಕುಂಬ್ಳೆ ಅವರು ಕಳೆದ ಮೂರು ದಶಕಕ್ಕೂ ಹೆಚ್ಚು ಕಾಲದಿಂದಲೂ ವನ್ಯಪ್ರಿಯರಾಗಿ ರೂಪುಗೊಂಡಿದ್ದಾರೆ. ಬಿಡುವು ಸಿಕ್ಕಾಗ ಕರ್ನಾಟಕದ ನಾಗರಹೊಳೆ, ಬಂಡೀಪುರ, ಅಣಶಿ, ಭದ್ರಾ ಸಹಿತ ವಿವಿಧ ಅರಣ್ಯ ಪ್ರದೇಶಗಳಿಗೆ ಕುಟುಂಬ ಸಮೇತ ಭೇಟಿ ನೀಡುತ್ತಾರೆ. ವಿವಿಧ ಚಟುವಟಿಕೆಗಳನ್ನು ಅರಣ್ಯ ಭಾಗದಲ್ಲಿ ಆಯೋಜಿಸಿ ಸಿಬ್ಬಂದಿಗಳನ್ನು ಉತ್ತೇಜಿಸುತ್ತಾ ಬಂದಿದ್ದಾರೆ. ಅರಣ್ಯದಲ್ಲಿ ಹೆಚ್ಚಿನ ಸಮಯ ಕಳೆಯುವುದು, ಅಲ್ಲಿನ ಸುಂದರ ಪರಿಸರವನ್ನು ಸವಿಯುವುದು ಅನಿಲ್‌ ಕುಂಬ್ಳೆ ಅವರ ಪ್ರಮುಖ ಆಸಕ್ತಿ ವಲಯಗಳು. ಅಷ್ಟೇ ಅಲ್ಲದೇ ವನ್ಯಜೀವಿ ಛಾಯಾಗ್ರಾಹಕರಾಗಿಯೂ ಅನಿಲ್‌ ಕುಂಬ್ಳೆ ಹೆಸರುವಾಸಿಯಾಗಿದ್ದಾರೆ. ಹುಲಿ, ಆನೆ, ಚಿರತೆ ಸೇರಿದಂತೆ ವಿವಿಧ ವನ್ಯಜೀವಿಗಳ ಛಾಯಾಚಿತ್ರಗಳನ್ನು ಸೆರೆ ಹಿಡಿದಿದ್ದಾರೆ. ಅವರೆ ಸಾಮಾಜಿಕ ಮಾಧ್ಯಮದ ಖಾತೆಗಳಲ್ಲಿ ಅದನ್ನು ನೋಡಬಹುದು. ಕರ್ನಾಟಕದ ಅರಣ್ಯ ಮಾತ್ರವಲ್ಲದೇ ಹೊರ ರಾಜ್ಯ, ದೇಶಗಳಿಗೂ ಆಗಾಗ ಭೇಟಿ ನೀಡಿ ಅರಣ್ಯವನ್ನು ಅವರು ಸವಿಯುತ್ತಾರೆ. ಈ ಕಾರಣದಿಂದಲೇ ಅವರನ್ನು ಕರ್ನಾಟಕದ ಅರಣ್ಯ ಇಲಾಖೆಯ ರಾಯಭಾರಿಯನ್ನು ನೇಮಕ ಮಾಡಲಾಗಿದೆ.

8,848 ವನಮಹೋತ್ಸವ

ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮವನ್ನು ಜಗತ್ತೇ ಎದುರಿಸುತ್ತಿದ್ದು, ಈ ಕಾಲಘಟ್ಟದಲ್ಲಿ ಹಸಿರು ಹೊದಿಕೆಯ ಹೆಚ್ಚಳ, ಅರಣ್ಯ ಸಂರಕ್ಷಣೆ ಮತ್ತು ನಿರ್ವಹಣೆ ಇಲಾಖೆಯ ಜವಾಬ್ದಾರಿಯಾಗಿದೆ. ಕಳೆದ 2 ವರ್ಷಗಳಲ್ಲಿ ಕರ್ನಾಟಕದಲ್ಲಿ ಸುಮಾರು 8848 ವನಮಹೋತ್ಸವ ನಡೆಸಲಾಗಿದ್ದು, ಅರಣ್ಯ ಪ್ರದೇಶ, ರಸ್ತೆಬದಿ ಮತ್ತು ಸರ್ಕಾರಿ ಜಾಗದಲ್ಲಿ ಸುಮಾರು 8.5 ಕೋಟಿ ಸಸಿಗಳನ್ನು ನೆಟ್ಟು, ಪೋಷಿಸಲಾಗಿದೆ, 2023-24 ಮತ್ತು 2024-25ರ ಸಾಲಿನಲ್ಲಿ ಒಟ್ಟು 120975 ಹೆಕ್ಟೇರ್ ಪ್ರದೇಶದಲ್ಲಿ ನೆಡುತೋಪು, 25 ಹೊಸ ವೃಕ್ಷೋದ್ಯಾನ ಮತ್ತು 35 ದೇವರ ಕಾಡು ನಿರ್ಮಾಣ ಮಾಡಲಾಗಿದೆ ಎಂದು ಸಚಿವರು ವಿವರ ನೀಡಿದರು.

ಕಳೆದ 2 ವರ್ಷದಲ್ಲಿ ಕೃಷಿಕರಿಗೆ ತಮ್ಮ ಜಮೀನಿನಲ್ಲಿ ನಾಟಿ ಮಾಡಲು ಮತ್ತು ಇತರ ಜಮೀನಿನಲ್ಲಿ ನೆಡಲು ಒಟ್ಟಾರೆ 3.70 ಕೋಟಿ ಸಸಿಗಳನ್ನು ವಿತರಣೆ ಮಾಡಲಾಗಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದರು.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.