Karnataka Budget 2023: ಖೋತಾ ಬಜೆಟ್; ಈ ಬಾರಿಯ ವೆಚ್ಚ 3.27 ಲಕ್ಷ ಕೋಟಿ, ಜಮೆ 3.24 ಲಕ್ಷ ಕೋಟಿ, ಖೋತಾ 3,269 ಕೋಟಿ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Budget 2023: ಖೋತಾ ಬಜೆಟ್; ಈ ಬಾರಿಯ ವೆಚ್ಚ 3.27 ಲಕ್ಷ ಕೋಟಿ, ಜಮೆ 3.24 ಲಕ್ಷ ಕೋಟಿ, ಖೋತಾ 3,269 ಕೋಟಿ

Karnataka Budget 2023: ಖೋತಾ ಬಜೆಟ್; ಈ ಬಾರಿಯ ವೆಚ್ಚ 3.27 ಲಕ್ಷ ಕೋಟಿ, ಜಮೆ 3.24 ಲಕ್ಷ ಕೋಟಿ, ಖೋತಾ 3,269 ಕೋಟಿ

Karnataka Budget 2023 Statistics: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖೋತಾ ಬಜೆಟ್‌ ಮಂಡಿಸಿದ್ದಾರೆ. ವೆಚ್ಚ 3.27 ಲಕ್ಷ ಕೋಟಿ ರೂಪಾಯಿ ಇದೆ. ಇದೇ ಸಮಯದಲ್ಲಿ 3.24 ಲಕ್ಷ ಕೋಟಿ ರೂ ಇರುವುದನ್ನು ಗಮನಿಸಬಹುದು. 3,269 ಕೋಟಿ ಖೋತಾ ಆಗಿದೆ.

ಸಿಎಂ ಸಿದ್ದರಾಮಯ್ಯ ಕರ್ನಾಟಕ ಬಜೆಟ್‌ ಮಂಡನೆ
ಸಿಎಂ ಸಿದ್ದರಾಮಯ್ಯ ಕರ್ನಾಟಕ ಬಜೆಟ್‌ ಮಂಡನೆ (PTI)

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ಖೋತಾ ಬಜೆಟ್‌ ಮಂಡಿಸಿದ್ದಾರೆ. ಈ ಬಾರಿಯ ವೆಚ್ಚ 3.27 ಲಕ್ಷ ಕೋಟಿ ರೂಪಾಯಿ ಇದೆ. ಇದೇ ಸಮಯದಲ್ಲಿ 3.24 ಲಕ್ಷ ಕೋಟಿ ರೂ ಇರುವುದನ್ನು ಗಮನಿಸಬಹುದು. 3,269 ಕೋಟಿ ಖೋತಾ ಆಗಿರುವುದನ್ನು ಗಮನಿಸಬಹುದು. ಇತ್ತೀಚೆಗೆ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರಕಾರವು ರಾಜ್ಯದ ಅರ್ಥವ್ಯವಸ್ಥೆ ಹದಗಡೆಲು ಹಿಂದಿನ ಸರಕಾರವನ್ನು ದೂರಿದೆ.

ಈ ಬಾರಿಯ ಆಯವ್ಯಯ ಸಂಚಿತ ನಿಧಿ ಗಾತ್ರ 3,27,747 ಕೋಟಿ ರೂಪಾಯಿ. ಇದರಲ್ಲಿ ಒಟ್ಟು ಸ್ವೀಕೃತಿ 3,24,478 ಕೋಟಿ ರೂಪಾಯಿ, ರಾಜಸ್ವ ಸ್ವೀಕೃತಿ 2,38,410 ಕೋಟಿ ರೂ ಮತ್ತು ಸಾರ್ವಜನಿಕ ಋಣ - 85,818 ಕೋಟಿ ರೂ ಸೇರಿದಂತೆ ಬಂಡವಾಳ ಸ್ವೀಕೃತಿ 86,068 ಕೋಟಿ ರೂಪಾಯಿ ಇದೆ. ಇದೇ ಸಂದರ್ಭದಲ್ಲಿ ಒಟ್ಟು ವೆಚ್ಚ 3,27,747 ಕೋಟಿ ರೂಪಾಯಿ ಇದೆ. ರಾಜಸ್ವ ವೆಚ್ಚ – 2,50,933 ಕೋಟಿ ರೂ.; ಬಂಡವಾಳ ವೆಚ್ಚ – 54,374 ಕೋಟಿ ರೂ. ಹಾಗೂ ಸಾಲ ಮರುಪಾವತಿ - 22,441 ಕೋಟಿ ರೂಪಾಯಿ ಇದೆ.

