ನಾಳೆಯಿಂದ ದ್ವಿತೀಯ ಪಿಯುಸಿ-2 ಪರೀಕ್ಷೆ ಶುರು, ಈ ಬಾರಿಯೂ ಸಿಸಿಟಿವಿ, ವೆಬ್ ಕಾಸ್ಟಿಂಗ್, ಪ್ರಮುಖ ಸೂಚನೆಗಳನ್ನು ಪಾಲಿಸಿ
ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ 2 ಪರೀಕ್ಷೆಗಳು ಗುರುವಾರದಿಂದ ಆರಂಭವಾಗುತ್ತಿದ್ದು, ಮೇ 8ರ ವರೆಗೆ ಇರಲಿವೆ. ಅಭ್ಯರ್ಥಿಗಳು ಪಾಲಿಸಬೇಕಾದ ಸೂಚನೆಗಳನ್ನು ಇಲ್ಲಿ ನೀಡಲಾಗಿದೆ.

ಬೆಂಗಳೂರು: ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಪ್ರಿಲ್ 24 ರಿಂದ ಮೇ 8 ರವರೆಗೆ ನಡೆಯುವ ಎರಡನೇ ಹಂತದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಇದಕ್ಕಾಗಿ ಕರ್ನಾಟಕ ಶಾಲಾ ಶಿಕ್ಷಣ ಮೌಲ್ಯ ನಿರ್ಣಯ ಮಂಡಳಿಯು ಸಿದ್ದತೆಯನ್ನು ಮಾಡಿಕೊಂಡಿದೆ. ಈ ನಿಮಿತ್ತ ಪರೀಕ್ಷಾ ಕೇಂದ್ರಗಳ ಸುತ್ತಲು 200 ಮೀಟರ್ ಆವರಣವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಎರಡನೇ ಹಂತದ ದ್ವಿತೀಯ ಪಿಯುಸಿ ಪರೀಕ್ಷೆಯು ಏ. 24 ರಿಂದ ಮೇ 8 ರ ವರೆಗೆ ಬೆಳಿಗ್ಗೆ 10 ಗಂಟೆ ಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷೆಗಳನ್ನು ಸುಗಮ ಮತ್ತು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಅಂತರದ ಪ್ರದೇಶದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಿಷೇಧಾಜ್ಞೆ ಜಾರಿಯನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ. ಮೊಬೈಲ್, ಪೇಜರ್, ಜರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಹಾಗೂ ನಿಯೋಜಿತ ಶಿಕ್ಷಕರನ್ನು ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಖಜಾನೆ ಯಿಂದ ಪ್ರಶ್ನೆ ಪತ್ರಿಕೆಗಳನ್ನು ಕೊಂಡೊಯ್ಯಲು ತಹಶೀಲ್ದಾರ್ ಬಿ.ಇ.ಒ ಹಾಗೂ ಪ್ರಾಂಶುಪಾಲರನ್ನು ಒಳಗೊಂಡಂತೆ ತ್ರಿ ಸದಸ್ಯ ಸಮಿತಿಯನ್ನು ರಚಿಸಲಾಗಿದೆ, ಒಟ್ಟು ಆರು ಮಾರ್ಗಗಳ ಮೂಲಕ ಪ್ರಶ್ನ ಪತ್ರಿಕೆಯನ್ನು ಸಾಗಿಸಲಾಗುವುದು ವಿದ್ಯಾರ್ಥಿಗಳಿಗೆ ಉತ್ತಮ ಮೂಲ ಸೌಕರ್ಯಗಳಾದ ಪೀಠೋಪಕರಣಗಳು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಶೌಚಾಲಯ ವ್ಯವಸ್ಥೆ ಹಾಗೂ ಇನ್ನಿತರ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ, ಪ್ರತಿ ಕೇಂದ್ರಕ್ಕೂ ಆರೋಗ್ಯ ಸಿಬ್ಬಂದಿಯನ್ನು ನೇಮಿಸಲಾಗಿದೆ, ಪರೀಕ್ಷಾ ಕೇಂದ್ರಗಳಲ್ಲಿ ಸುಸರ್ಜಿತ ವಿದ್ಯುತ್ ವ್ಯವಸ್ಥೆ ಕಲ್ಪಿಸಲಾಗಿದೆ ಎನ್ನುವುದು ಮಂಡ್ಯ ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ಅವರ ವಿವರಣೆ.
ಈ ಸೂಚನೆ ಪಾಲಿಸಿ
ಈ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಮೊಬೈಲ್, ಸೆಲ್ಯೂಲಾರ್ ಫೋನ್, ಟ್ಯಾಬ್ಲೆಟ್, ಪೆನ್‌ಡ್ರೈವ್, ಬ್ಲೂಟೂತ್ ಡಿವೈಸ್, ಸ್ಮಾರ್ಟ್‌ವಾಚ್, ಕ್ಯಾಲ್ಕುಲೇಟರ್ ಮತ್ತು ಇತರೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳು ಅಥವಾ ಲಾಗ್‌ಟೇಬಲ್, ಕೈಚೀಲ, ಪರ್ಸ್, ನೋಟುಗಳು, ಚಾರ್ಟ್, ಬಿಡಿ ಹಾಳೆಗಳು ಅಥವಾ ರೆಕಾರ್ಡಿಂಗ್ ವಸ್ತುಗಳು ಸೇರಿದಂತೆ ಇನ್ನಿತರೆ ಯಾವುದೇ ಉಪಕರಣ ಕೊಂಡೊಯ್ಯುವಂತಿಲ್ಲ.
