ಕನ್ನಡ ಸುದ್ದಿ  /  Karnataka  /  Karnataka Cm Oath Ceremony Siddaramaiah Takes Oath As Cm Dk Shivakumar As Dcm In The Presence Of Rahul Gandhi Stalin Uks

Karnataka CM Oath: ಕರ್ನಾಟಕ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ

Karnataka CM Oath: ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಪ್ರಮಾಣ ವಚನ ಸ್ವೀಕರಿಸಿದರು.

ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಮತ್ತು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಇಂದು (ಮೇ20) ಪ್ರಮಾಣ ವಚನ ಸ್ವೀಕರಿಸಿದರು.
ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಮತ್ತು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಇಂದು (ಮೇ20) ಪ್ರಮಾಣ ವಚನ ಸ್ವೀಕರಿಸಿದರು.

ಬೆಂಗಳೂರು: ರಾಜ್ಯರಾಜಧಾನಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭ ನಡೆಯುತ್ತಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​​ ಪ್ರತಿಜ್ಞಾವಿಧಿ ಬೋಧನೆ ಮಾಡಿದರು.

ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರು ಇದಕ್ಕೂ ಮುನ್ನ 2013ರಿಂದ 2018ರ ತನಕ ಮುಖ್ಯಮಂತ್ರಿಯಾಗಿದ್ದರು. ಸಿದ್ದರಾಮಯ್ಯ ಅವರು ದೇವರ ಹೆಸರಿಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಡಿಕೆ ಶಿವಕುಮಾರ್‌ ಇದೇ ಮೊದಲ ಸಲ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಸರ್ಕಾರದಲ್ಲಿ ಅವರು ಏಕೈಕ ಉಪಮುಖ್ಯಮಂತ್ರಿಯಾಗಿ ಇರಲಿದ್ದಾರೆ ಎಂದು ಕಾಂಗ್ರೆಸ್‌ ವರಿಷ್ಠರು ಸ್ಪಷ್ಟಪಡಿಸಿದ್ದಾರೆ. ಡಿಕೆ ಶಿವಕುಮಾರ್‌ ಅವರು ಇಂದು ಗಂಗಾಧರಜ್ಜನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಡಿಕೆ ಶಿವಕುಮಾರ್‌ ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಇಂಧನ ಸಚಿವರಾಗಿ, ಜಲ ಸಂಪನ್ಮೂಲ ಸಚಿವರಾಗಿ, ವೈದ್ಯಕೀಯ ಶಿಕ್ಷಣ ಸಚಿವರಾಗಿ ಕೆಲಸ ಮಾಡಿದ್ದರು.

ಸಚಿವ ಸಂಪುಟಕ್ಕೆ ಎಂಟು ಸಚಿವರ ಸೇರ್ಪಡೆ

ಸಿದ್ದರಾಮಯ್ಯ ಅವರ ಸಚಿವ ಸಂಪುಟಕ್ಕೆ ಇಂದು ಎಂಟು ಸಚಿವರ ಸೇರ್ಪಡೆಯಾಗಿದೆ. ಶಾಸಕರಾದ ಡಾ.ಜಿ.ಪರಮೇಶ್ವರ, ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್‌, ಎಂ.ಬಿ.ಪಾಟೀಲ್‌, ಸತೀಶ್‌ ಜಾರಕಿಹೊಳಿ, ಪ್ರಿಯಾಂಕ್‌ ಖರ್ಗೆ, ರಾಮಲಿಂಗಾ ರೆಡ್ಡಿ, ಬಿ.ಝೆಡ್.‌ ಜಮೀರ್‌ ಅಹ್ಮದ್‌ ಖಾನ್‌ ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಡಾ.ಜಿ. ಪರಮೇಶ್ವರ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್‌, ಎಂ.ಬಿ.ಪಾಟೀಲ್‌, ಸತೀಶ್‌ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ​, ರಾಮಲಿಂಗಾ ರೆಡ್ಡಿ ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು.

ತಾಯಿ ಮತ್ತು ಅಲ್ಲಾಹ್‌ ಹೆಸರಲ್ಲಿ ಜಮೀರ್‌ ಪ್ರಮಾಣ

ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಚಾಮರಾಜಪೇಟೆ ಶಾಸಕ ಬಿ.ಝಡ್.ಜಮೀರ್ ಅಹಮದ್ ಖಾನ್ ಅವರನ್ನು ಆಹ್ವಾನಿಸಿದಾಗ ನೆರೆದಿದ್ದ ಜನರು ಕೇಕೆ ಹಾಕಿ, ಜಯಕಾರ ಕೂಗಿ ಸಂಭ್ರಮಿಸಿದರು. ಜಮೀರ್ ಅವರು ಅಲ್ಲಾಹ್ ಹಾಗೂ ತಮ್ಮ ತಾಯಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ತಾಯಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ಎಲ್ಲರ ಗಮನ ಸೆಳೆಯಿತು.

ವಿಪಕ್ಷ ಮೈತ್ರಿಯ ಒಗ್ಗಟ್ಟು ಪ್ರದರ್ಶನ

ಸಿದ್ದರಾಮಯ್ಯ ಅವರ ಪ್ರಮಾಣ ವಚನ ಸಮಾರಂಭಕ್ಕೆ ಆಗಮಿಸಿದ ವಿವಿಧ ರಾಜ್ಯಗಳ, ವಿವಿಧ ಪ್ರಾದೇಶಿಕ ಪಕ್ಷಗಳ ನಾಯಕರು ಪ್ರಮಾಣ ವಚನ ಕಾರ್ಯಕ್ರಮದ ಬಳಿಕ ಒಗ್ಗಟ್ಟು ಪ್ರದರ್ಶಿಸಿದರು.

ಎಲ್ಲರೂ ಒಟ್ಟಾಗಿ ನಿಂತು ಕೈ ಕೈ ಮೇಲೆತ್ತಿ ಒಗ್ಗಟ್ಟು ಪ್ರದರ್ಶಿಸಿ 2018ರ ಮಹಾಮೈತ್ರಿಯನ್ನು ಮತ್ತೊಮ್ಮೆ ನೆನಪಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌, ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ನ್ಯಾಷನಲ್‌ ಕಾನ್ಫರೆನ್ಸ್‌ ನಾಯಕ ಫಾರೂಕ್‌ ಅಬ್ದುಲ್ಲಾ, ಎನ್‌ಸಿಪಿ ಶರದ್‌ ಪವಾರ್‌, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌, ಕಾಂಗ್ರೆಸ್‌ ನಾಯಕರಾದ ಅಶೋಕ್‌ ಗೆಹ್ಲೋಟ್‌, ಕಮಲನಾಥ್‌, ನಟ ಕಮಲ್‌ಹಾಸನ್‌ ಮತ್ತು ಇತರೆ ಗಣ್ಯರ ಉಪಸ್ಥಿತರಿದ್ದರು.

IPL_Entry_Point