ರಾಜ್ಯದಲ್ಲಿ ಕೋವಿಡ್-19 ಪ್ರಕರಣ ಹೆಚ್ಚಳ: ಸನ್ನದ್ಧರಾಗಿರುವಂತೆ ಆರೋಗ್ಯಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಕನ್ನಡ ಸುದ್ದಿ  /  ಕರ್ನಾಟಕ  /  ರಾಜ್ಯದಲ್ಲಿ ಕೋವಿಡ್-19 ಪ್ರಕರಣ ಹೆಚ್ಚಳ: ಸನ್ನದ್ಧರಾಗಿರುವಂತೆ ಆರೋಗ್ಯಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ರಾಜ್ಯದಲ್ಲಿ ಕೋವಿಡ್-19 ಪ್ರಕರಣ ಹೆಚ್ಚಳ: ಸನ್ನದ್ಧರಾಗಿರುವಂತೆ ಆರೋಗ್ಯಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳನ್ನು ಎದುರಿಸಲು ಸಿದ್ಧರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ (PTI)

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಅಧಿಕಾರಿಗಳು ಸಂಪೂರ್ಣ ಸನ್ನದ್ಧರಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ. ಈಗ ಭಯಪಡುವ ಅಗತ್ಯವಿಲ್ಲ, ಆದರೆ ಪರಿಸ್ಥಿತಿ ಹದಗೆಟ್ಟರೆ ನಾವು ವೆಂಟಿಲೇಟರ್‌ಗಳು, ಆಮ್ಲಜನಕ, ಔಷಧಿ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಸಿದ್ಧವಾಗಿಡಬೇಕು ಎಂದು ಅವರು ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ಹೇಳಿದ್ದಾರೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಹಾಗೂ ಹಿರಿಯ ಅಧಿಕಾರಿಗಳು ಮತ್ತು ವೈದ್ಯಕೀಯ ತಜ್ಞರೊಂದಿಗೆ ಸಭೆ ನಡೆಸಿದ ಸಿಎಂ, ಪೂರ್ವಭಾವಿ ಕ್ರಮಕ್ಕೆ ಒತ್ತು ನೀಡಿದರು. ರಾಜ್ಯದಾದ್ಯಂತದ ಆಸ್ಪತ್ರೆಗಳು ಅಗತ್ಯ ಮೂಲಸೌಕರ್ಯ ಮತ್ತು ಸಿಬ್ಬಂದಿಯೊಂದಿಗೆ ಸನ್ನದ್ಧವಾಗಿರಬೇಕು ಎಂದು ಅವರು ಹೇಳಿದ್ದಾರೆ. ಜಿಲ್ಲಾ ಆಸ್ಪತ್ರೆಗಳು ಸಂಪೂರ್ಣ ಸನ್ನದ್ಧವಾಗಿರಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ ಬೇಡ ಎಂದು ಎಚ್ಚರಿಕೆ ನೀಡಿದ್ದಾರೆ.

ವಯಸ್ಸಾದವರು, ಗರ್ಭಿಣಿಯರು ಮತ್ತು ಹೃದಯ ಅಥವಾ ಶ್ವಾಸಕೋಶದ ಸಮಸ್ಯೆ ಇರುವವರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವಂತೆ ಸಿಎಂ ಸಲಹೆ ನೀಡಿದರು. ಜ್ವರದಂತಹ ರೋಗಲಕ್ಷಣಗಳಿಗಾಗಿ ವಿದ್ಯಾರ್ಥಿಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ಅನಾರೋಗ್ಯದ ಲಕ್ಷಣಗಳಿದ್ದರೆ ಮನೆಗೆ ಕಳುಹಿಸಲು ಶಾಲೆಗಳಿಗೆ ಸೂಚನೆ ನೀಡಲಾಗಿದೆ. ಜ್ವರ ಅಥವಾ ಶೀತದಿಂದ ಬಳಲುತ್ತಿರುವ ಮಕ್ಕಳನ್ನು ಮನೆಯಲ್ಲಿ ಇರಿಸಿಕೊಳ್ಳಲು ಪೋಷಕರಿಗೆ ಸಲಹೆ ನೀಡಲಾಗಿದೆ.

ತೀವ್ರ ಉಸಿರಾಟದ ಸೋಂಕು ಮತ್ತು ಇನ್ಫ್ಲುಯೆನ್ಸ್ ತರಹದ ಅನಾರೋಗ್ಯ ಪ್ರಕರಣಗಳ ನಿಯಮಿತ ಮೇಲ್ವಿಚಾರಣೆಗೆ ಸಿಎಂ ಕರೆ ನೀಡಿದ್ದು, ಈಗಿನ ಪರಿಸ್ಥಿತಿಯನ್ನು ನೋಡಿಕೊಂಡು, ಮುಂದೆ ಪ್ರಕರಣ ವಿಮರ್ಶೆಗಳು ಪ್ರತಿ ವಾರ ಅಥವಾ ಅಗತ್ಯವಿದ್ದರೆ ಹೆಚ್ಚಾಗಿ ನಡೆಯಬೇಕು ಎಂದು ಹೇಳಿದರು. ಪರಿಸ್ಥಿತಿ ಉಲ್ಬಣಗೊಂಡರೆ, ವಿಮಾನಗಳಲ್ಲಿ ಆಗಮಿಸುವ ಎಲ್ಲಾ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಘಟಕಗಳನ್ನು ಸ್ಥಾಪಿಸಬೇಕು ಎಂದು ಅವರು ಹೇಳಿದರು. ಜತೆಗೆ ಸಾರ್ವಜನಿಕ ಆರೋಗ್ಯ ಮಾಹಿತಿ ಮತ್ತು ನವೀಕರಣಗಳನ್ನು ಪ್ರಸಾರ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತೆ ಸಿದ್ದರಾಮಯ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Kiran Kumar I G

TwittereMail
ಕಿರಣ್ ಐ.ಜಿ.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜನರ ಬದುಕು ಸುಧಾರಿಸಬಲ್ಲ ಟೆಕ್‌ ಮತ್ತು ಗ್ಯಾಜೆಟ್ ಇವರ ಆಸಕ್ತಿಯ ಕ್ಷೇತ್ರ. ಯಾವುದೇ ವಿಷಯವಾದರೂ ಶ್ರದ್ಧೆಯಿಂದ ಕಲಿಯಬಲ್ಲೆ, ಬರೆಯಬಲ್ಲೆ ಎನ್ನುವುದು ಇವರ ವಿಶ್ವಾಸ. ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕ ವೆಬ್ ಹಾಗೂ ಟಿವಿ9 ಕನ್ನಡ ಡಿಜಿಟಲ್‌ನ ವಿವಿಧ ವಿಭಾಗಗಳಲ್ಲಿ ಒಟ್ಟು 10 ವರ್ಷ ಕೆಲಸ ಮಾಡಿದ ಅನುಭವ. ಇಮೇಲ್: kiran.kumar@htdigital.in