ದೌರ್ಜನ್ಯ ಪ್ರಕಣಗಳಲ್ಲಿ 60 ದಿನಗಳ ಒಳಗೆ ಆರೋಪಪಟ್ಟಿ ದಾಖಲಿಸಿ, ತಡೆಯಾಜ್ಞೆ ತಂದರೆ ಎಜಿ ಜತೆ ಮಾತನಾಡಿ: ಸಿಎಂ ಸಲಹೆ
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಎಚ್ವರಿಕೆ ನೀಡಿದ್ದಾರೆ.

ಬೆಂಗಳೂರು: ಕರ್ನಾಟಕದ ದೌರ್ಜನ್ಯ ಪ್ರಕಣಗಳಲ್ಲಿ 60 ದಿನಗಳ ಒಳಗೆ ಆರೋಪಪಟ್ಟಿ ದಾಖಲಿಸಲೇಬೇಕು. ಯಾರಾದರೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದರೆ ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸಿ ತಡೆಯಾಜ್ಞೆ ತೆರವುಗೊಳಿಸಬೇಕು. ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಹಲವು ದಶಕಗಳಿಂದ ಶೇ.3 ಗಿಂತ ಹೆಚ್ಚಾಗಿಲ್ಲ. ಈ ಕಾರಣಕ್ಕೂ ನಾನು ಡಿಸಿಆರ್‌ಇ ಸೆಲ್ ಗಳಿಗೆ ಪೊಲೀಸ್ ಠಾಣೆ ಶಕ್ತಿ ನೀಡಿದ್ದಾಗಿದೆ. ಇನ್ನೂ ಶಿಕ್ಷೆ ಪ್ರಮಾಣ ಹೆಚ್ಚಾಗದಿದ್ದರೆ ಹೇಗೆ? ಪ್ರಕರಣಗಳ ತನಿಖೆಯ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಪೋಕ್ಸೋ ಪ್ರಕರಣಗಳು ನ್ಯಾಯಾಲಯಗಳಲ್ಲಿ ದೀರ್ಘ ಕಾಲದಿಂದ ಬಾಕಿ ಇದ್ದರೆ ಪ್ರಾಸಿಕ್ಯೂಷನ್ ಜೊತೆ ಚರ್ಚಿಸಿ ಬೇಗ ಇತ್ಯರ್ಥ ಪಡಿಸಲು, ಶೀಘ್ರ ನ್ಯಾಯದಾನಕ್ಕೆ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಹಲವಾರು ಸೂಚನೆಗಳನ್ನು ಸಿಎಂ ನೀಡಿದರು.
ಪರಿಶಿಷ್ಠರ ಕೊಲೆ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ ತನಿಖೆ ತಡ ಆದಷ್ಟೂ, ನ್ಯಾಯಾಲಯಗಳಲ್ಲಿ ವಿಚಾರಣೆ ತಡೆ ಆದಷ್ಟೂ ಸಾಕ್ಷಿ ನಾಶ ಆಗುತ್ತದೆ. ಆದ್ದರಿಂದ ಶಿಕ್ಷೆ ಪ್ರಮಾಣ ಹೆಚ್ಚಾಗಲೇ ಬೇಕು. ಯಾಕೆ ಆಗುತ್ತಿಲ್ಲ ಎಂದು ಪ್ರಶ್ನಿಸಿದ ಸಿಎಂ, ಆರೋಪ ಪಟ್ಟಿ ಶೀರ್ಘವಾಗಿ ಸಲ್ಲಿಸಿ ಸಾಕ್ಷ್ಯಗಳನ್ನು ಪರಿಣಾಮಕಾರಿಯಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಎಂದು ಸಿಎಂ ಸೂಚಿಸಿದರು.
