ಕರ್ನಾಟಕ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸೀಟು ಬ್ಲಾಕಿಂಗ್ ದಂಧೆ; 2300ಕ್ಕೂ ಹೆಚ್ಚು ವಿದ್ಯಾರ್ಥಿಗಳ ವಿರುದ್ಧ ಕ್ರಮ
Seat-Blocking Scam: ಕಂಪ್ಯೂಟರ್ ಸೈನ್ಸ್, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಇತರೆ ಸಂಬಂಧಿತ ವಿಷಯಗಳಿರುವ ಪ್ರಮುಖ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸೀಟು ಬ್ಲಾಕಿಂಗ್ ದಂಧೆ ಶಂಕಿಸಲಾಗಿದೆ. ಸೀಟು ಬ್ಲಾಕ್ ಮಾಡುವುದಕ್ಕೆ ಬಳಕೆಯಾಗಿದ್ದ ಐಪಿ ವಿಳಾಸಗಳ ವಿರುದ್ಧ ಕೇಸ್ ದಾಖಲಿಸಲಾಗಿದೆ. 2300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೋಟಿಸ್ ಜಾರಿಯಾಗಿದೆ.
ಬೆಂಗಳೂರು: ಕರ್ನಾಟಕದ ಕೆಲವು ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸೀಟು ಬ್ಲಾಕಿಂಗ್ ದಂಧೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2300ಕ್ಕೂ ಹೆಚ್ಚು ಶಂಕಿತ ವಿದ್ಯಾರ್ಥಿಗಳಿಗೆ ನೋಟಿಸ್ ಜಾರಿಗೊಳಿಸಿದೆ ಎಂದು ದ ಹಿಂದೂ ವರದಿ ಮಾಡಿದೆ. ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ 2024 (ಸಿಇಟಿ 2024) ರ ನಂತರ ಸರ್ಕಾರಿ ಕೋಟಾದ ಸೀಟು ಆಯ್ಕೆಯ ಸಮಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪೋರ್ಟಲ್‌ನಲ್ಲಿ ಬಹು ನಮೂದುಗಳನ್ನು ಮಾಡಿದ ಇಂಟರ್ನೆಟ್ ಪ್ರೋಟೋಕಾಲ್ (IP) ವಿಳಾಸಗಳ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
2300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನೋಟಿಸ್
ಸೀಟು- ಬ್ಲಾಕ್ ಮಾಡಿದ ಆರೋಪ ಎದುರಾದ ನಂತರ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2,300 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೋಟಿಸ್‌ಗಳನ್ನು ಜಾರಿಗೊಳಿಸಿದೆ. ಈಗ ಬಹು ನೋಂದಣಿಗಾಗಿ ಬಳಸಲಾದ ಐಪಿ ವಿಳಾಸಗಳನ್ನು ಕೂಡ ಗುರುತಿಸಿದೆ. ಈ ನಡುವೆ, "ಕೆಲವು ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜುಗಳ ಸೀಟು ಬ್ಲಾಕಿಂಗ್ ದಂಧೆ ಶಂಕೆ ಇದ್ದು ಕ್ರಿಮಿನಲ್ ಕೇಸು ದಾಖಲಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪ್ರಸಕ್ತ ಸಾಲಿನ ಕೌನ್ಸೆಲಿಂಗ್‌ನಲ್ಲಿ ಕೆಲವು ಪ್ರತಿಷ್ಠಿತ ಕಾಲೇಜುಗಳಲ್ಲಿ ಭಾರೀ ಬೇಡಿಕೆಯ ಎಂಜಿನಿಯರಿಂಗ್ ಕೋರ್ಸುಗಳಿಗೆ ಸೀಟು ಸಿಕ್ಕರೂ ಅನೇಕ ವಿದ್ಯಾರ್ಥಿಗಳು ಪ್ರವೇಶ ಪಡೆದಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸಿದಾಗ ವ್ಯವಸ್ಥಿತ ಜಾಲ ಸೀಟು ಬ್ಲಾಕಿಂಗ್ ನಡೆಸುತ್ತಿರುವ ವಿಚಾರದ ಆರೋಪ ಬೆಳಕಿಗೆ ಬಂದಿದೆ. ಹೀಗಾಗಿ ಕ್ರಿಮಿನಲ್ ಕೇಸ್ ದಾಖಲಿಸಿ ತನಿಖೆಗೆ ಒಪ್ಪಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.
ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಸಚಿವರು, ಕೆಲವೆಡೆ ಒಂದೇ ಐಪಿ ವಿಳಾಸದಲ್ಲಿ 10ಕ್ಕೂ ಹೆಚ್ಚು ಸೀಟುಗಳನ್ನು ಬ್ಲಾಕ್ ಮಾಡಲಾಗಿದೆ. ಅಂತಹ ಐಪಿ ಅಡ್ರೆಸ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸರ್ಕಾರ ತೀರ್ಮಾನಿಸಿದೆ ಎಂದರು.
ಯಾವೆಲ್ಲ ಕಾಲೇಜುಗಳಲ್ಲಿ ಸೀಟು ಬ್ಲಾಕಿಂಗ್
ಕಂಪ್ಯೂಟರ್ ಸೈನ್ಸ್, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಇತರೆ ಸಂಬಂಧಿತ ವಿಷಯಗಳಿರುವ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜು (92 ಸೀಟು), ಆಕಾಶ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (82), ನ್ಯೂ ಹೊರೈಜನ್ ಕಾಲೇಜ್ ಆಫ್ ಎಂಜಿನಿಯರಿಂಗ್ (52), ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (45), ದಯಾನಂದ ಸಾಗರ್ ಕಾಲೇಜ್ ಆಫ್ ಇಂಜಿನಿಯರಿಂಗ್ (34), ಸರ್ ಎಂ. ವಿಶ್ವೇಶ್ವರಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (32) ಮತ್ತು ಎಂ.ವಿ.ಜೆ. ಕಾಲೇಜ್ ಆಫ್ ಇಂಜಿನಿಯರಿಂಗ್ (31 ಸೀಟುಗಳು) ಗಳಲ್ಲಿ ಸೀಟು ಬ್ಲಾಕಿಂಗ್ ಶಂಕಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ 3ನೇ ಸುತ್ತಿನ ಮಾಪ್‌ಅಪ್ ಸೀಟು ಹಂಚಿಕೆಯಲ್ಲಿ ಕಂಪ್ಯೂಟರ್ ಸೈನ್ಸ್, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ಸೈಬರ್ ಸೆಕ್ಯುರಿಟಿಯಂತಹ ಅತಿ ಹೆಚ್ಚು ಬೇಡಿಕೆ ಇರುವ ಎಂಜಿನಿಯರಿಂಗ್ ಕೋರ್ಸ್‌ಗಳು ಪ್ರತಿಷ್ಠಿತ ಕಾಲೇಜುಗಳಲ್ಲೇ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಂಚಿಕೆಯಾಗಿವೆ. ಹೀಗೆ ಹಂಚಿಕೆಯಾದ ಸೀಟುಗಳಿಗೆ ಪ್ರವೇಶ ಕಡ್ಡಾಯ. ಆದರೂ ಅವರು ಯಾರೂ ಆಯಾ ಕಾಲೇಜುಗಳಿಗೆ ಪ್ರವೇಶ ಪಡೆದಿಲ್ಲ. ಅಂತಹ 2348 ವಿದ್ಯಾರ್ಥಿಗಳಿಗೆ ನೋಟಿಸ್ ನೀಡಲಾಗಿದೆ. ಈ ನೋಟಿಸ್‌ಗೆ ಶೇ.50ರಷ್ಟು ಮಂದಿ ಉತ್ತರ ನೀಡಿದ್ದು, ಕೆಲ ವಿದ್ಯಾರ್ಥಿಗಳು ನಾವು ಸೀಟು ಆಯ್ಕೆ ಪ್ರಕ್ರಿಯೆಯಲ್ಲೇ ಭಾಗವಹಿಸಿಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ ಎಂದು ಸಚಿವರು ಹೇಳಿದರು.