2023-24ನೇ ಸಾಲಿನಲ್ಲಿ ರಾಜಸ್ವ ಜಮೆಗಳು 238410 ಕೋಟಿ ರೂಗಳಾಗುತ್ತದೆ ಎಂದು ಅಂದಾಜು ಮಾಡಲಾಗಿದೆ. ಇದರಲ್ಲಿ ರಾಜ್ಯದ ಒಟ್ಟು ಸ್ವಂತ ತೆರಿಗೆ ರಾಜಸ್ವವು ಜಿಎಸ್‌ಟಿ ಪರಿಹಾರ ಒಳಗೊಂಡಂತೆ 175653 ಕೋಟಿ ರೂಪಾಯಿ ಆಗುತ್ತದೆ ಎಂದು ಅಂದಾಜು ಮಾಡಲಾಗಿದೆ. ತೆರಿಗೆಯೇತರ ರಾಜಸ್ವಗಳಿಂದ 12500 ಕೋಟಿ ರೂಪಾಯಿ ಸಂಗ್ರಹಿಸಬಹುದೆಂದು ನಿರೀಕ್ಷಿಸಲಾಗಿದೆ. ಕೇಂದ್ರ ತೆರಿಗೆಯ ಪಾಲಿನ ರೂಪದಲ್ಲಿ 37,252 ಕೋಟಿ ರೂಗಳನ್ನು ಹಾಗೂ 13,005 ಕೋಟಿ ರೂಗಳನ್ನು ಕೇಂದ್ರ ಸರಕಾರದಿಂದ ಸಹಾಯಾನುದಾನ ರೂಪದಲ್ಲಿ ಪಡೆಯುವುದನ್ನು ರಾಜ್ಯ ಸರಕಾರ ನಿರೀಕ್ಷಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರ ಸಾಂಖ್ಯಿಕ ಕಛೇರಿಯು ಬಿಡುಗಡೆ ಮಾಡಿರುವ ಮುಂಗಡ ಅಂದಾಜುಗಳ ಪ್ರಕಾರ ರಾಜ್ಯದ ಜಿ.ಎಸ್.ಡಿ.ಪಿ ಯು 2022-23ರಲ್ಲಿ ಶೇ. 7.9 ರಷ್ಟು ಬೆಳವಣಿಗೆ ದಾಖಲಿಸಿದೆ. 2021-22 ರಲ್ಲಿ ರಾಜ್ಯದ ಜಿ.ಎಸ್.ಡಿ.ಪಿ ಬೆಳವಣಿಗೆಯು ಶೇ.11 ರಷ್ಟು ದಾಖಲಾಗಿತ್ತು. 2022-23ರ ವಲಯವಾರು ಬೆಳವಣಿಗೆಯನ್ನು ಗಮನಿಸಿದರೆ, ಕೃಷಿ, ಕೈಗಾರಿಕೆ ಮತ್ತು ಸೇವಾ ವಲಯಗಳಲ್ಲಿನ ಬೆಳವಣಿಗೆಯು ಶೇ. 5.5, 5.1 ಮತ್ತು 9.2 ರಷ್ಟು ಬೆಳವಣಿಗೆಯನ್ನು ದಾಖಲಿಸಿರುತ್ತದೆ ಎಂದು ಸಿಎಂ ಹೇಳಿದ್ದಾರೆ.

