ನಟ ದರ್ಶನ್​, ಪವಿತ್ರಾ ಸೇರಿ 7 ಆರೋಪಿಗಳಿಗೆ ಮತ್ತೆ ಸಂಕಷ್ಟ; ಜಾಮೀನು ರದ್ದುಗೊಳಿಸೋಕೆ ಸುಪ್ರೀಂ ಮೊರೆ, ವಕೀಲರ ನೇಮಕ
ಕನ್ನಡ ಸುದ್ದಿ  /  ಕರ್ನಾಟಕ  /  ನಟ ದರ್ಶನ್​, ಪವಿತ್ರಾ ಸೇರಿ 7 ಆರೋಪಿಗಳಿಗೆ ಮತ್ತೆ ಸಂಕಷ್ಟ; ಜಾಮೀನು ರದ್ದುಗೊಳಿಸೋಕೆ ಸುಪ್ರೀಂ ಮೊರೆ, ವಕೀಲರ ನೇಮಕ

ನಟ ದರ್ಶನ್​, ಪವಿತ್ರಾ ಸೇರಿ 7 ಆರೋಪಿಗಳಿಗೆ ಮತ್ತೆ ಸಂಕಷ್ಟ; ಜಾಮೀನು ರದ್ದುಗೊಳಿಸೋಕೆ ಸುಪ್ರೀಂ ಮೊರೆ, ವಕೀಲರ ನೇಮಕ

Renukaswamy Murder Case: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಜಾಮೀನು ಅವರ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಲು ಗೃಹ ಇಲಾಖೆ ಅನುಮತಿ ನೀಡಿದೆ. (ವರದಿ ಎಚ್. ಮಾರುತಿ)

ನಟ ದರ್ಶನ್​, ಪವಿತ್ರಾ ಸೇರಿ 7 ಆರೋಪಿಗಳಿಗೆ ಮತ್ತೆ ಸಂಕಷ್ಟ; ಜಾಮೀನು ರದ್ದುಗೊಳಿಸೋಕೆ ಸುಪ್ರೀಂ ಮೊರೆ, ವಕೀಲರ ನೇಮಕ
ನಟ ದರ್ಶನ್​, ಪವಿತ್ರಾ ಸೇರಿ 7 ಆರೋಪಿಗಳಿಗೆ ಮತ್ತೆ ಸಂಕಷ್ಟ; ಜಾಮೀನು ರದ್ದುಗೊಳಿಸೋಕೆ ಸುಪ್ರೀಂ ಮೊರೆ, ವಕೀಲರ ನೇಮಕ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿರುವ ನಟ ದರ್ಶನ್ ತೂಗುದೀಪ, ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳಿಗೆ ಸಂಕಷ್ಟ ಎದುರಾಗಿದೆ. ಇವರೆಲ್ಲರಿಗೆ ಹೈಕೋರ್ಟ್ ನೀಡಿರುವ ರೆಗ್ಯುಲರ್ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ನಗರ ಪೊಲೀಸರಿಗೆ ಗೃಹ ಇಲಾಖೆ ಅನುಮತಿ ನೀಡಿದೆ. ದರ್ಶನ್ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಲು ಪೊಲೀಸರು ಗೃಹ ಇಲಾಖೆಗೆ ಮನವಿ ಸಲ್ಲಿಸಿದ್ದರು. ಇದೀಗ ಸರ್ಕಾರ ಅಸ್ತು ಎಂದಿದ್ದು ಈ ಪ್ರಕರಣದ ಪ್ರಮುಖ ಆರೋಪಿಗಳಾದ ದರ್ಶನ್ ಅವರ ಆಪ್ತೆ ಪವಿತ್ರಾಗೌಡ ಸೇರಿದಂತೆ ಏಳು ಆರೋಪಿಗಳಿಗೆ ಸಂಕಷ್ಟ ಎದುರಾಗಿದೆ.

ಬೆಂಗಳೂರು ಪೊಲೀಸರ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಲು ಹಿರಿಯ ವಕೀಲರಾದ ಅನಿಲ್ ಸಿ ನಿಶಾನಿ ಹಾಗೂ ಸಿದ್ದಾರ್ಥ್ ಲುಥಾರ ಅವರನ್ನು ನೇಮಕ ಮಾಡಲಾಗಿದೆ. ಡಿಸೆಂಬರ್ 13ರಂದು ಹೈಕೋರ್ಟ್ ಏಕಸದಸ್ಯ ಪೀಠವು ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಮಂದಿ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅನುಮತಿ ಕೋರಿ ನಗರ ಪೊಲೀಸರು, ಗೃಹ ಇಲಾಖೆಗೆ ಪತ್ರ ಬರೆದಿದ್ದರು. ಇದೀಗ ಗೃಹ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ. ಅನಿಲ್ ಸಿ ನಿಶಾನಿ ಹಾಗೂ ಹೈಕೋರ್ಟ್‌ನ ಪಬ್ಲಿಕ್ ಪ್ರಾಸಿಕ್ಯೂಟರ್ ಅವರಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜವಾಬ್ದಾರಿ ವಹಿಸಲಾಗಿದೆ.

