ಮುಡಾ ಕೇಸ್ ಸಿಬಿಐಗೆ ಇಲ್ಲ, ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಸ್ನೇಹಮಯಿ ಕೃಷ್ಣ ಅರ್ಜಿ ತಿರಸ್ಕರಿಸಿದ ಕರ್ನಾಟಕ ಹೈಕೋರ್ಟ್
ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಸೈಟು ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿದ ಮುಡಾ ಕೇಸ್ ತನಿಖೆಯನ್ನು ಸಿಬಿಐಗೆ ನೀಡಬೇಕಾದ್ದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಇಂದು (ಫೆ 7) ತೀರ್ಪು ನೀಡಿದೆ. ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದ್ದು, ಇದರಿಂದ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ವಿರುದ್ಧ ಆರೋಪಗಳು ಎದುರಾಗಿರುವಂತಹ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಸೈಟು ಹಂಚಿಕೆ ಅಕ್ರಮದ ಮುಡಾ ಹಗರಣ ತನಿಖೆಯನ್ನು ಸಿಬಿಐಗೆ ವಹಿಸಬೇಕಾದ್ದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ (ಫೆ 7) ತೀರ್ಪು ನೀಡಿದೆ. ಇದರೊಂದಿಗೆ ಸಿಎಂ ವಿರುದ್ಧದ ಮುಡಾ ತನಿಖೆ ಸಿಬಿಐಗೆ ವಹಿಸುವಂತೆ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ.
ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಭಾಗಿಯಾಗಿದ್ದಾರೆ ಎನ್ನಲಾದ ಮುಡಾ ಹಗರಣ ತನಿಖೆಯ ಸಿಬಿಐಗೆ ವಹಿಸಬೇಕು ಎಂದು ಕೋರಿ ದಾಖಲಾಗಿದ್ದ ಅರ್ಜಿಯ ಮೇಲಿನ ತೀರ್ಪ ಫೆ.7ರಂದು ಹೈಕೋರ್ಟ್‌ನ ಧಾರವಾಡ ಪೀಠದಲ್ಲಿ ವಿಚಾರಣೆಯಲ್ಲಿತ್ತು. ಸಿಎಂ ವಿರುದ್ಧದ ಮುಡಾ ತನಿಖೆ ಸಿಬಿಐಗೆ ವಹಿಸುವಂತೆ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ಈಗ ಇದರ ತೀರ್ಪು ಬಂದಿದ್ದು, ಸ್ನೇಹಮಯಿ ಕೃಷ್ಣಗೆ ಹಿನ್ನಡೆಯಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ನೇಹಮಯಿ ಕೃಷ್ಣ, ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅಪೀಲು ಹೋಗುವುದಾಗಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಮುಡಾ ಹಗರಣ ಕೇಸ್ ವಿಚಾರ; ಸ್ನೇಹಮಯಿ ಕೃಷ್ಣ ಅರ್ಜಿಯಲ್ಲೇನಿತ್ತು
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಕೇಳಿಬಂದಿರುವ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿ ಕಾರ) ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ಈ ತಕರಾರು ಅರ್ಜಿ ವಿಚಾರಣೆಯನ್ನು 2025ರ ಜ.27ರಂದು ಪೂರ್ಣಗೊಳಿಸಿ ಕಾಯ್ದಿರಿಸಿರುವ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಇಂದು (ಫೆ 7) ತೀರ್ಪು ಪ್ರಕಟಿಸಿದೆ.
ಈ ಹಿಂದೆಯೇ ಮುಡಾ ಪ್ರಕರಣದ ತನಿಖೆ ನಡೆಯುವುದು ಅತ್ಯಗತ್ಯವಿದೆ ಎಂದು ತೀರ್ಮಾನಿಸಿ ಪೊಲೀಸ್ ತನಿಖೆಗೆ ಅನುಮತಿಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ಈಗ ಸಿಬಿಐ ತನಿಖೆ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದೆ.
ಇದಕ್ಕೂ ಮೊದಲು, ಮುಡಾ ನಿವೇಶನ ಹಂಚಿಕೆ ಅಕ್ರಮದ ಪ್ರಕರಣದ ಪ್ರಾಸಿಕ್ಯೂಷನ್ ಮತ್ತು ಪೊಲೀಸ್ ತನಿಖೆಗೆ ರಾಜ್ಯಪಾಲರು ನೀಡಿದ್ದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋಟ್೯ಗೆ 2024ರ ಆ.19ರಂದು ತಕರಾರು ಸಲ್ಲಿಸಿದ್ದರು. ಆ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ 2024ರ ಸೆ.24ರಂದು ತನಿಖೆಗೆ ವಜಾಗೊಳಿಸಿತ್ತು.
ಮುಡಾ ಸೈಟು ಹಂಚಿಕೆ ಅಕ್ರಮ- ಮುಖ್ಯಮಂತ್ರಿ ಕುಟುಂಬದ ವಿರುದ್ಧ ಆರೋಪವೇನು
ಮೈಸೂರು ದೇವನೂರು 3ನೇ ಹಂತದ ಬಡಾವಣೆ ಅಭಿವೃದ್ಧಿಗಾಗಿ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ (ಮುಡಾ) ವಶಪಡಿಸಿಕೊಂಡಿದೆ ಎನ್ನಲಾದ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಸೇರಿದ ಕೆಸರೆ ಗ್ರಾಮದ ಸರ್ವೇ ನಂ.464 ರ 3 ಎಕರೆ 16 ಗುಂಟೆ ಜಮೀನಿನ ಬದಲಿಗೆ ಸುಮಾರು 56 ಕೋಟಿ ರೂಪಾಯಿ ಮೌಲ್ಯದ 14 ನಿವೇಶನಗಳನ್ನು ಅಕ್ರಮವಾಗಿ ನೀಡಲಾಗಿದೆ. ಈ ಸಂಬಂಧ ತನಿಖೆ/ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಸ್ನೇಹಮಯಿ ಕೃಷ್ಣ ಸೇರಿ ಮೂವರು 2024ರ ಜೂನ್-ಜುಲೈನಲ್ಲಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿದ ರಾಜ್ಯಪಾಲರು, ಈ ಹಗರಣದ ತನಿಖೆ/ಪ್ರಾಸಿಕ್ಯೂ ಷನ್‌ಗೆ ಅನುಮತಿ ನೀಡಿ ಆ.17ರಂದು ಆದೇಶಿಸಿದ್ದರು. ಅದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ.19ರಂದು ತಕರಾರು ಅರ್ಜಿ ಹೈಕೋರ್ಟ್ ಸಲ್ಲಿಸಿದ್ದರು. ಈ ಆದೇಶ ಹೊರಬಿದ್ದ ಬೆನ್ನಲ್ಲೇ ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಎಫ್‌ಐಆರ್ ದಾಖಲಾದ ದಿನವೇ ಅಂದರೆ ಸೆ.27ರಂದು ಇಡೀ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆಯನ್ನು ಜ.27ರಂದು ಪೂರ್ಣಗೊಳಿಸಿದ್ದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು. ಅಂದು ಇಂದು ಪ್ರಕಟವಾಗಿದೆ.
