ಕನ್ನಡ ಸುದ್ದಿ  /  Karnataka  /  Karnataka Election News Bjp Leader Bs Yediyurappa Slams Congress Siddaramaiah On Promise To Hike Reservation Limits Jra

Yediyurappa on Siddaramaiah: ಕಾಂಗ್ರೆಸ್‌ ಗೆದ್ರೆ ತಾನೆ ಮೀಸಲಾತಿ ಹೆಚ್ಚಿಸೋದು; ಸಿದ್ದರಾಮಯ್ಯಗೆ ಬಿಎಸ್‌ವೈ ತಿರುಗೇಟು

Karnataka Election: ಚುನಾವಣೆ ವೇಳೆ ಕಾಂಗ್ರೆಸ್ ನೀಡುವ ಭರವಸೆಗಳನ್ನು ಹಿಂದೆದಿಗೂ ನೆರವೇರಿಸಿಲ್ಲ. ಹೀಗಾಗಿ ಈ ಬಾರಿಯೂ ರಾಜ್ಯದಲ್ಲಿ ಕಾಂಗ್ರೆಸ್‌ ಸೋಲುವುದು ಖಚಿತ ಎಂದು ಬಿಎಸ್‌ ಯಡಿಯೂರಪ್ಪ ಹೇಳಿದ್ದಾರೆ.

ಬಿ ಎಸ್‌ ಯಡಿಯೂರಪ್ಪ
ಬಿ ಎಸ್‌ ಯಡಿಯೂರಪ್ಪ (HT_PRINT)

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ (Karnataka Election 2023)ಯಲ್ಲಿ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಮೀಸಲಾತಿ ಮಿತಿ(Reservation limits)ಯನ್ನು ಶೇ.50ರಿಂದ ಶೇ.75ಕ್ಕೆ ಹೆಚ್ಚಿಸುವುದಾಗಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದರು. ಪ್ರತಿಪಕ್ಷ ನಾಯಕನ ಹೇಳಿಕೆಗೆ ಕಟುವಾಗಿ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa), ಚುನಾವಣೆ ವೇಳೆ ಕೈಪಕ್ಷ ನೀಡುವ ಭರವಸೆಗಳನ್ನು ಹಿಂದೆದಿಗೂ ನೆರವೇರಿಸಿಲ್ಲ. ಹೀಗಾಗಿ ಈ ಬಾರಿಯೂ ರಾಜ್ಯದಲ್ಲಿ ಕಾಂಗ್ರೆಸ್‌ ನೆಲಕಚ್ಚಲಿದೆ ಎಂದು ಹೇಳಿದ್ದಾರೆ.

ಸುದ್ದಿಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಬಿಜೆಪಿ ಹಿರಿಯ ನಾಯಕ, “ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಯಲ್ಲಿ ಹೀನಾಯವಾಗಿ ಸೋಲಲಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಮೀಸಲಾತಿ ಮಿತಿಯನ್ನು ಹೆಚ್ಚಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ನಾವು ರಾಜ್ಯದಲ್ಲಿ ಮತ್ತೆ ಕಮಲ ಅರಳಿಸಲು ಮತ್ತು ಸರ್ಕಾರ ರಚಿಸಲು ನಮ್ಮ ಶಕ್ತಿ ಮೀರಿ ಕೆಲಸ ಮಾಡಲಿದ್ದೇವೆ” ಎಂದು ಹೇಳಿದ್ದಾರೆ.

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ನಂತರ ಹೊಸ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ, ಜನಸಂಖ್ಯೆಯ ಆಧಾರದ ಮೇಲೆ ಕಾಂಗ್ರೆಸ್ ಪಕ್ಷವು ಮೀಸಲಾತಿ ಮಿತಿಯನ್ನು 50 ಶೇಕಡದಿಂದ 75 ಶೇಕಡಕ್ಕೆ ಹೆಚ್ಚಿಸಲಿದೆ. ಎಲ್ಲಾ ಜಾತಿಗಳಿಗೆ ಮೀಸಲಾತಿಯನ್ನು ವಿಸ್ತರಿಸಲು ಬದ್ಧವಾಗಿದೆ ಎಂದು ಹೇಳಿದ್ದರು.