ದರ್ಶನ್, ಬಳ್ಳಾರಿ ಜೈಲಿನಲ್ಲಿದ್ದಾಗ ಬೆನ್ನುನೋವು ಕಾಣಿಸಿಕೊಂಡಿದ್ದು, ವೈದ್ಯಕೀಯ ಚಿಕಿತ್ಸೆಗೆ ಮಧ್ಯಂತರ ಜಾಮೀನು ನೀಡುವಂತೆ ಕೋರಿ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಸುದೀರ್ಘ ವಾದ ವಿವಾದದ ನಂತರ ಹೈಕೋರ್ಟ್ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ನೀಡಿತ್ತು. ಬಳ್ಳಾರಿ ಜೈಲಿನಿಂದ ದರ್ಶನ್ ಬಿಡುಗಡೆಯಾಗಿ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ ಶಸ್ತ್ರಚಿಕಿತ್ಸೆಗೆ ಒಳಗಾಗಿರಲಿಲ್ಲ. ನಂತರ, ದರ್ಶನ್‌ಗೆ ರೆಗ್ಯುಲರ್ ಜಾಮೀನು ಸಿಕ್ಕಿತ್ತು. ಮೈಸೂರಿಗೆ ತೆರಳಲು ದರ್ಶನ್ ಹೈಕೋರ್ಟ್‌ನಿಂದ ಅನುಮತಿ ಪಡೆದುಕೊಂಡಿದ್ದರು. ಸದ್ಯ ಅವರು ಮೈಸೂರಿನ ಫಾರ್ಮ್ ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಮೇಲ್ಮನವಿ ಸಲ್ಲಿಸಲು ಅನುಮತಿ ನೀಡಿರುವ ಕಡತಗಳನ್ನು ಗೃಹ ಇಲಾಖೆಯಿಂದ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಕನ್ನಡದಿಂದ ಇಂಗ್ಲಿಷ್‌ಗೆ ದೋಷಾರೋಪ ಪಟ್ಟಿ ಭಾಷಾಂತರ ಕೆಲಸ ಪೂರ್ಣಗೊಂಡಿದೆ. ಮಂಗಳವಾರ ಅಥವಾ ಬುಧವಾರ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ನಗರ ಪೊಲೀಸ್ ಮೂಲಗಳು ತಿಳಿಸಿವೆ.

ಜೂನ್ 8ರಂದು ನಡೆದಿತ್ತು ರೇಣುಕಾಸ್ವಾಮಿ ಹತ್ಯೆ

ಜೂನ್ 8ರಂದು 33 ವರ್ಷದ ರೇಣುಕಾಸ್ವಾಮಿ ಹತ್ಯೆ ನಡೆದಿತ್ತು. ಮಾಗಡಿ ರಸ್ತೆಯ ಸುಮನಹಳ್ಳಿ ಬಳಿಯ ಚರಂಡಿಯಲ್ಲಿ ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು. ಪ್ರಕರಣದ ತನಿಖೆ ಆರಂಭಿಸಿದ್ದ ಪೊಲೀಸರಿಗೆ ಇದು ಕೊಲೆ ಎನ್ನುವುದು ಖಚಿತವಾಗಿತ್ತು. ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸರು ಮೈಸೂರಿನಲ್ಲಿ ದರ್ಶನ್ ಅವರನ್ನು ಜೂನ್ 11ರಂದು ಬಂಧಿಸಿದ್ದರು. ತನ್ನ ಆಪ್ತೆಯಾಗಿರುವ ಪವಿತ್ರಾಗೌಡಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ ಎಂಬ ಕಾರಣಕ್ಕೆ ದರ್ಶನ್ ಸಿಟ್ಟಿಗೆದ್ದಿದ್ದರು. ದರ್ಶನ್ ಸಹಚರರು ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಪುಸಲಾಯಿಸಿ ಬೆಂಗಳೂರಿಗೆ ಕರೆ ತಂದಿದ್ದರು. ರಾಜರಾಜೇಶ್ವರಿ ನಗರದ ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಲಾಗಿತ್ತು. ಇದರಿಂದ ಆತ ಮೃತಪಟ್ಟಿದ್ದ. ಕೊಲೆ ಆರೋಪದ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ 17 ಮಂದಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಹೊಸ ವರ್ಷ ಹೇಗಿರುತ್ತೆ? ಇಲ್ಲಿದೆ 2025 ರ ರಾಶಿವಾರು ಮಾಹಿತಿ

2025 ನಿಮಗೆ ಏನೆಲ್ಲಾ ಶುಭಫಲಗಳನ್ನು ನೀಡಲಿದೆ? ಹೊಸ ವರ್ಷದಲ್ಲಿ ಬದಲಾವಣೆಗಳು, ಉದ್ಯೋಗ ಪ್ರಗತಿ, ವಿದ್ಯಾಭ್ಯಾಸ, ಪ್ರೀತಿ, ದಾಂಪತ್ಯ ಸೇರಿದಂತೆ ನೀವು ತಿಳಿಯಬಯಸುವ ಸಮಗ್ರ ಮಾಹಿತಿ ಇಲ್ಲಿದೆ. ಪ್ರತಿ ರಾಶಿಯ ಸಮಗ್ರ ವಿವರ ಇಲ್ಲಿ ಲಭ್ಯ. ನೀವು ಈವರೆಗೆ ನೋಡಿಲ್ಲ ಅಂತಾದ್ರೆ ಬೇಗ ನೋಡಿ. ಈಗಾಗಲೇ ನೋಡಿದ್ದರೆ ನಿಮ್ಮ ಆಪ್ತರಿಗೂ ಈ ಬಗ್ಗೆ ತಿಳಿಸಿ. kannada.hindustantimes.com/astrology/yearly-horoscope

Whats_app_banner