ಸಿಎಂ ಸೂಚನೆ ಏನೇನು
- ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ ಎಸ್ಪಿ ಹಾಗೂ ಡಿಸಿ ವಿರುದ್ಧ ಮುಲಾಜಿಲ್ಲದೆ ಕ್ರಮ
- ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ. ಹೀಗಾದರೆ ಜಾತಿ ದೌರ್ಜನ್ಯ ತಡೆಗಟ್ಟುವುದು ಸಾಧ್ಯವಿಲ್ಲ
- ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಕ್ಕರೆ, ಮೇಲ್ಮನವಿ ಹೋಗಿ ಜಾಮೀನು ರದ್ದುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸಿದ ಪ್ರಕರಣಗಳು ಎಷ್ಟಿವೆ ? ಈ ಬಗ್ಗೆ ವಿವರ ಕೊಡಿ
- ಪೊಲೀಸ್ ಇಲಾಖೆಯಲ್ಲಿ ಸೀನಿಯರಿಟಿ ಲೀಸ್ಟ್ ಉಲ್ಲಂಘನೆ ಆಗಿ ಪರಿಶಿಷ್ಠರಿಗೆ ಅನ್ಯಾಯ ಆಗುತ್ತಿದೆ. ಸಮಿತಿ ಮುಂದೆ ದೂರು ಬಂದು ನಾವು ಹಿರಿಯ ಅಧಿಕಾರಿಗಳ ಗಮನಕ್ಕೂ ತಂದರೂ ಸಮಸ್ಯೆ ಬಗೆಹರಿಸುತ್ತಿಲ್ಲ ಏಕೆ ?
- ಎಡಿಜಿಪಿ ಅಡ್ಮಿನ್ ಅವರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂಬ ಸಂಸದ ಈ.ತುಕಾರಾಮ್ ಮತ್ತು ಶಾಸಕ ನರೇಂದ್ರಸ್ವಾಮಿ ಅವರ ಪ್ರತಿಕ್ರಿಯೆ ಹಿನ್ನೆಲೆಯಲ್ಲಿ ಈ ರವನ್ನು ಮುಂದಿನ ಕ್ಯಾಬಿನೆಟ್ ಗೆ ತರಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ.
- ಜಾತಿ ದೌರ್ಜನ್ಯ ದೂರು ಬಂದಾಗ ಪೊಲೀಸರೇ ಕೌಂಟರ್ ದೂರು ಪಡೆದು ಪ್ರಕರಣ ದುರ್ಬಲಗೊಳಿಸುವ ಬಗ್ಗೆ ದೂರುಗಳು ಬಂದರೆ ಅದನ್ನು ಸಹಿಸಲ್ಲ. ನಮ್ಮ ಗಮನಕ್ಕೆ ಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ತಗೊತೀವಿ
- ಎಲ್ಲಾ ಇಲಾಖೆಗಳೂ ಬಡ್ತಿಯಲ್ಲಿ ಮೀಸಲಾತಿಯನ್ನು ಚಾಚೂ ತಪ್ಪದೆ ಪಾಲಿಸಬೇಕು. ಪರಿಶಿಷ್ಢ ಸಮುದಾಯದವರಿಗೆ ಅವಕಾಶ ತಪ್ಪಿಸಲು ಅಧಿಕಾರಿಗಳು ಕುಟಿಲ ನೀತಿ ಅನುಸರಿಸಿದರೆ ಸಹಿಸಲ್ಲ
- ಬ್ಯಾಕ್ ಲಾಗ್ ಮತ್ತು ಬಡ್ತಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯಗಳನ್ನು ಸಬ್ ಕಮಿಟಿ ಪತ್ತೆ ಹಚ್ಚಿ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿಸದೆ ನಿರ್ಲಕ್ಷ್ಯ ತೋರಿಸುತ್ತಿದ್ದೀರಿ. ಇದನ್ನು ಸಹಿಸಿಕೊಳ್ಳಲಾಗದು.
- ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ ಪರಿಶೀಲನಾ ಮೀಟಿಂಗ್ ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು.
- ಪ್ರತೀ ಆರು ತಿಂಗಳಿಗೊಮ್ಮೆ ಉಸ್ತುವಾರಿ ಸಮಿತಿ ಸಭೆಯನ್ನು ಕಡ್ಡಾಯವಾಗಿ ಕರೆಯುತ್ತೇವೆ. ಈ ಸಭೆಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡು ಬಂದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಿಎಂ ಎಚ್ಚರಿಸಿದರು.