ಸಿದ್ದರಾಮಯ್ಯ ಟ್ವೀಟ್‌ ಹೀಗಿತ್ತು

“ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇಕಡಾ 50ರಿಂದ ಶೇಕಡಾ 75ರವರೆಗೆ ಹೆಚ್ಚಿಸಿ ಎಲ್ಲ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ನೀಡುತ್ತೇವೆ. ನಮ್ಮಲ್ಲಿ ನ್ಯಾಯವಾದಿ ಕಾಂತರಾಜ್ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಮನೆ ಮನೆಗೆ ತೆರಳಿ ವೈಜ್ಞಾನಿಕವಾಗಿ ಗಣತಿ ಮಾಡಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಸಿದ್ಧ ಇದೆ. ಅದರ ಆಧಾರದಲ್ಲಿ ಮೀಸಲಾತಿ ರೂಪಿಸಿದರೆ ಸುಪ್ರೀಂ ಕೋರ್ಟ್ ಕೂಡಾ ಒಪ್ಪಿಕೊಳ್ಳಬಹುದು ಎಂಬ ಭರವಸೆ ನನಗಿದೆ,” ಎಂದು ಅವರು ಟ್ವೀಟ್‌ ಮಾಡಿದ್ದರು.

ಇತ್ತೀಚೆಗಷ್ಟೇ, ಬಿಜೆಪಿಯಿಂದ ಬಂಡಾಯವೆದ್ದ ಹಿರಿಯ ನಾಯಕರಾದ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಅವರ ವಿರುದ್ಧ ಯಡಿಯೂರಪ್ಪ ಅವರು ತೀವ್ರ ವಾಗ್ದಾಳಿ ನಡೆಸಿದ್ದರು.‌ ಆಡಳಿತ ಪಕ್ಷಕ್ಕೆ ದ್ರೋಹ ಬಗೆದಿದ್ದಕ್ಕೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವರು ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಹೇಳಿದ್ದರು.

ಮಾಜಿ ಮುಖ್ಯಮಂತ್ರಿ ಶೆಟ್ಟರ್ ಮತ್ತು ಈ ಹಿಂದೆ ಉಪ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಸವದಿ ಅವರು ಲಿಂಗಾಯತ ಸಮುದಾಯಕ್ಕೆ ಸೇರಿದವರು. ರಾಜ್ಯದ ಚುನಾವಣಾ ಫಲಿತಾಂಶಗಳ ಮೇಲೆ ಈ ಸಮುದಾಯದ ಮತಗಳು ಪ್ರಮುಖ ಪಾತ್ರ ವಹಿಸುತ್ತವೆ.

ಬಿಜೆಪಿ ತೊರೆದಿರುವ ಈ ಪ್ರಮುಖರ ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ, "ಸರ್ಕಾರದಲ್ಲಿ ಪ್ರಮುಖ ಖಾತೆಗಳನ್ನು ವಹಿಸಿಕೊಟ್ಟರೂ ಬಿಜೆಪಿಗೆ ದ್ರೋಹ ಬಗೆದಿರುವ ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್‌ಗೆ ಒಂದೇ ಒಂದು ಮತ ಹಾಕಬೇಡಿ ಎಂದು ನಾನು ಜನರಿಗೆ ಕರೆ ನೀಡುತ್ತೇನೆ. ಈ ಇಬ್ಬರೂ ನಾಯಕರು ಈ ಚುನಾವಣೆಯಲ್ಲಿ ಸೋಲುವುದು ನನಗೆ ನೂರಕ್ಕೆ ನೂರರಷ್ಟು ಖಚಿತವಾಗಿದೆ. ಅದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಯಡಿಯೂರಪ್ಪ ಸುದ್ದಿಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ರಾಜ್ಯದ ಒಟ್ಟು 224 ಸ್ಥಾನಗಳ ವಿಧಾನಸಭಾ ಚುನಾವಣೆಗೆ ಮೇ 10ರಂದು ಒಂದೇ ಹಂತದಲ್ಲಿ ನಡೆಯಲಿದೆ. ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಹೀಗಾಗಿ ಪ್ರಮುಖ ಪಕ್ಷಗಳು ಹಾಗೂ ಪಕ್ಷೇತರರ ಪ್ರಚಾರ ಜೋರಾಗಿ ನಡೆಯುತ್ತಿದೆ.

IPL_Entry_Point