Karnataka Budget 2023: ರಾಜ್ಯದಲ್ಲಿ ನಿರ್ಮಾಣವಾಗಲಿವೆ ಐದು ಹೊಸ ವಿಮಾನ ನಿಲ್ದಾಣಗಳು; ಎಲ್ಲೆಲ್ಲಿ?
ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಭಾಗಶಃ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ. ಇದರೊಂದಿಗೆ ವಿಜಯಪುರ ಏರ್‌ಪೋರ್ಟ್ ಕಾಮಗಾರಿಯನ್ನು ಕೂಡಾ ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಉಳಿದ ಕಾಮಗಾರಿಗಳು ಈ ವರ್ಷದೊಳಗೆ ಆರಂಭವಾಗುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಬಜೆಟ್ ಮಂಡಿಸಿದ್ದಾರೆ. ಚುನಾವಣೆಗೂ ಮುಂಚಿತವಾಗಿ ಜನಪರ ಬಜೆಟ್ ಮಂಡಿಸುವ ಉದ್ದೇಶದೊಂದಿಗೆ ಹಲವು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ರಾಜ್ಯದಲ್ಲಿ ಹೊಸದಾಗಿ ಐದು ವಿಮಾನ ನಿಲ್ದಾಣಗಳು ಶೀಘ್ರದಲ್ಲೇ ತಲೆಯೆತ್ತಲಿವೆ ಎಂದು ಸಿಎಂ ಬೊಮ್ಮಾಯಿ ಬಜೆಟ್‌ನಲ್ಲಿ ತಿಳಿಸಿದ್ದಾರೆ.
ಸುಗಮ ಸಂಚಾರ ಮತ್ತು ಸಮಯದ ಉಳಿತಾಯದ ದೃಷ್ಟಿಯಿಂದ ಜನರು ಬಸ್ ಹಾಗೂ ರೈಲಿನ ಬದಲಿಗೆ ವಿಮಾನ ಪ್ರಯಾಣದತ್ತ ಹೆಚ್ಚಿನ ಒಲವು ತೋರುತ್ತಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಬೆಂಗಳೂರು ಹಾಗೂ ಮಂಗಳೂರು ನಗರಗಳಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಿವೆ. ಇದಲ್ಲದೆ ಮೈಸೂರು, ಹುಬ್ಬಳ್ಳಿ, ಬೆಳಗಾವಿ ಹಾಗೂ ಕಲಬುರಗಿಯಲ್ಲಿಯೂ ಏರ್‌ಪೋರ್ಟ್‌ಗಳಿವೆ. ಇದರ ಹೊರತಾಗಿ ಇನ್ನೂ ಐದು ಪ್ರಮುಖ ನಗರಗಳಲ್ಲಿ ವಿಮಾನ ನಿಲ್ದಾಣಗಳು ಶೀಘ್ರದಲ್ಲೇ ನಿರ್ಮಾಣಗೊಳ್ಳಲಿವೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರವು ದಾಖಲೆ ಪ್ರಮಾಣದ 5 ಹೊಸ ವಿಮಾನ ನಿಲ್ದಾಣಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ. ಶಿವಮೊಗ್ಗ, ವಿಜಯಪುರ, ಹಾಸನ, ರಾಯಚೂರು ಮತ್ತು ಕಾರವಾರ ನಗರಗಳಲ್ಲಿ ವಿಮಾನ ನಿಲ್ದಾಣಗಳು ನಿರ್ಮಾಣಗೊಳ್ಳಲಿವೆ. ಇದರಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಭಾಗಶಃ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ. ಇದರೊಂದಿಗೆ ವಿಜಯಪುರ ಏರ್‌ಪೋರ್ಟ್ ಕಾಮಗಾರಿಯನ್ನು ಕೂಡಾ ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಉಳಿದ ಕಾಮಗಾರಿಗಳು ಈ ವರ್ಷದೊಳಗೆ ಆರಂಭವಾಗುವ ಸಾಧ್ಯತೆ ಇದೆ.
ಬಳ್ಳಾರಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿ ಹೊಸ ಟೆಂಡರ್ ಪ್ರಕ್ರಿಯೆ ಪ್ರಾರಂಭಗೊಳಿಸಲಾಗುವುದು. ಬಿಡ್ ಪ್ರಕ್ರಿಯೆ ಮೂಲಕ ಪಿಪಿಪಿ ಮಾದರಿಯಲ್ಲಿ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ.