ಪರೀಕ್ಷೆಗಳು ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ 200 ಮೀ. ಸುತ್ತ ಮುತ್ತಲಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನಲ್ಲಿ ಯಾವುದೇ ಜೆರಾಕ್ಸ್ ಅಂಗಡಿಗಳು ತೆರೆದಂತೆ ಕ್ರಮ ವಹಿಸಲಾಗುವುದು, ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಾಜರಾತಿಯನ್ನು ಆನ್ಲೈನ್ ಲಾಗಿನ್ ಪೋರ್ಟಲ್ ಮೂಲಕ ತೆಗೆದುಕೊಳ್ಳಲಾಗುವುದು
ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಶಸ್ತ್ರಾಸ್ತ್ರ ಪೊಲೀಸ್ ರಕ್ಷಣೆಯನ್ನು ಒದಗಿಸಲಾಗಿದೆ, ಪರೀಕ್ಷಾ ದಿನಗಳಂದು ಪ್ರಶ್ನೆಪತ್ರಿಕೆ ವಿತರಕರ ತಂಡಗಳೊಂದಿಗೆ ಶಸ್ತ್ರಾಸ್ತ್ರ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗಿದೆ
ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಯನ್ನು ಅಳವಡಿಸಲಾಗಿದ್ದು, ಸಿಸಿಟಿವಿ ವೆಬ್ ಕಾಸ್ಟಿಂಗ್ ವೀಕ್ಷಿಸಲು ವಿಶೇಷ ತಂಡವನ್ನು ರಚಿಸಲಾಗಿದೆ, ಎಲ್ಲಾ ಸಿಸಿಟಿವಿಯ ವೆಬ್ ಕಾಸ್ಟಿಂಗ್ ಅನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವೀಕ್ಷಿಸಲಾಗುತ್ತಿರುತ್ತದೆ. ಮೇಲ್ವಿಚಾರಕರು ಎಚ್ಚರಿಕೆಯಿಂದ ಪರೀಕ್ಷೆಯನ್ನು ನಡೆಸಬೇಕೆಂದು ಸೂಚಿಸಲಾಗಿದೆ.
ಉಚಿತ ಬಸ್
ದ್ವಿತೀಯ ಪಿಯು ಪರೀಕ್ಷೆ-2 ಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಬಿಎಂಟಿಸಿ ಅವಕಾಶ ಕಲ್ಪಿಸಿದೆ. ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಬಸ್‌ಗಳಲ್ಲಿ ದ್ವಿತೀಯ ಪಿಯು ಪರೀಕ್ಷೆ-2 ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಬಹುದು. ಪರೀಕ್ಷಾ ಕೇಂದ್ರಗಳಿರುವ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲ ಬಸ್‌ಗಳು ಕಾರ್ಯಾಚರಿಸಲಿವೆ. ಅಗತ್ಯವಿದ್ದರೆ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಿಸುವುದಾಗಿ ಬಿಎಂಟಿಸಿ ಹೇಳಿದೆ.
ದ್ವಿತೀಯ ಪಿಯು ಪರೀಕ್ಷೆ-2 ವೇಳಾಪಟ್ಟಿ ಹೀಗಿದೆ
24-4-25: ಕನ್ನಡ, ಅರೇಬಿಕ್
25-4-25: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಜೀವಶಾಸ್ತ್ರ
26-4-25: ಇತಿಹಾಸ, ಭೌತಶಾಸ್ತ್ರ
27-4-25: ಭಾನುವಾರ (ರಜಾ ದಿನ)
28-4-25: ಭೂಗೋಳಶಾಸ್ತ್ರ, ಮನಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
29-4-25: ಇಂಗ್ಲೀಷ್
30-4-25: ಬಸವ ಜಯಂತಿ (ರಜಾ ದಿನ)
01-05-25: ಕಾರ್ಮಿಕ ದಿನಾಚರಣೆ (ರಜಾ ದಿನ)
02-05-25: ತರ್ಕಶಾಸತ್ರ, ವ್ಯವಹಾರ ಶಾಸ್ತ್ರ, ಗಣಿತ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ.
03-05-25: ಸಮಾಜಶಾಸ್ತ್ರ, ಭೂರ್ಗರ್ಭಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕಶಾಸ್ತ್ರ
04-05-25: ಭಾನುವಾರ (ರಜಾ ದಿನ)
05-05-25: ಅರ್ಥಶಾಸ್ತ್ರ
06-05-25: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
07-5-25: ಹಿಂದಿ
08-05-25: ತಮಿಳು, ತೆಲುಗು,ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.