ಹಿಂದಿನ ಸರ್ಕಾರವು ವಿತ್ತೀಯ ಶಿಸ್ತಿನ ನೀತಿಗಳನ್ನು ಗಾಳಿಗೆ ತೂರಿ ಪ್ರಮುಖ ಇಲಾಖೆಗಳಲ್ಲಿ ಬಾರಿ ಸಂಖ್ಯೆಯ ಕಾಮಗಾರಿಗಳಿಗೆ ಮಂಜೂರಾತಿ ನೀಡಿರುತ್ತದೆ. ಹಿಂದಿನ ಸರ್ಕಾರವು ತನ್ನ ಅಧಿಕಾರಾವಧಿಯಲ್ಲಿ ಒಟ್ಟಾರೆ 94,933 ಕೋಟಿ ರೂ.ಗಳ ಮೊತ್ತದ ಕಾಮಗಾರಿಗಳನ್ನು ಜಲಸಂಪನ್ಮೂಲ, ನಗರಾಭಿವೃದ್ಧಿ, ಲೋಕೋಪಯೋಗಿ ಮತ್ತು ಇತರೆ ಇಲಾಖೆಗಳಲ್ಲಿ ಅನುಮೋದಿಸಿರುತ್ತದೆ. ಈ ಮೇಲ್ಕಂಡ ಇಲಾಖೆಗಳಿಗೆ 2022-23ರ ಆಯವ್ಯಯದಲ್ಲಿ ಕೇವಲ 33,616 ಕೋಟಿ ರೂ.ಗಳ ಅನುದಾನವನ್ನು ನೀಡಿದ್ದರೂ ಹಾಗೂ 2021-22ರ ಅಂತ್ಯಕ್ಕೆ 2,05,986 ಕೋಟಿ ರೂ.ಗಳಷ್ಟು ಮೊತ್ತದ ಬಾಕಿ ಕಾಮಗಾರಿಗಳಿದ್ದರೂ ಸಹ ಹಿಂದಿನ ಸರ್ಕಾರವು ಇದನ್ನು ಲೆಕ್ಕಿಸದೇ 49,116 ಕೋಟಿ ರೂ.ಗಳ ಮೊತ್ತದ ಕಾಮಗಾರಿಗಳನ್ನು ವಿವೇಚನಾರಹಿತವಾಗಿ ಅನುಮೋದಿಸಿರುತ್ತದೆ. 2022-23ರ ಅಂತ್ಯಕ್ಕೆ ಬಾಕಿ ಉಳಿಸಿರುವ ಕಾಮಗಾರಿಗಳ ಒಟ್ಟು ಮೊತ್ತವು 2,55,102 ಕೋಟಿ ರೂ.ಗಳಾಗಿದ್ದು, ಇದನ್ನು ಪೂರ್ಣಗೊಳಿಸಲು ಕನಿಷ್ಟ ಆರು ವರ್ಷಗಳು ಬೇಕಾಗಿದ್ದು, ನಮ್ಮ ಸರ್ಕಾರಕ್ಕೆ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳುವುದು ಸವಾಲಾಗಿ ಪರಿಣಮಿಸಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕ ರಾಜ್ಯವು ಆರ್ಥಿಕ ಶಿಸ್ತನ್ನು ಪಾಲಿಸುವ ರಾಜ್ಯವೆಂದೇ ಹೆಸರಾಗಿದೆ. ಆದರೆ ಹಿಂದಿನ ಸರ್ಕಾರವು ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ಸೋತಿದೆ. ರಾಜ್ಯದ ಒಟ್ಟು ಹೊಣೆಗಾರಿಕೆಗಳು 2017-18ರ ಅಂತ್ಯಕ್ಕೆ 2,45,737 ಕೋಟಿ ರೂ.ಗಳಷ್ಟಿದ್ದು, 2022-23ರ ಅಂತ್ಯಕ್ಕೆ 5,16,788 ಕೋಟಿ ರೂ.ಗಳಿಗೆ ಹೆಚ್ಚಳವಾಗಿದೆ ಹಾಗೂ ರಾಜ್ಯ ಸರ್ಕಾರದ ಸಾಲದ ಮೇಲಿನ ಬಡ್ಡಿ ಪಾವತಿಯು 2017-18ರಲ್ಲಿ ರಾಜಸ್ವ ಸ್ವೀಕೃತಿಗಳ ಶೇ.9.5 ರಷ್ಟಿದ್ದರೆ, 2023-24ರಲ್ಲಿ ರಾಜಸ್ವ ಸ್ವೀಕೃತಿಯ ಶೇ.15.06 ಕ್ಕೆ ಹೆಚ್ಚಳವಾಗಿರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಜಿಎಸ್‌ಟಿ ಪರಿಹಾರ ಕೊರತೆ