ಮೈಸೂರು ವಿಮಾನ ನಿಲ್ದಾಣಕ್ಕೆ 320 ಕೋಟಿ ರೂಪಾಯಿ
ಸಾಂಸ್ಕೃತಿಕ ನಗರಿಯಲ್ಲಿ ಈಗಾಗಲೇ ವಿಮಾನ ನಿಲ್ದಾಣವಿದ್ದು, ಇದನ್ನು ಉನ್ನತ ದರ್ಜೆಗೆ ಏರಿಸಲು ಸರ್ಕಾರ ನಿರ್ಧರಿಸಿದೆ. ಮೈಸೂರು ವಿಮಾನ ನಿಲ್ದಾಣವನ್ನು ಉನ್ನತೀಕರಿಸಲು ಭೂ ಸ್ವಾಧೀನಕ್ಕಾಗಿ ಕ್ರಮ ವಹಿಸಲಾಗಿದ್ದು, ಇದಕ್ಕಾಗಿ 320 ಕೋಟಿ ರೂಪಾಯಿ ಹಂಚಿಕೆ ಮಾಡಲಾಗಿದೆ.
ಇಷ್ಟೇ ಅಲ್ಲದೆ ದಾವಣಗೆರೆ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿಯೂ ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ ಈಗಾಗಲೇ ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸಲಾಗಿದೆ. ಆ ಬಳಿಕ ಪ್ರಸ್ತುತ ಸಾಲಿನಲ್ಲಿಯೇ ಕಾಮಗಾರಿ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಜೆಟ್‌ನಲ್ಲಿ ತಿಳಿಸಿದ್ದಾರೆ.
597 ಕೋಟಿ ರೂಪಾಯಿ ವೆಚ್ಚದಲ್ಲಿ 12 ಹೊಸ ಯೋಜನೆ
ಭಾರತ ಸರ್ಕಾರದ ಸಾಗರಮಾಲ ಯೋಜನೆಯಡಿ ಈಗಾಗಲೇ 370 ಕೋಟಿ ರೂಪಾಯಿಗಳ ನಾಲ್ಕು ಕಿರು ಬಂದರುಗಳ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿವೆ. ಪ್ರಸಕ್ತ ಸಾಲಿನಲ್ಲಿ 597 ಕೋಟಿ ರೂಪಾಯಿ ವೆಚ್ಚದಲ್ಲಿ 12 ಹೊಸ ಯೋಜನೆಗಳನ್ನು ಪ್ರಾರಂಭಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.
ರಾಜ್ಯದ ಆರ್ಥಿಕ ಚಟುವಟಿಕೆಗಳಿಗೆ ಬೆಂಬಲವಾಗಿ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಕೇಣಿಯಲ್ಲಿ 30 MTPA ಸಾಮರ್ಥ್ಯದ ಮತ್ತು ಪಾವಿನ ಕುರ್ವೆಯಲ್ಲಿ 14 MTPA ಸಾಮರ್ಥ್ಯದ Deep Water All Weather Greenfield ಬಂದರುಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಗೊಳಿಸಲಾಗುವುದು ಎಂದು ಬಜೆಟ್‌ನಲ್ಲಿ ಹೇಳಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಮಾಜಾಳಿಯಲ್ಲಿ ಅತ್ಯಾಧುನಿಕ ಮೀನುಗಾರಿಕಾ ಬಂದರನ್ನು ನಿರ್ಮಿಸಲು 275 ಕೋಟಿಯ ಯೋಜನಾ ವರದಿಯನ್ನು ತಯಾರಿಸಲಾಗಿದೆ. ಈಗಾಗಲೇ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಮತ್ತು ಸಾಗರಮಾಲಾ ಯೋಜನೆಗಳಡಿಯಲ್ಲಿ ಇದನ್ನು ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಹಂಗಾರಕಟ್ಟೆ ಮತ್ತು ಉಡುಪಿಯಲ್ಲಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಅವರಿಂದ ದೋಣಿ ನಿರ್ಮಾವನ್ನು ಪ್ರಾರಂಭಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಹಳೆ ಮಂಗಳೂರು ಬಂದರಿನಲ್ಲಿ ಹೆಚ್ಚುವರಿ ಶಿಪ್ ಯಾರ್ಡ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗುವುದು. ಇದು ಕರಾವಳಿ ಪ್ರದೇಶದಲ್ಲಿ ಕೈಗಾರಿಕ ಮತ್ತು ಮೀನುಗಾರಿಕೆ ಕ್ಷೇತ್ರಗಳ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಸಿಎಂ ತಿಳಿಸಿದ್ದಾರೆ.