ರಾಜ್ಯದಲ್ಲಿ ಜಿ.ಎಸ್.ಟಿ. ತೆರಿಗೆಯನ್ನು ಜಾರಿಗೆ ತರುವ ಸಮಯದಲ್ಲಿ ಕೇಂದ್ರ ಸರ್ಕಾರವು ರಾಜ್ಯದ ಜಿ.ಎಸ್.ಟಿ ತೆರಿಗೆಯು ವರ್ಷವಾರು ಶೇ.14 ರಷ್ಟು ಬೆಳವಣಿಗೆಯಾಗಲಿದೆ ಎಂದು ಭರವಸೆ ನೀಡಿತ್ತು. ಆದರೆ ಕಳೆದ ಐದು ವರ್ಷಗಳ ರಾಜ್ಯದ ಜಿ.ಎಸ್.‌ಟಿ ತೆರಿಗೆ ಸಂಗ್ರಹಣೆಯನ್ನು ಗಮನಿಸಿದರೆ ಕೇಂದ್ರ ಸರ್ಕಾರದ ಭರವಸೆ ಹುಸಿಯಾಗಿರುವುದು ಸಾಬೀತಾಗಿದೆ. ಅಲ್ಲದೇ, ಕೇಂದ್ರ ಸರ್ಕಾರವು ರಾಜ್ಯಗಳಿಗೆ ನೀಡುತ್ತಿದ್ದ ಜಿ.ಎಸ್.ಟಿ. ಪರಿಹಾರವನ್ನು 2022 ಜುಲೈನಿಂದ ಸ್ಥಗಿತಗೊಳಿಸಿರುತ್ತದೆ. ಇದರಿಂದಾಗಿ 2023-24ರ ಆರ್ಥಿಕ ವರ್ಷದಲ್ಲಿಯೇ ಸುಮಾರು 26,954 ಕೋಟಿ ರೂ.ಗಳಷ್ಟು ಜಿ.ಎಸ್.ಟಿ. ಕೊರತೆ ಉಂಟಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿಗೆ ಇದು ಬಹುದೊಡ್ಡ ಆಘಾತ ಉಂಟು ಮಾಡಿದೆ ಎಂದು ಸಿಎಂ ಹೇಳಿದ್ದಾರೆ.

"ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಅಂದರೆ, 2013-14 ರಿಂದ 2017-18ರವರೆಗೆ ಕೈಗಾರಿಕಾ ವಲಯದಲ್ಲಿ ಶೇ. 8.70 ರಷ್ಟು ಬೆಳವಣಿಗೆ ಹಾಗೂ ಸೇವಾ ವಲಯದಲ್ಲಿ ಶೇ. 9.69 ರಷ್ಟು ಬೆಳವಣಿಗೆ ದಾಖಲಾಗಿರುತ್ತದೆ. ಆದರೆ, 2019-20 ರಿಂದ 2022-23ರ ವರೆಗೆ ಕೈಗಾರಿಕಾ ವಲಯದಲ್ಲಿ ಶೇ. 3.86 ರಷ್ಟು ಬೆಳವಣಿಗೆ ಹಾಗೂ ಸೇವಾ ವಲಯದಲ್ಲಿ ಶೇ. 4.25 ರಷ್ಟು ಬೆಳವಣಿಗೆ ದಾಖಲಾಗಿದ್ದು, ಇದು ಕೋವಿಡ್‌ನಿಂದ ತತ್ತರಿಸಿದ ರಾಜ್ಯದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು ಈ ಹಿಂದಿದ್ದ ಸರ್ಕಾರವು ವಿಫಲವಾಗಿರುವುದನ್ನು ಎತ್ತಿ ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ.

 

Whats_app_banner